ಪಡಿಕ್ಕಲ್ ಅಬ್ಬರ; ರಾಜಸ್ಥಾನ ವಿರುದ್ಧ ಬೆಂಗಳೂರು ಭರ್ಜರಿ ಜಯಭೇರಿ

By Suvarna NewsFirst Published Oct 3, 2020, 7:19 PM IST
Highlights

ರಾಜಸ್ಥಾನ ರಾಯಲ್ಸ್ ವಿರುದ್ಧ 8 ವಿಕೆಟ್‌ಗಳ ಜಯಭೇರಿ ಬಾರಿಸುವುದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಅಬುಧಾಬಿ(ಅ.03): ಕನ್ನಡಿಗ ದೇವದತ್ ಪಡಿಕ್ಕಲ್(63) ಹಾಗೂ ವಿರಾಟ್ ಕೊಹ್ಲಿ(72) ಆಕರ್ಷಕ ಅರ್ಧಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್‌ ಅಂತರದ ಭರ್ಜರಿ ಜಯ ದಾಖಲಿಸಿದೆ.

ಹೌದು, 165 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರಂಭದಲ್ಲೇ ಆ್ಯರೋನ್ ಫಿಂಚ್ ವಿಕೆಟ್ ಕಳೆದುಕೊಂಡಿತು. ಆದರೆ ಆ ಬಳಿಕ ಎರಡನೇ ವಿಕೆಟ್‌ಗೆ ಜತೆಯಾದ ದೇವದತ್ ಪಡಿಕ್ಕಲ್ ಹಾಗೂ ನಾಯಕ ವಿರಾಟ್ ಕೊಹ್ಲಿ ಜೋಡಿ ಅನಾಯಾಸವಾಗಿ ಬ್ಯಾಟ್‌ ಬೀಸುವ ಮೂಲಕ ತಂಡಕ್ಕೆ ನೆರವಾದರು. ದೇವದತ್ ಪಡಿಕ್ಕಲ್ ಕೇವಲ 34 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಮೊದಲ 4 ಪಂದ್ಯಗಳಲ್ಲಿ 3 ಅರ್ಧಶತಕ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎನ್ನುವ ಕೀರ್ತಿಗೆ ಪಡಿಕ್ಕಲ್ ಪಾತ್ರಾರಾದರು. ಆ ಬಳಿಕವೂ ಪಡಿಕ್ಕಲ್ ಭರ್ಜರಿ ಬ್ಯಾಟಿಂಗ್ ನಡೆಸಿದರು. ಅಂತಿಮವಾಗಿ ಪಡಿಕ್ಕಲ್ 45 ಎಸೆತಗಳನ್ನು ಎದುರಿಸಿದ ಪಡಿಕ್ಕಲ್ 6 ಬೌಂಡರಿ ಹಾಗೂ ಒಂದು ಮನಮೋಹಕ ಸಿಕ್ಸರ್ ನೆರವಿನಿಂದ 63 ರನ್ ಬಾರಿಸಿ ಜೋಫ್ರಾ ಆರ್ಚರ್‌ಗೆ ವಿಕೆಟ್ ಒಪ್ಪಿಸಿದರು. ಎರಡನೇ ವಿಕೆಟ್‌ಗೆ ಈ ಜೋಡಿ 99 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಮತ್ತೊಂದು ತುದಿಯಲ್ಲಿ ನಾಯಕನ ಆಟವಾಡಿದ ವಿರಾಟ್ ಕೊಹ್ಲಿ ಕೂಡಾ ಆಕರ್ಷಕ ಅರ್ಧಶತಕ ಬಾರಿಸಿದರು. ಮೊದಲ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್ ವೈಫಲ್ಯವನ್ನು ಅನುಭವಿಸಿದ್ದ ನಾಯಕ ಕೊಹ್ಲಿ ಈ ಬಾರಿ ಎಚ್ಚರಿಕೆಯ ಆಟಕ್ಕೆ ಮೊರೆ ಹೋದರು. ಪರಿಣಾಮ 41 ಎಸೆತಗಳಲ್ಲಿ ಕೊಹ್ಲಿ ಅರ್ಧಶತಕ ಪೂರೈಸಿದರು. ಅಂತಿಮವಾಗಿ ಎಬಿಡಿ ಜತೆ ಚುರುಕಿನ ಜತೆಯಾಟವಾಡುವ ಮೂಲಕ ತಂಡವನ್ನು ಅನಾಯಾಸವಾಗಿ ಗೆಲುವಿನ ದಡ ಸೇರಿಸಿದರು. ಕೊಹ್ಲಿ ಕೇವಲ 53 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಅಜೇಯ 72 ರನ್ ಬಾರಿಸಿ ಅಜೇಯರಾಗುಳಿದರು.

ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ರಾಜಸ್ಥಾನ ರಾಯಲ್ಸ್ ತಂಡ ಯುಜುವೇಂದ್ರ ಚಹಲ್ ದಾಳಿಗೆ ತತ್ತರಿಸಿ ಕೇವಲ 164 ರನ್ ಗಳಿಸಲಷ್ಟೇ ಶಕ್ತವಾಯಿತು. ಆರಂಭದಲ್ಲೇ ಸ್ಟೀವ್ ಸ್ಮಿತ್, ಜೋಸ್ ಬಟ್ಲರ್ ಹಾಗೂ ಸಂಜು ಸ್ಯಾಮ್ಸನ್ ಅವರನ್ನು ಬಲಿ ಪಡೆಯುವ ಮೂಲಕ ಪಂದ್ಯದ ಮೇಲೆ ಆರ್‌ಸಿಬಿ ಬಿಗಿ ಹಿಡಿತ ಸಾಧಿಸಿತು.
 
 

click me!