
ಉಡುಪಿ (ಡಿ.22): ಭಾರತದ ನೌಕಾಪಡೆಗೆ (Indian Navy) ಸಂಬಂಧಿಸಿದ ಅತ್ಯಂತ ರಹಸ್ಯ ಮಾಹಿತಿಗಳನ್ನ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಮಲ್ಪೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ಜಾಲದಲ್ಲಿ ಭಾಗಿಯಾಗಿದ್ದ ಗುಜರಾತ್ ಮೂಲದ ಮತ್ತೊಬ್ಬ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಗುಜರಾತ್ ರಾಜ್ಯದ ಆನಂದ್ ತಾಲೂಕಿನ ಕೈಲಾಸ್ ನಗರಿಯ ಹಿರೇಂದ್ರ (34) ಎಂದು ಗುರುತಿಸಲಾಗಿದೆ. ಈತ ಹಣದ ಆಮಿಷಕ್ಕೆ ಒಳಗಾಗಿ ಈ ಹಿಂದೆ ಬಂಧಿತರಾಗಿದ್ದ ರೋಹಿತ್ ಮತ್ತು ಸಂತ್ರಿಗೆ ಮೊಬೈಲ್ ಸಿಮ್ ಕಾರ್ಡ್‌ಗಳನ್ನು ಒದಗಿಸುತ್ತಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಈ ಸಿಮ್ ಕಾರ್ಡ್‌ಗಳ ಮೂಲಕವೇ ದೇಶದ ಭದ್ರತೆಗೆ ಸಂಬಂಧಿಸಿದ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸಲಾಗುತ್ತಿತ್ತು.
ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ (Cochin Shipyard) ಸಹಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಎಂಬ ಇಬ್ಬರನ್ನು ನವೆಂಬರ್ 21ರಂದು ಮಲ್ಪೆ ಪೊಲೀಸರು ಬಂಧಿಸಿದ್ದರು. ಇವರು ಹಡಗುಗಳ ನಂಬರ್ ಮತ್ತು ಅವುಗಳ ಸಂಚಾರದ ಗೌಪ್ಯ ಪಟ್ಟಿಗಳನ್ನು ಶತ್ರು ರಾಷ್ಟ್ರಕ್ಕೆ ತಲುಪಿಸುತ್ತಿದ್ದರು ಎನ್ನಲಾಗಿದೆ.
ಅಧಿಕಾರಿಗಳ ಸಂಶಯದಿಂದ ಬಯಲಾದ ಪ್ರಕರಣ
ಕೊಚ್ಚಿನ್ ಶಿಪ್ ಯಾರ್ಡ್‌ನ ಅಧಿಕಾರಿಗಳಿಗೆ ಈ ಇಬ್ಬರ ನಡವಳಿಕೆಯ ಮೇಲೆ ಸಂಶಯ ಬಂದ ಹಿನ್ನೆಲೆಯಲ್ಲಿ ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಈ ಇಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವರಿಗೆ ಸಿಮ್ ಕಾರ್ಡ್ ಒದಗಿಸುತ್ತಿದ್ದ ಗುಜರಾತ್ ಮೂಲದ ಹಿರೇಂದ್ರನ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಸದ್ಯ ಮೊದಲ ಇಬ್ಬರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ