
ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ದೆಹಲಿ ರಾಜಕೀಯ ಕಾರಿಡಾರ್‌ನಲ್ಲಿ ಸಂಚಲನಕ್ಕೆ ಕಾರಣವಾಗಿದೆ.
ಹಾಲಿ ಉತ್ತರಪ್ರದೇಶದ ರಾಯ್‌ಬರೇಲಿ ಸಂಸದೆಯಾಗಿರುವ ಸೋನಿಯಾ ಅವರಿಗೆ ಮುಂದಿನ ಚುನಾವಣೆಯಲ್ಲಿ ಅಲ್ಲಿ ಹಿನ್ನಡೆಯಾಗಬಹುದು ಎಂಬ ಭೀತಿ ಇದೆ. ರಾಮಮಂದಿರ ವಿಷಯ ಮುಂದಿಟ್ಟುಕೊಂಡು ರಾಜ್ಯದ ಎಲ್ಲ 80 ಕ್ಷೇತ್ರ ಗೆಲ್ಲಲು ಬಿಜೆಪಿ ತಂತ್ರ ರೂಪಿಸಿದೆ. ಹೀಗಾಗಿ ಉತ್ತರಪ್ರದೇಶ ಬಿಟ್ಟು ತೆಲಂಗಾಣ ರಾಜ್ಯ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಅವರನ್ನು ತೆಲಂಗಾಣದಿಂದ ಕಣಕ್ಕೆ ಇಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ವರದಿಗಳು ತಿಳಿಸಿವೆ.
ಈ ಹಿಂದೆ ಸೋನಿಯಾ ಗಾಂಧಿ ಅವರ ಅತ್ತೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತೆಲಂಗಾಣದ ಮೇದಕ್ ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾಗಿದ್ದರು. ಸೋನಿಯಾ ಅವರು 1999ರಲ್ಲಿ ಕರ್ನಾಟಕದ ಬಳ್ಳಾರಿಯಿಂದ ಗೆದ್ದಿದ್ದರು. ತೆಲಂಗಾಣಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಬಿಜೆಪಿ ಪ್ರಬಲವಾಗಿ ಇರುವುದರಿಂದ ಅವರು ಕರ್ನಾಟಕದಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗಿದೆ.
ಆರೋಗ್ಯ ಸಂಬಂಧಿ ಸಮಸ್ಯೆ ಹೊಂದಿರುವ ಸೋನಿಯಾ ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದೇ ಅನುಮಾನ ಎಂಬ ವಾತಾವರಣ ಇರುವಾಗ ಅವರ ತೆಲಂಗಾಣ ಸ್ಪರ್ಧೆ ಸುದ್ದಿ ಭಾರಿ ಚರ್ಚೆಗೆ ಕಾರಣವಾಗಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಅವರ ಪುತ್ರ ರಾಹುಲ್ ಗಾಂಧಿ ಅವರು ಉತ್ತರಪ್ರದೇಶದ ಅಮೇಥಿ ಹಾಗೂ ಕೇರಳದ ವಯನಾಡ್‌ನಿಂದ ಕಣಕ್ಕೆ ಇಳಿದಿದ್ದರು. ಈಗ ಸೋನಿಯಾ ಅವರು ಕೂಡ ದಕ್ಷಿಣದತ್ತ ಬಂದರೆ ಬೇರೆ ವ್ಯಾಖ್ಯಾನಗಳು ವ್ಯಕ್ತವಾಗುತ್ತವೆ ಎಂಬ ಚರ್ಚೆ ಇದೆ. ಹೀಗಾಗಿ ಅವರು ತೆಲಂಗಾಣದ ಜತೆ ರಾಯ್‌ಬರೇಲಿಯಲ್ಲೂ ಸ್ಪರ್ಧಿಸುವ ಸಾಧ್ಯತೆ ಇದೆ. ಇಲ್ಲವಾದಲ್ಲಿ ರಾಯ್‌ಬರೇಲಿಯನ್ನು ಪುತ್ರಿ ಪ್ರಿಯಾಂಕಾ ಅವರಿಗೆ ಬಿಟ್ಟು ತೆಲಂಗಾಣದಲ್ಲಿ ಸ್ಪರ್ಧಿಸಬಹುದು ಎಂದೂ ಹೇಳಲಾಗುತ್ತಿದೆ.
ತಿಹಾರ್ ಜೈಲಿನಲ್ಲಿದ್ದಾಗ ಸೋನಿಯಾಗಾಂಧಿ ಹೇಳಿದಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತಂದಿದ್ದೇನೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ