ರಾಮನಗರದ ಬಿಡದಿ ಕೇತಗಾನಹಳ್ಳಿ ಬಳಿ ಜಮೀನು ಒತ್ತುವರಿ ತೆರವು ಸಂಬಂಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಸಲ್ಲಿಸಿದ್ದ ಪ್ರಕರಣದಲ್ಲಿ ಮಹತ್ವದ ಆದೇಶ ಹೊರಬಿದ್ದಿದೆ.
ನವದೆಹಲಿ (ಮಾ.31): ರಾಮನಗರದ ಬಿಡದಿ ಕೇತಗಾನಹಳ್ಳಿ ಬಳಿ ಜಮೀನು ಒತ್ತುವರಿ ತೆರವು ಸಂಬಂಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಸಲ್ಲಿಸಿದ್ದ ಪ್ರಕರಣದಲ್ಲಿ ಮಹತ್ವದ ಆದೇಶ ಹೊರಬಿದ್ದಿದೆ. ಅರ್ಜಿ ಇತ್ಯರ್ಥಪಡಿಸಿದ ಸುಪ್ರೀಂಕೋರ್ಟ್, ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಕುಮಾರಸ್ವಾಮಿಯವರಿಗೆ ಸೂಚಿಸಿದೆ. ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ದಾಖಲಿಸಿದ್ದ ಪ್ರಕರಣದಲ್ಲಿ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಕುಮಾರಸ್ವಾಮಿ ಸುಪ್ರೀಂಕೋರ್ಟ್ ಕದತಟ್ಟಿದ್ದರು. ನ್ಯಾ.ಪಂಕಜ್ ಮಿತ್ತಲ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಿತು. ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಮ್ಮನ್ನು ಪ್ರತಿವಾದಿಯಾಗಿಯೇ ಮಾಡಿಲ್ಲ. ಆದರೂ ತೆರವಿಗೆ ನೋಟೀಸ್ ನೀಡಲಾಗಿದೆ ಎಂದು ಅರ್ಜಿದಾರರ ಪರ ವಕೀಲ ಮುಕುಲ್ ರೊಹಟಗಿ ವಾದ ಮಂಡಿಸಿದರು.
ಪ್ರಕರಣದ ಹಿನ್ನೆಲೆ: ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಸಂಬಂಧಿಗಳು 2014ರಲ್ಲಿ ರಾಮನಗರದ ಬಿಡಿದಿ ಬಳಿಯ ಕೇತಗಾನಹಳ್ಳಿಯಲ್ಲಿ ವಿವಿಧ ಎಂಟು ಸರ್ವೆ ನಂಬರ್ಗಳ ಒಟ್ಟು 14 ಎಕರೆ ಭೂಮಿ ಒತ್ತುವರಿ ಮಾಡಿದ್ದಾರೆಂಬ ಆರೋಪವಿದೆ. ಈ ಸಂಬಂಧ ಲೋಕಾಯುಕ್ತ ನೀಡಿದ್ದ ವರದಿ ಜಾರಿಗೊಳಿಸಲು ಹೈಕೋರ್ಟ್ ಆದೇಶ ನೀಡಿದ್ದರೂ ಅದನ್ನು ಪಾಲನೆ ಮಾಡಿಲ್ಲ ಎಂದು ಆರೋಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ಅವರು ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದರು. ಈ ಅರ್ಜಿ ಪರಿಶೀಲಿಸಿದ್ದ ಹೈಕೋರ್ಟ್ ವಿಭಾಗೀಯ ಪೀಠ ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿತ್ತು. ಆನಂತರ ಜಮೀನಿನ ಸರ್ವೆ ಕಾರ್ಯ ನಡೆಸಿದ ಸ್ಥಳೀಯ ತಹಸೀಲ್ದಾರ್, ಎಚ್‌ಡಿಕೆ ಮತ್ತಿತರರಿಗೆ ಕಾನೂನಿನ್ವಯ ನೋಟಿಸ್ ಜಾರಿಗೊಳಿಸಿದ್ದರು. ಅದನ್ನು ಪ್ರಶ್ನಿಸಿ ಎಚ್‌ಡಿಕೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಅಕ್ರಮ ಗಣಿ ಕೇಸ್: ಎಚ್.ಡಿ.ಕುಮಾರಸ್ವಾಮಿಗೆ ಸಂಕಷ್ಟ, ಹೈಕೋರ್ಟ್ ಹೇಳಿದ್ದೇನು?
ಚುನಾವಣೆಯ ಷಡ್ಯಂತ್ರ ಬಗ್ಗೆ ಚರ್ಚೆ ಮಾಡುವುದಿಲ್ಲ: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ತರಲು ಶ್ರಮಿಸಲಾಗುವುದು ಎಂದು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ತಾಲೂಕಿನ ಅಮೃತೇಶ್ವರನಹಳ್ಳಿಯಲ್ಲಿ ನಿಖಿಲ್ ಕುಮಾರಸ್ವಾಮಿ ಯುವಕರ ಅಭಿಮಾನಿಗಳ ಸಂಘವನ್ನು ಗುರುವಾರ ಉದ್ಘಾಟಿಸಿ ಮಾತನಾಡಿ, ಜೆಡಿಎಸ್ ಪ್ರಾಮಾಣಿಕ ಕಾರ್ಯಕರ್ತರು ಹಾಗೂ ಅಭಿಮಾನಿಗಳು ನನ್ನ ಹೃದಯದಲ್ಲಿದ್ದಾರೆ. ನನ್ನ ಹೆಸರಿನಲ್ಲಿ ಅಭಿಮಾನಿಗಳ ಸಂಘ ಕಟ್ಟಿ ಪಕ್ಷ ಸಂಘಟನೆಗೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆ ಎಂದರು. ರಾಜಕೀಯವಾಗಿ ಜೆಡಿಎಸ್ ಸ್ಪಲ್ಪ ಕುಗ್ಗುದೆ ಎಂಬ ಸಂದರ್ಭದಲ್ಲಿ ರಾಜ್ಯದಲ್ಲಿ ಪಕ್ಷಕ್ಕೆ ಬೆನ್ನುತಟ್ಟಿ ಬಲ ತುಂಬಿದ ಜಿಲ್ಲೆ ಇದ್ದರೆ ಅದು ಮಂಡ್ಯ ಮಾತ್ರ. ಜೆಡಿಎಸ್‌ಗೆ ಶಕ್ತಿ ನೀಡಿದ ಕೀರ್ತಿ ಮಂಡ್ಯಕ್ಕೆ ಸೇರುತ್ತದೆ ಎಂದರು.2019ರ ಲೋಕಸಭಾ ಚುನಾವಣೆಯ ಷಡ್ಯಂತ್ರ ಬಗ್ಗೆ ಚರ್ಚೆ ಮಾಡುವುದಿಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ನೀವೆಲ್ಲರೂ ಅಪೇಕ್ಷೆಪಟ್ಟರೂ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯದ 31 ಜಿಲ್ಲೆಗಳ ಲಕ್ಷಾಂತರ ಕಾರ್ಯಕರ್ತರು ಕಟ್ಟಿ ಬೆಳೆಸಿದ ಪ್ರಾದೇಶಿಕ ಪಕ್ಷಕ್ಕೆ ಭದ್ರ ಬುನಾದಿ ಹಾಕುವ ದೃಷ್ಟಿಯಿಂದ ನಾನು ಸದ್ಯದ ಮಟ್ಟಿಗೆ ಚುನಾವಣೆ ಬೇಡ ಎನ್ನುವ ತೀರ್ಮಾನಕ್ಕೆ ಬರಬೇಕಾಯಿತು ಎಂದರು.