ಕೇರಳದ ವಯನಾಡ್ ನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 40ಕ್ಕೂ ಹೆಚ್ಚು ಸಾವನ್ನಪ್ಪಿದ್ದಾರೆ.
ವಯನಾಡ್(ಜು.30): ಕೇರಳದ ವಯನಾಡ್ ನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 100 ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿರುವ ಬಗ್ಗೆ ವರದಿ ತಿಳಿಸಿದೆ. ಸುಮಾರು 400 ಕುಟುಂಬಗಳು ಅತಂತ್ರವಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿ ಸಂಭವಿಸಿದ ಗುಡ್ಡ ದುರಂತದಲ್ಲಿ ಇನ್ನೂ ಮೃತ ದೇಹಗಳೇ ಪತ್ತೆ ಆಗಿಲ್ಲ, ಈ ಘಟನೆ ಮಾಸೋ ಮುನ್ನವೇ ಮತ್ತೊಂದು ಭೀಕರ ದುರಂತ ನಡೆದಿದೆ.
ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ನಸುಕಿನ ಜಾವ ಸುಮಾರು 4 ಗಂಟೆಯ ಸುಮಾರಿನಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ದೊಡ್ಡ ಬೆಟ್ಟವೊಂದು ಕುಸಿದು ಬಂದು ಇಡೀ ಗ್ರಾಮಕ್ಕೆ ಗ್ರಾಮವೇ ಭೂ ಸಮಾಧಿಯಾಗಿದೆ. 100 ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ ಪ್ರವಾಹ ಕೂಡ ನಿರ್ಮಾಣವಾಗಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) , ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಯುದ್ದೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ.
undefined
ಭೂಕುಸಿತದಿಂದ ಹಳಿ ಮೇಲೆ ಬಿದ್ದ ಮಣ್ಣು, ಇನ್ನು 15 ದಿನ ಮಂಗಳೂರು-ಬೆಂಗಳೂರು ರೈಲು ಸಂಚಾರ ಡೌಟ್!
ಎಲ್ಲಾ ಸರ್ಕಾರಿ ಸಂಸ್ಥೆಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಆರೋಗ್ಯ ಮಿಷನ್ ನಿಯಂತ್ರಣ ಕೊಠಡಿಯನ್ನು ತೆರೆದಿದೆ ಜೊತೆಗೆ ತುರ್ತು ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 9656938689 ಮತ್ತು 8086010833 ನ್ನು ಬಿಡುಗಡೆ ಮಾಡಲಾಗಿದೆ. ಹೆಲಿಕಾಪ್ಟರ್‌ಗಳನ್ನು ಕೂಡ ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶಿರೂರು ಗುಡ್ಡ ಕುಸಿತ ದುರಂತ: 3 ಜನ, ಲಾರಿ ತಲಾಶ್ ಸ್ಥಗಿತ, 13 ದಿನ ಹುಡುಕಿದರೂ ಫಲವಿಲ್ಲ
ವಿಪಕ್ಷ ನಾಯಕ ರಾಹುಲ್ ಗಾಂಧಿ ಸಂತಾಪ: ಘಟನೆಗೆ ವಯನಾಡ್ ಮಾಜಿ ಸಂಸದ ರಾಹುಲ್ ಗಾಂಧಿ ತೀವ್ರ ಸಂತಾಪ ಸೂಚಿಸಿದ್ದಾರೆ. ವಯನಾಡಿನ ಮೆಪ್ಪಾಡಿ ಬಳಿ ಸಂಭವಿಸಿದ ಭಾರೀ ಭೂಕುಸಿತದಿಂದ ನಾನು ತೀವ್ರ ನೊಂದಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಘಟನೆಯಲ್ಲಿ ಸಿಲುಕಿಕೊಂಡವರನ್ನು ಶೀಘ್ರದಲ್ಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ.
ನಾನು ಕೇರಳ ಮುಖ್ಯಮಂತ್ರಿ ಮತ್ತು ವಯನಾಡ್ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದೇನೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ನನಗೆ ಭರವಸೆ ನೀಡಿದ್ದಾರೆ. ಎಲ್ಲಾ ಏಜೆನ್ಸಿಗಳೊಂದಿಗೆ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು, ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲು ಮತ್ತು ಪರಿಹಾರ ಪ್ರಯತ್ನಗಳಿಗೆ ಅಗತ್ಯವಿರುವ ಯಾವುದೇ ಸಹಾಯವನ್ನು ನಮಗೆ ತಿಳಿಸಲು ನಾನು ಅವರಿಗೆ ವಿನಂತಿಸಿದ್ದೇನೆ.
ನಾನು ಕೇಂದ್ರ ಸಚಿವರೊಂದಿಗೆ ಮಾತನಾಡಿ ವಯನಾಡಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಮನವಿ ಮಾಡುತ್ತೇನೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಆಡಳಿತಕ್ಕೆ ಸಹಾಯ ಮಾಡುವಂತೆ ನಾನು ಎಲ್ಲಾ ಯುಡಿಎಫ್ ಕಾರ್ಯಕರ್ತರನ್ನು ಕೋರುತ್ತೇನೆ ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
ಮೋದಿ-ಸಿಎಂ ಮಾತುಕತೆ: ಇನ್ನು ವಯನಾಡ್‌ನಲ್ಲಿ ಭೂಕುಸಿತದ ವಿಷಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಕೇಂದ್ರದಿಂದ ಎಲ್ಲಾ ಸಹಾಯವನ್ನು ಭರವಸೆ ನೀಡಿದ್ದಾರೆ. ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಕೇಂದ್ರ ಸಚಿವ ಸುರೇಶ್ ಗೋಪಿ ಅವರೊಂದಿಗೆ ಮಾತನಾಡಿದ್ದಾರೆ.
ಪ್ರಧಾನಮಂತ್ರಿ ಅವರು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೂ ಮಾತನಾಡಿದ್ದು, ಬಿಜೆಪಿ ಕಾರ್ಯಕರ್ತರು ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡುವುದನ್ನು ಖಚಿತಪಡಿಸಿಕೊಳ್ಳುವಂತೆ ಕೇಳಿಕೊಂಡರು.