ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಜಯಾ ಬಳಿ ಜಪ್ತಿ ಮಾಡಿದ ಸಂಪತ್ತು ಈಗ ವಿಲೇವಾರಿ?

By Kannadaprabha NewsFirst Published Jan 26, 2023, 8:47 AM IST
Highlights

100 ಕೋಟಿ ರು. ದಂಡ ವಸೂಲಿಗೆ ವಸ್ತುಗಳ ಹರಾಜು ಸಾಧ್ಯತೆ, ವಿಶೇಷ ಸರ್ಕಾರಿ ವಕೀಲರ ನೇಮಿಸಿ: ರಾಜ್ಯ ಸರ್ಕಾರಕ್ಕೆ ಕೋರ್ಟ್‌

ಬೆಂಗಳೂರು(ಜ.26):  ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಬೆಲೆಬಾಳುವ ವಸ್ತುಗಳನ್ನು ವಿಲೇವಾರಿ ಮಾಡಲು ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸುವಂತೆ ಪ್ರಕರಣದ ವಿಚಾರಣೆ ನಡೆಸಿದ್ದ ನಗರದ ವಿಶೇಷ ನ್ಯಾಯಾಲಯ (ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ) ರಾಜ್ಯ ಗೃಹ ಇಲಾಖೆಗೆ ಪತ್ರ ಬರೆದಿದೆ. ಆರ್‌ಟಿಐ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ಕುರಿತು ನಗರದ ಪ್ರಧಾನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ (ಪ್ರಥಮ ಮೇಲ್ಮನವಿ ಪ್ರಾಧಿಕಾರ) ಇತ್ತೀಚೆಗೆ ಹೊರಡಿಸಿರುವ ಆದೇಶದಲ್ಲಿ ಈ ಅಂಶ ಉಲ್ಲೇಖವಾಗಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ನಗರದ ವಿಶೇಷ ನ್ಯಾಯಾಲಯ ಜಯಲಲಿತಾ ಅವರಿಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರು. ದಂಡ ವಿಧಿಸಿ 2014ರ ಸೆ.27ರಂದು ಆದೇಶಿಸಿತ್ತು. ಜಪ್ತಿ ಮಾಡಲಾದ ಜಯಲಲಿತಾ ಅವರ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡದ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು.

5 ವರ್ಷದ ಬಳಿಕ ಸದ್ದು ಮಾಡಿದ ಕೊಡನಾಡ್ ಕೊಲೆ ಪ್ರಕರಣ, ಮೊದಲ ಬಾರಿ ಶಶಿಕಲಾ ವಿಚಾರಣೆ!

ಈ ಹಿನ್ನೆಲೆಯಲ್ಲಿ ಆರ್‌ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು, 2022ರ ಆ.12ರಂದು ನಗರದ ಸಿಟಿ ಸಿವಿಲ್‌ ಕೋರ್ಚ್‌ ಮಾಹಿತಿ ಹಕ್ಕು ಅಧಿಕಾರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ, ಜಪ್ತಿ ಮಾಡಿರುವ ಜಯಲಲಿತಾ ಅವರಿಗೆ ಸೇರಿದ ವಸ್ತುಗಳ ವಿಲೇವಾರಿ ಬಗ್ಗೆ ಮಾಹಿತಿ ನೀಡುವಂತೆ ಕೋರಿದ್ದರು. ಆದರೆ, ಮಾಹಿತಿ ನೀಡಲು ನಿರಾಕರಿಸಿದ ಮಾಹಿತಿ ಹಕ್ಕು ಅಧಿಕಾರಿ, 2022ರ ಸೆ.7ರಂದು ಆ ಅರ್ಜಿ ತಿರಸ್ಕರಿಸಿದ್ದರು. ಇದರಿಂದ ಅವರು ಪ್ರಥಮ ಮೇಲ್ಮನವಿ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಇತ್ತೀಚೆಗೆ ಮೇಲ್ಮನವಿಯ ವಿಚಾರಣೆ ನಡೆಸಿದ ಮೇಲ್ಮನವಿ ಪ್ರಾಧಿಕಾರ ಈ ಆದೇಶ ಹೊರಡಿಸಿದೆ.

ಜಯಾ ಬಳಿ ಸಿಕ್ಕ ವಸ್ತುಗಳೇನು?

7040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜೆರೇಟರ್‌, 10 ಟಿ.ವಿ. ಸೆಟ್‌, 8 ವಿಸಿಆರ್‌, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್‌, 2 ಆಡಿಯೋ ಡೆಕ್‌, 24 ಟೂ-ಇನ್‌ ಒನ್‌ ಟೇಪ್‌ ರೆಕಾರ್ಡರ್‌, 1040 ವಿಡಿಯೋ ಕ್ಯಾಸೆಟ್‌, 3 ಐರನ್‌ ಲಾಕರ್‌, 1,93,202 ರು. ನಗದು ಸೇರಿದಂತೆ ಹಲವು ವಸ್ತುಗಳನ್ನು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.

click me!