ರಾಜ್ಯದ 9 ಜಿಲ್ಲೆ ಸೇರಿಸಿ ಕೈಗಾರಿಕಾ ಕಾರಿಡಾರ್‌ ಸ್ಥಾಪನೆಗೆ ಎಚ್.ಡಿ.ಕುಮಾರಸ್ವಾಮಿ ಮನವಿ

Published : Nov 14, 2025, 09:43 AM IST
HD Kumaraswamy meeting Piyush Goyal

ಸಾರಾಂಶ

ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕದಾದ್ಯಂತ ಸೂಕ್ತ ಕೈಗಾರಿಕಾ ಕಾರಿಡಾರ್ ಯೋಜನೆಯ ಚೌಕಟ್ಟಿನಡಿಯಲ್ಲಿ ಕೈಗಾರಿಕಾ ಪಾರ್ಕ್‌ಗಳನ್ನು ಸ್ಥಾಪಿಸುವ ಕುರಿತಂತೆ ಸಮಾಲೋಚನೆ ನಡೆಸಲಾಯಿತು ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ನವದೆಹಲಿ (ನ.14): ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಅಗತ್ಯವೆನಿಸಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (ಎನ್‌ಐಸಿಡಿಪಿ) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಶ್‌ ಗೋಯಲ್‌ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿಯಲ್ಲಿ ವಾಣಿಜ್ಯ ಸಚಿವಾಲಯದ ಕಚೇರಿಗೆ ತೆರಳಿ ಸಚಿವ ಗೋಯಲ್‌ ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು, ಈ ಯೋಜನೆ ಕುರಿತ ಮನವಿಯನ್ನು ಸಲ್ಲಿಸಿ ರಾಜ್ಯದ ಕೈಗಾರಿಕಾಭಿವೃದ್ಧಿ ಬಗ್ಗೆ ವಿವಿಧ ಆಯಾಮಗಳಲ್ಲಿ ಚರ್ಚೆ ನಡೆಸಿದರು.

‘ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ಸುವಿಶಾಲವಾದ, ಬಹುವ್ಯಾಪ್ತಿಯುಳ್ಳ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು ಅನುಷ್ಠಾನ ಮಾಡಬೇಕೆಂದು ಗೋಯಲ್‌ ಅವರನ್ನು ಕೋರಿದೆ. ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕದಾದ್ಯಂತ ಸೂಕ್ತ ಕೈಗಾರಿಕಾ ಕಾರಿಡಾರ್ ಯೋಜನೆಯ ಚೌಕಟ್ಟಿನಡಿಯಲ್ಲಿ ಕೈಗಾರಿಕಾ ಪಾರ್ಕ್‌ಗಳನ್ನು ಸ್ಥಾಪಿಸುವ ಕುರಿತಂತೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು’ ಎಂದು ಕುಮಾರಸ್ವಾಮಿ ತಿಳಿಸಿದರು.

ಪ್ರಸ್ತಾವಿತ ಕೈಗಾರಿಕಾ ಪಾರ್ಕ್‌ಗಳು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವ, ಪ್ರಾದೇಶಿಕ ಪೂರೈಕೆ ಸರಪಳಿಯ ಸಂಪರ್ಕಗಳನ್ನು ಮತ್ತಷ್ಟು ಬಲಪಡಿಸಲಿವೆ. ಈ ಪಾರ್ಕ್‌ಗಳು ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರಿನಲ್ಲಿ ಸಾಗಣೆ ಮತ್ತು ಉತ್ಪಾದನೆ, ರಾಯಚೂರಿನಲ್ಲಿ ಕೃಷಿ ಸಂಸ್ಕರಣೆ, ಮೈಸೂರು ಮತ್ತು ಕೋಲಾರದಲ್ಲಿ ಮೌಲ್ಯವರ್ಧಿತ ವಲಯಗಳ ವಿಸ್ತರಣೆವರೆಗೆ ವಿಶೇಷ ಕೈಗಾರಿಕಾ ಸಮೂಹಗಳನ್ನು ಉತ್ತೇಜಿಸುತ್ತವೆ ಎಂದು ಕುಮಾರಸ್ವಾಮಿ ವಿವರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಯನ್ನು ಬಲಪಡಿಸಿ ಉತ್ತೇಜಿಸಲು, ಸಾಗಾಣಿಕೆಯ ಮೂಲಸೌಕರ್ಯವನ್ನು ಅಧಿಕವಾಗಿ ಅಭಿವೃದ್ಧಿಪಡಿಸಲು ಹಾಗೂ ಕರ್ನಾಟಕದ ಉದ್ದಗಲಕ್ಕೂ ಬೃಹತ್ ಪ್ರಮಾಣದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಈ ಯೋಜನೆಯು ಬಹುದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತದೆ ಎಂಬ ಅಂಶವನ್ನು ಸಚಿವ ಗೋಯಲ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು. ನನ್ನ ಪ್ರಸ್ತಾವನೆಗೆ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು. ರಾಜ್ಯದ ಕೈಗಾರಿಕಾಭಿವೃದ್ಧಿಗೆ ಕೈಜೋಡಿಸುವುದಾಗಿ ಭರವಸೆ ನೀಡಿದರು ಎಂದು ಮಾಹಿತಿ ನೀಡಿದರು.

ಸಮತೋಲಿತ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿ: ಈ ಯೋಜನೆ ಅನುಷ್ಠಾನಕ್ಕೆ ಬಂದರೆ ಸಾಗಾಣಿಕೆ ಸುಲಭವಾಗಿ ಕೈಗಾರಿಕಾಭಿವೃದ್ಧಿ ವೇಗಗತಿಯಲ್ಲಿ ಸಾಗುತ್ತದೆ. ಉದ್ದೇಶಿತ ಜಿಲ್ಲೆಗಳಲ್ಲಿ ಯೋಜನೆ ಬಂದರೆ ಇಡೀ ರಾಜ್ಯಕ್ಕೆ ಸಮಗ್ರವಾಗಿ ಅನುಕೂಲ ಆಗುತ್ತದೆ. ಮುಖ್ಯವಾಗಿ ಈ ಪ್ರದೇಶಗಳು ಸಾಮೂಹಿಕವಾಗಿ ದೊಡ್ಡ ಮಟ್ಟದಲ್ಲಿ ಕೈಗಾರಿಕಾ ಅಭಿವೃದ್ಧಿ ಕಾಣುವುದಲ್ಲದೆ, ಸಮತೋಲಿತ ಪ್ರಾದೇಶಿಕ ಬೆಳವಣಿಗೆಗೆ ಕಾಣಿಕೆ ನೀಡುತ್ತವೆ ಕುಮಾರಸ್ವಾಮಿ ಚರ್ಚೆಯ ವೇಳೆ ಒತ್ತಿ ಹೇಳಿದರು.

ಈ ಪ್ರಸ್ತಾವಿತ ಕೈಗಾರಿಕಾ ಪಾರ್ಕುಗಳನ್ನು ಸೂಕ್ತವಾದ ಕೈಗಾರಿಕಾ ಕಾರಿಡಾರ್ ಇಲ್ಲವೇ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP) ಚೌಕಟ್ಟಿನ ಅಡಿಯಲ್ಲಿ ಪರಿಗಣಿಸಬೇಕೆಂದು ವಿನಂತಿಸಿದ ಕುಮಾರಸ್ವಾಮಿ ಅವರು; ಈ ಜಿಲ್ಲೆಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ಗಳಿಗೆ ಸಂಯೋಜಿಸುವ ಮೂಲಕ ಕರ್ನಾಟಕವು ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸಲು ಅನುಕೂಲವಾಗುತ್ತದೆ. ಅಲ್ಲದೆ, ಸಾಕಾಣಿಗೆ ಸುಲಭವಾಗಿ ಖಾಸಗಿ ಬಂಡವಾಳ ಹೂಡಿಕೆಯಲ್ಲೂ ಗಮನಾರ್ಹ ಪ್ರಗತಿ ಸಾಧಿಸಲಿದೆ ಎಂದು ಉಕ್ಕು ಸಚಿವರು ಗೋಯಲ್‌ ಅವರಿಗೆ ವಿವರಿಸಿದರು.

ಸಚಿವರಿಂದ ಸಕಾರಾತ್ಮಕ ಪ್ರತಿಕ್ರಿಯೆ

ಸಚಿವ ಗೋಯಲ್‌ ಅವರೊಂದಿಗೆ ಚರ್ಚೆ ಬಗ್ಗೆ ಸಂತಸ ವ್ಯಕ್ತಪಡಸಿದ ಕುಮಾರಸ್ವಾಮಿ ಅವರು, ವಾಣಿಜ್ಯ ಮತ್ತು ಕೈಗಾರಿಕೆ ಸಚಿವರು ಈ ಪ್ರಸ್ತಾವನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರಲ್ಲದೆ, ಯೋಜನೆಯ ಅನುಷ್ಠಾನದ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದರು. ಅಲ್ಲದೆ; ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಉತ್ಪಾದನೆ ಮತ್ತು ಕೈಗಾರಿಕಾ ಸ್ಪರ್ಧಾತ್ಮಕತೆಯನ್ನು ಬಲಪಡಿಸುವ ಕೇಂದ್ರ ಸರ್ಕಾರದ ವಿಶಾಲ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಉಪಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಯೋಜನೆಯಿಂದ ರಾಜ್ಯದ ಉತ್ತರ, ಮಧ್ಯ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಕೈಗಾರಿಕಾ ವಿಸ್ತರಣೆಗೆ ಒತ್ತು ನೀಡುವಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂಬುದಾಗಿ ಕುಮಾರಸ್ವಾಮಿ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ