
ಬಿಹಾರದ ದರ್ಭಾಂಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸಿದ ಆರೋಪದ ಮೇಲೆ ರಿಜ್ವಿ ಎಂಬ ವ್ಯಕ್ತಿಯನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 27ರಂದು ದರ್ಭಾಂಗದಲ್ಲಿ ನಡೆದ ಕಾಂಗ್ರೆಸ್-ಆರ್‌ಜೆಡಿ ಒಕ್ಕೂಟದ 'ಮತದಾರರ ಹಕ್ಕು ಯಾತ್ರೆ' ರ್ಯಾಲಿಯ ಸಂದರ್ಭದಲ್ಲಿ ರಿಜ್ವಿ ಪ್ರಧಾನಿ ಮೋದಿ ಮತ್ತು ಅವರ ದಿವಂಗತ ತಾಯಿಯ ವಿರುದ್ಧ ಅಸಭ್ಯ ಪದಗಳನ್ನು ಬಳಸಿದ್ದರು ಎಂದು ಆರೋಪಿಸಲಾಗಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ಆಕ್ರೋಶಕ್ಕೆ ಕಾರಣವಾಗಿದೆ.
ಗೃಹ ಸಚಿವ ಅಮಿತ್ ಶಾ ಖಂಡನೆ:
ಈ ಘಟನೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರವಾಗಿ ಖಂಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ Xನಲ್ಲಿ ಪೋಸ್ಟ್ ಮಾಡಿರುವ ಶಾ, 'ದರ್ಭಾಂಗದಲ್ಲಿ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿ ಜಿ ಮತ್ತು ಅವರ ದಿವಂಗತ ತಾಯಿಯ ವಿರುದ್ಧ ಕಾಂಗ್ರೆಸ್-ಆರ್‌ಜೆಡಿ ವೇದಿಕೆಯಿಂದ ಬಳಸಲಾದ ನಿಂದನೀಯ ಭಾಷೆ ಖಂಡನೀಯವಷ್ಟೇ ಅಲ್ಲ, ನಮ್ಮ ಪ್ರಜಾಪ್ರಭುತ್ವಕ್ಕೆ ಕಳಂಕ ತಂದಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೂಡ ಈ ಘಟನೆಯನ್ನು ಖಂಡಿಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಈ ಕೃತ್ಯಕ್ಕಾಗಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. 'ಕಾಂಗ್ರೆಸ್‌ನ 'ಮತ ಹಕ್ಕು ಯಾತ್ರೆ' ವೇದಿಕೆಯಿಂದ ಪ್ರಧಾನಿಯವರನ್ನು ನಿಂದಿಸಿದ ರೀತಿ ಅತ್ಯಂತ ಖಂಡನೀಯ. ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್ ಬಿಹಾರದ ಸಂಸ್ಕೃತಿಯನ್ನು ಅವಮಾನಿಸಿದ್ದಾರೆ. ಅವರು ತಕ್ಷಣ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಘಟನೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್ ವೇದಿಕೆಯಲ್ಲಿ ಉಪಸ್ಥಿತರಿರಲಿಲ್ಲ ಎಂದು ಮಾಹಿತಿ ತಿಳಿಸಿದೆ. ಆದರೆ, ಬಿಹಾರ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಪ್ರತಿಪಕ್ಷಗಳ ಈ ರ್ಯಾಲಿಯಲ್ಲಿ ಉಂಟಾದ ವಿವಾದವು ರಾಜಕೀಯ ವಾತಾವರಣವನ್ನು ಉದ್ವಿಗ್ನಗೊಳಿಸಿದೆ. ಪೊಲೀಸರು ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದು, ತನಿಖೆ ಮುಂದುವರಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ