
ನವದೆಹಲಿ(ಜೂ.13): ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳ ವಿಚಾರಣೆ ಎದುರಿಸಿದ್ದಾರೆ. ಬೆಳಗ್ಗೆ 11 ಗಂಟೆಗೆ ಇಡಿ ಕಚೇರಿಗೆ ಆಗಮಿಸಿದ ರಾಹುಲ್ ಗಾಂಧಿ ಸತತ 8 ಗಂಟೆಗಳ ಕಾಲ ಅಧಿಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಗೆ ವರಗೆ ವಿಚಾರಣೆ ಎದುರಿಸಿದ ರಾಹುಲ್ ಗಾಂಧಿಗೆ 1.30 ಗಂಟೆಗಳ ಕಾಲ ಊಟದ ವಿರಾಮ ನೀಡಲಾಗಿತ್ತು. ಬಳಿಕ ಮಧ್ಯಾಹ್ನ 3.30ಕ್ಕೆ ಮತ್ತೆ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ ರಾತ್ರಿ 9 ಗಂಟೆ ವರೆಗೆ ವಿಚಾರಣೆ ಎದುರಿಸಿದ್ದಾರೆ.
ಪೊಲೀಸರಿಂದ ತಪ್ಪಿಸಿ ಎಸ್ಕೇಪ್ ಆದ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ! ವಿಡಿಯೋ ವೈರಲ್
ಒಟ್ಟು 8 ಗಂಟೆಗಳ ವಿಚಾರಣೆಯಲ್ಲಿ ರಾಹುಲ್ ಗಾಂಧಿ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತು ಹಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಇಡಿ ವಿಚಾರಣೆ ಬಳಿಕ ಕಾಂಗ್ರೆಸ್ ಕಚೇರಿಗೆ ತೆರಳಲಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಇಂದು ರಾಹುಲ್ ಗಾಂಧಿ ಇಡಿ ವಿಚಾರಣೆಗೆ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನ ನಡೆಸಿತ್ತು. ಬಿಜೆಪಿ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಇದೀಗ ಮುಂದಿನ ಹಂತದ ಪ್ರತಿಭಟನೆಗೆ ಪ್ಲಾನ್ ರೂಪಿಸಲಿದೆ.
ಕಾಂಗ್ರೆಸ್ ಪಕ್ಷದ ಮುಖವಾಣಿಯಾಗಿರುವ ದಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿ. (ಎಜೆಎಲ್) ಎಂಬ ಸಂಸ್ಥೆ ಪ್ರಕಟಿಸುತ್ತದೆ. ಈ ಸಂಸ್ಥೆಯ ಮಾಲೀಕತ್ವವನ್ನು ಯಂಗ್ ಇಂಡಿಯನ್ ಪ್ರೈ.ಲಿ. ಹೊಂದಿದೆ. ಯಂಗ್ ಇಂಡಿಯನ್ ಕಂಪನಿಯ ಮಾಲಿಕತ್ವ ಕಾಂಗ್ರೆಸ್ ಪಕ್ಷದ ಬಳಿಯಿದೆ. ಈ ಸಂಸ್ಥೆಗಳ ನಡುವೆ ನಡೆದ 90 ಕೋಟಿ ರು. ಹಣಕಾಸು ವ್ಯವಹಾರಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಸಂಬಂಧ ಇ.ಡಿ. ಕಳೆದ ವರ್ಷ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಅದಕ್ಕೂ ಮೊದಲೇ 2013ರಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಕೂಡ ನ್ಯಾಷನಲ್ ಹೆರಾಲ್ಡ್ ಆಸ್ತಿ ಮಾರಾಟದಲ್ಲಿ ಅವ್ಯವಹಾರ ನಡೆದಿದೆ ಎಂದು ಗಾಂಧಿ ಕುಟುಂಬದ ವಿರುದ್ಧ ದೂರು ನೀಡಿದ್ದರು. ಅವೆಲ್ಲ ಆರೋಪಗಳ ಸಂಬಂಧ ಹೇಳಿಕೆ ದಾಖಲಿಸಿಕೊಳ್ಳಲು ಸೋನಿಯಾ ಮತ್ತು ರಾಹುಲ್‌ಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ED ವಿಚಾರಣೆ ನಡುವೆ ಅಮ್ಮನ ಭೇಟಿಯಾದ ರಾಹುಲ್ ಗಾಂಧಿ
ದೇಶದ ವಿವಿಧ ಭಾಗಗಳಲ್ಲಿ ಇರುವ 25 ಇ.ಡಿ. ಕಚೇರಿಗಳ ಮುಂದೆ ಪ್ರದೇಶ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಸಿಬಿಐ ಹಾಗೂ ಇ.ಡಿ.ಯನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿ ನಡೆಸಿದ ಪ್ರತಿಭಟನೆಯಲ್ಲಿ ಪೊಲೀಸರು ಹಾಗೂ ನಾಯಕರ ನಡುವೆ ಜಿದ್ದಾಜಿದ್ದಿಯೇ ನಡೆದುಹೋಗಿದೆ.
ಇದೇ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರಿಗೆ ಜೂ.23ರಂದು ಹಾಜರಾಗಲು ಇ.ಡಿ. ಸಮನ್ಸ್ ಜಾರಿ ಮಾಡಿದೆ.ರಾಹುಲ್ ಗಾಂಧಿ ಅವರಿಗೆ ಜೂ.2ರಂದೇ ಇ.ಡಿ. ಬುಲಾವ್ ನೀಡಿತ್ತು. ಆದರೆ ಅವರು ವಿದೇಶದಲ್ಲಿದ್ದ ಕಾರಣ ಮತ್ತೆ ವಿಚಾರಣಾ ದಿನಾಂಕ ಜೂ.13ಕ್ಕೆ ನಿಗದಿಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ