
ಅಕೋಲಾ (ಮಹಾರಾಷ್ಟ್ರ) (ನ.10): ಕರ್ನಾಟಕದ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಮಹಾರಾಷ್ಟ್ರ ಚುನಾವಣೆಗಾಗಿ ಕರ್ನಾಟಕದ ಮದ್ಯ ಮಾರಾಟಗಾರರಿಂದ 700 ಕೋಟಿ ರು. ಲೂಟಿ ಮಾಡಲಾಗಿದೆ. ಈ ಹಣವನ್ನು ಮಹಾರಾಷ್ಟ್ರ ಚುನಾವಣೆಗೆ ಬಳಸಲಾಗುತ್ತಿದೆ’ ಎಂದಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಇತ್ತೀಚೆಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ವಿರುದ್ಧ ಮದ್ಯ ಮಾರಾಟಗಾರರು ಮಾಡಿರುವ ಲಂಚದ ಆರೋಪವನ್ನು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.
ವಿಧಾನಸಭೆ ಚುನಾವಣೆ ನಡೆದಿರುವ ಮಹಾರಾಷ್ಟ್ರದ ಅಕೋಲಾದಲ್ಲಿ ಬಿಜೆಪಿ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಮೋದಿ, ‘ಕಾಂಗ್ರೆಸ್ ಎಲ್ಲಿ ಸರ್ಕಾರ ರಚಿಸುತ್ತದೆಯೋ ಆ ರಾಜ್ಯವು ಪಕ್ಷದ ‘ಶಾಹಿ ಪರಿವಾರ’ದ (ಗಾಂಧಿ ಪರಿವಾರದ) ಎಟಿಎಂ ಆಗುತ್ತದೆ. ಮಹಾರಾಷ್ಟ್ರ ಚುನಾವಣೆಗಾಗಿ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಮದ್ಯದ ವ್ಯವಹಾರದಿಂದ 700 ಕೋಟಿ ರು.ಗಳಷ್ಟು ಸುಲಿಗೆ ಮಾಡಲಾಗಿದೆ. ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಲ್ಲೂ ಇದು ನಡೆದಿದೆ. ಈ ರಾಜ್ಯಗಳು ಶಾಹಿ ಪರಿವಾರದ ಎಟಿಎಂಗಳಾಗುತ್ತಿವೆ’ ಎಂದು ಕಿಡಿಕಾರಿದರು.
‘ಚುನಾವಣೆ ಗೆಲ್ಲಲು ಕಾಂಗ್ರೆಸ್ ಇಷ್ಟೊಂದು ಭ್ರಷ್ಟಾಚಾರ ನಡೆಸಿದೆ ಎಂದಾದರೆ, ಒಮ್ಮೆ ಅಧಿಕಾರಕ್ಕೆ ಬಂದರೆ ಎಷ್ಟು ಭ್ರಷ್ಟಾಚಾರ ಮಾಡುತ್ತದೆ ಎಂದು ನೀವೇ ಊಹಿಸಬಹುದು’ ಎಂದ ಮೋದಿ, ಮಹಾರಾಷ್ಟ್ರದಲ್ಲಿ ಈ ಭ್ರಷ್ಟಾಚಾರ ಪುನಾರಾರ್ತನೆ ಆಗಬಾರದು ಎಂದರೆ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಹೆಣ ಹೂಳುವುದರಲ್ಲೂ ಬಿಜೆಪಿಗರು ಭ್ರಷ್ಟಾಚಾರ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ
‘ಮಹಾರಾಷ್ಟ್ರದಲ್ಲಿ ನಮ್ಮ ಮಹಾಯುತಿ ಕೂಟವು ಮಹಿಳೆಯರ ಭದ್ರತೆ, ಉದ್ಯೋಗಾವಕಾಶ, ಲಡ್ಕಿ ಬಹಿನ್ ಯೋಜನೆ ವಿಸ್ತರಣೆ ಮೇಲೆ ನಿಗಾ ವಹಿಸಲಿದೆ. ಆದರೆ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಶರದ್ ಪವಾರ್ ಅವರ ಎನ್‌ಸಿಪಿ ಒಳಗೊಂಡ ಮಹಾ ವಿಕಾಸ್ ಅಘಾಡಿ ಹಗರಣಗಳ ಮೇಲೆ ಗಮನ ಕೇಂದ್ರೀಕರಿಸುತ್ತದೆ’ ಎಂದು ಎಚ್ಚರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ