
ಬೆಂಗಳೂರು (ಅ.13): ಕರ್ನಾಟಕದ ಕಬ್ಬು ಬೆಳೆಗಾರರ ಹೋರಾಟಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸೋಮವಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ರೈತರ ಹಿತರಕ್ಷಣೆಗಾಗಿ ವಾರದೊಳಗೆ ಉನ್ನತ ಮಟ್ಟದ ಜಂಟಿ ಸಮಿತಿ ರಚಿಸುವುದಾಗಿ ಘೋಷಿಸಿದೆ.
ದೆಹಲಿಯಲ್ಲಿ ಸೋಮವಾರ ನಡೆದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ, ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಮತ್ತು ಪ್ರಮುಖ ರೈತ ಮುಖಂಡರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ, ಬೇಡಿಕೆಗಳನ್ನೆಲ್ಲ ಆಲಿಸಿದ ಸಚಿವದ್ವಯರು, ರೈತ ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿ ಅಂತಿಮವಾಗಿ ಸಮಸ್ಯೆಗಳ ಪರಿಹಾರಕ್ಕೆ ಒಂದು ವಾರದೊಳಗೆ ರೈತರು ಮತ್ತು ವಿಜ್ಞಾನಿಗಳನ್ನು ಒಳಗೊಂಡ ಜಂಟಿ ಸಮಿತಿ ರಚಿಸುವುದಾಗಿ ಪ್ರಕಟಿಸಿದರು.
ಸಭೆಯಲ್ಲಿ ಮಾತನಾಡಿದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಸಕ್ಕರೆ ಇಳುವರಿ (ರಿಕವರಿ), ತೂಕ ಮತ್ತು ಪಾವತಿಗೆ ಸಂಬಂಧಿಸಿದ ವಿವಾದಗಳನ್ನು ಪರಿಹರಿಸಲು ಜಂಟಿ ಸಮಿತಿ ರಚಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಈ ಜಂಟಿ ಸಮಿತಿಯಲ್ಲಿ ಕೇಂದ್ರ, ಕರ್ನಾಟಕ, ಮಹಾರಾಷ್ಟ್ರ ಸರ್ಕಾರದ ಪ್ರತಿನಿಧಿಗಳು, ರೈತ ಸಂಘಟನೆಗಳ ಅಧಿಕೃತ ಪ್ರತಿನಿಧಿಗಳು, ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳು, ವಿಷಯ ತಜ್ಞರು (ವೈಜ್ಞಾನಿಕ ತಜ್ಞರು) ಇರಲಿದ್ದಾರೆ ಎಂದು ಹೇಳಿದರು.
ಈ ಸಮಿತಿ ಕಬ್ಬು ಕಟಾವಿನ ಸಮಯ, ಸಕ್ಕರೆ ಇಳುವರಿ ಅಳೆಯುವ ವೈಜ್ಞಾನಿಕ ಮಾನದಂಡಗಳು, ಆಧುನಿಕ ಪ್ರಯೋಗಾಲಯ ಪರೀಕ್ಷಾ ವ್ಯವಸ್ಥೆ ಮತ್ತು ತೂಕದ ನಿಖರತೆ ಸೇರಿದಂತೆ ಪ್ರತಿಯೊಂದು ತಾಂತ್ರಿಕ ಅಂಶವನ್ನು ಕೂಲಂಕಷವಾಗಿ ಪರಿಶೀಲಿಸಲಿದ್ದು, ನಿಗದಿತ ಸಮಯದೊಳಗೆ ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಸಲ್ಲಿಸಲಿದೆ ಎಂದು ತಿಳಿಸಿದರು.
ಜಂಟಿ ಸಮಿತಿ ಶಿಫಾರಸ್ಸು ಮೇರೆಗೆ ಅಗತ್ಯ ಕ್ರಮ:
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ಮಾತನಾಡಿದ ಕೇಂದ್ರ ಸಚಿವದ್ವಯರು, ರೈತರ ಸಮಸ್ಯೆಗಳಿಗೆ ಕೇಂದ್ರ ಸ್ಪಂದಿಸುತ್ತಿದೆ. ಕಬ್ಬು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ಪಾರದರ್ಶಕತೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರ, ರಾಜ್ಯಗಳು, ರೈತರು ಮತ್ತು ವಿಜ್ಞಾನಿಗಳನ್ನು ಒಳಗೊಂಡ ಜಂಟಿ ಸಮಿತಿ ರಚಿಸಿ ಅದರ ವರದಿ ಅನ್ವಯ ಶಾಶ್ವತ ಪರಿಹಾರಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ರೈತರೇ ಪ್ರಥಮಾದ್ಯತೆ. ಸಕ್ಕರೆ ಇಳುವರಿ, ಅಂಕಿ-ಅಂಶಗಳ ತಿರುಚುವಿಕೆ ಮತ್ತು ಸಂಬಂಧಿತ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರ ದೃಢ ನಿಲುವು ಹೊಂದಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ತಿಳಿಸಿದರು.
ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ರೈತರ ಸರ್ವತೋಮುಖ ಅಭಿವೃದ್ಧಿ, ಕೃಷಿ ಉತ್ಪನ್ನಗಳ ಪಾರದರ್ಶಕ ಮೌಲ್ಯಮಾಪನ ಮತ್ತು ಕೃಷಿಕರ ಆದಾಯ ವೃದ್ಧಿಗೆ ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದ್ದು, ಆ ನಿಟ್ಟಿನಲ್ಲಿ ದೃಢವಾದ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು.
ರೈತರ ಕಲ್ಯಾಣಕ್ಕಾಗಿ ಕೇಂದ್ರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದರೆ, ತ್ವರಿತ ಕ್ರಮ ಕೈಗೊಳ್ಳುವಲ್ಲಿ ಆಯಾ ರಾಜ್ಯ ಸರ್ಕಾರಗಳ ಸಹಕಾರವೂ ಅಗತ್ಯವಾಗಿದೆ ಎಂದು ಸಚಿವರು ತಿಳಿಸಿದರು.
ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಕಬ್ಬಿನ ಎಫ್‌ಆರ್‌ಪಿ (ನ್ಯಾಯಯುತ ಮತ್ತು ಲಾಭದಾಯಕ ಬೆಲೆ) ನಿರ್ಧರಿಸುವ ವೈಜ್ಞಾನಿಕ ಪ್ರಕ್ರಿಯೆ ಹಾಗೂ ವೆಚ್ಚದ ಮೌಲ್ಯಮಾಪನಕ್ಕೆ ಬಳಸುವ ವಿಧಾನಗಳ ಬಗ್ಗೆ ವಿವರಿಸಿದರು. ಪ್ರತಿ ಹಂತದಲ್ಲೂ ಪಾರದರ್ಶಕತೆ ಹೆಜ್ಜೆಯಿರಿಸಿದ ಕೇಂದ್ರ ಸರ್ಕಾರ, ರೈತರು ಮತ್ತು ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ ಎಂದು ಮನವರಿಕೆ ಮಾಡಿಕೊಟ್ಟರು. ಸಭೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ ನಡೆಸಿದ್ದಲ್ಲದೆ, ಎಫ್‌ಆರ್‌ಪಿ ಮತ್ತು ಎಸ್‌ಎಪಿ (ಕನಿಷ್ಠ ಮಾರಾಟ ದರ), ಎಥೆನಾಲ್ ಉತ್ಪಾದನೆ ಬಗ್ಗೆಯೂ ಮಹತ್ವದ ಚರ್ಚೆ ನಡೆಯಿತು.
ಸಭೆಯಲ್ಲಿ ಕೇಂದ್ರ ಕೃಷಿ ಸಚಿವಾಲಯ, ಆಹಾರ ಇಲಾಖೆ ಅಧಿಕಾರಿಗಳು, ರಾಜ್ಯ ಸಹಕಾರ ಸಚಿವ ಲಕ್ಷಣ ಸವದಿ, ಕೃಷಿ ಸಚಿವ ನರೇಂದ್ರ ಸ್ವಾಮಿ, ಸಕ್ಕರೆ ಮತ್ತು ಜವಳಿ ಖಾತೆ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ, ರೈತ ಮುಖಂಡರು ಮತ್ತು ಮಾಜಿ ಸಂಸದರಾದ ರಾಜು ಶೆಟ್ಟಿ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ದೆಹಲಿಯಲ್ಲಿ ಕೇಂದ್ರ ಸರ್ಕಾರದೊಂದಿಗೆ ನಡೆದ ಸಭೆ ವಿಫಲವಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸುವ ಭರವಸೆ ನೀಡಿ ದೆಹಲಿಗೆ ಕರೆಸಿಕೊಂಡ ಕೇಂದ್ರ ಸರ್ಕಾರ, ಯಾವುದೇ ಸ್ಪಷ್ಟ ನಿರ್ಧಾರ ಕೈಗೊಳ್ಳದೆ ರೈತರನ್ನು ವಾಪಸ್ ಕಳುಹಿಸುವ ಮೂಲಕ ಅವಮಾನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ