
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಮುಂದುವರಿದಿದೆ. ಬಸಿರ್‌ಹತ್‌ನಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ. ರೋಹಿತ್ ರಾಯ್ ಅಲಿಯಾಸ್ ಚಿಂಟು ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಪಕ್ಷದ ಬಾವುಟ ಹಾರಿಸುವ ವಿಚಾರಕ್ಕೆ ಶುರುವಾದ ಗಲಾಟೆ, ಶೂಟೌಟ್‌ನಲ್ಲಿ ಅಂತ್ಯವಾಗಿದೆ. ಈ ದಾಳಿಯ ಹಿಂದೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. ನಿನ್ನೆ ರಾತ್ರಿ ಸುಮಾರು 10 ಗಂಟೆಗೆ ಬಸಿರ್‌ಹತ್ ಪೊಲೀಸ್ ಠಾಣಾ ವ್ಯಾಪ್ತಿಯ ಗೋತ್ರಾ ಪಂಚಾಯತ್‌ನ ರಾಜೀವ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.
ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷದ ಬಾವುಟವನ್ನು ಹಾರಿಸಲು ಪ್ರಯತ್ನಿಸಿದ್ದಾರೆ. ಆಗ ಸ್ಥಳೀಯರ ಗುಂಪೊಂದು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ. ಇದು ಮಾತಿಗೆ ಮಾತು ಬೆಳೆದು, ದೊಡ್ಡ ಗಲಾಟೆಗೆ ಕಾರಣವಾಗಿದೆ. ಇದೇ ವೇಳೆ, ರೋಹಿತ್ ರಾಯ್ ಮೇಲೆ ಗುಂಡು ಹಾರಿಸಲಾಗಿದೆ.
ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿರುವ ರೋಹಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆಯಿಂದಾಗಿ ಇಡೀ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು, ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೆಲವೇ ದಿನಗಳ ಹಿಂದೆ, ಕೋಲ್ಕತ್ತಾ ಸಮೀಪದ ಮಧ್ಯಮಗ್ರಾಮದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಈಗ ಮತ್ತೊಂದು ದಾಳಿ ನಡೆದಿದೆ. ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಸುಮಾರು ಎಂಟು ಮಂದಿ, ಚಂದ್ರನಾಥ್ ಅವರ ಕಾರನ್ನು ಅಡ್ಡಗಟ್ಟಿ ಗುಂಡು ಹಾರಿಸಿದ್ದರು. ತಲೆ, ಎದೆ ಮತ್ತು ಹೊಟ್ಟೆಗೆ ಗುಂಡು ತಗುಲಿತ್ತು. ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇದೇ ವೇಳೆ, ಕಾರಿನಲ್ಲಿದ್ದ ಡ್ರೈವರ್ ಬುದ್ಧದೇವ್ ಬೇರಾ ಅವರಿಗೂ ಗುಂಡೇಟು ತಗುಲಿದ್ದು, ಅವರು ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ್ದ ವಿಪಕ್ಷ ನಾಯಕ ಸುವೇಂದು ಅಧಿಕಾರಿ ಅವರೇ ಮುಖ್ಯಮಂತ್ರಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಓರ್ವ ಮಹಿಳಾ ನಾಯಕಿ ಸೇರಿದಂತೆ ಇಬ್ಬರು ಉಪಮುಖ್ಯಮಂತ್ರಿಗಳು ಇರಲಿದ್ದಾರೆ ಎಂಬ ವರದಿಗಳೂ ಇವೆ. ಇನ್ನೊಂದೆಡೆ, ಚುನಾವಣಾ ತೀರ್ಪನ್ನು ತಿರುಚಲಾಗಿದೆ ಎಂದು ಆರೋಪಿಸಿರುವ ಮಮತಾ ಬ್ಯಾನರ್ಜಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೆ ಪ್ರತಿಭಟನೆ ಮುಂದುವರಿಸಿದ್ದಾರೆ. ರಾಜ್ಯಪಾಲ ಆರ್.ಎನ್. ರವಿ ಅವರು ಮಮತಾ ಜೊತೆ ಮಾತನಾಡಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ