ಕೇಂದ್ರದಿಂದ ಕನ್ನಡಿಗರಿಗೆ ದ್ರೋಹ : ಮೋದಿಯಿಂದ ನ್ಯಾಯ ಕೊಡಿಸಲಿ

By Kannadaprabha NewsFirst Published Jul 14, 2021, 10:59 AM IST
Highlights
  • ಬ್ಯಾಂಕಿಂಗ್‌ ಸಿಬ್ಬಂದಿ ನೇಮಕಾತಿಗೆ ನಡೆಸುವ ಐಬಿಪಿಎಸ್‌ ಪರೀಕ್ಷೆ
  • ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ಕನ್ನಡಿಗರಿಗೆ ದ್ರೋಹ
  • ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

ಬೆಂಗಳೂರು (ಜು.14):  ಬ್ಯಾಂಕಿಂಗ್‌ ಸಿಬ್ಬಂದಿ ನೇಮಕಾತಿಗೆ ನಡೆಸುವ ಐಬಿಪಿಎಸ್‌ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಈ ಬಗ್ಗೆ ಗಮನ ಹರಿಸಿ ಕನ್ನಡಿಗರಿಗೆ ನ್ಯಾಯ ಒದಗಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಅವರು, ಕೇಂದ್ರ, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಸಂಸದರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮನ್ನು ರಾಜ್ಯದ ಹುಲಿ-ಸಿಂಹಗಳೆಂದು ವಂದಿ ಮಾಗಧÜರಿಂದ ಘೋಷಣೆ ಕೂಗಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವಾಗ ಮಾತ್ರ ಬೆದರಿದ ಇಲಿಯಾಗುತ್ತಾರೆ. ಬ್ಯಾಂಕಿಂಗ್‌ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿ ಅವರು ಪ್ರಧಾನಿ ಮೋದಿ ಅವರ ಗಮನ ಸೆಳೆದು ಕನ್ನಡಿಗರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸ್ಥಳೀಯ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ: ನಿರ್ಮಾಲಾ ಸೀತಾರಾಮನ್ ಭೇಟಿಯಾದ ಜೋಶಿ

ಐಬಿಪಿಎಸ್‌ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 3000 ಕಾರಕೂನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಇವುಗಳಲ್ಲಿ 407 ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶವಿಲ್ಲದ್ದರಿಂದ ಸಾಕಷ್ಟುಕನ್ನಡಿಗ ಯುವಜನರು ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ. ಅಲ್ಲದೆ, ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ಯೋಜನೆಗಳ ಅನುಷ್ಠಾನ ಬ್ಯಾಂಕುಗಳ ಮೂಲಕವೇ ನಡೆಯುವುದರಿಂದ ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಗ್ರಾಮೀಣ ಭಾಗ ಜನತೆ ಹೆಚ್ಚು ಹೆಚ್ಚು ಬ್ಯಾಂಕನ್ನು ಅವಲಂಭಿಸಿದ್ದಾರೆ. ಕನ್ನಡ ಬಾರದ ಸಿಬ್ಬಂದಿಯಿಂದಾಗಿ ಈ ಜನಸಮುದಾಯ ಪ್ರತಿನಿತ್ಯ ಕಿರುಕುಳ ಅನುಭವಿಸುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸೀತಾರಾಮನ್‌ ಭರವಸೆ ಈಡೇರಿಲ್ಲ:  2014ರಲ್ಲಿ ಬಿಜೆಪಿ ಸರ್ಕಾರ ಐಬಿಪಿಎಸ್‌ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಕನ್ನಡ ಸೇರಿ ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ತೆಗೆದುಹಾಕಿ ಇಂಗ್ಲೀಷ್‌ ಮತ್ತು ಹಿಂದಿಯೇತರ ಭಾಷಿಕ ಯುವಜನರಿಗೆ ಅನ್ಯಾಯಮಾಡಿದೆ. ಇದನ್ನು ಪ್ರತಿಭಟಿಸಿ ಹಿಂದಿನ ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರವನ್ನೂ ಬರೆದಿತ್ತು. ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬ್ಯಾಂಕಿಂಗ್‌ ಪರೀಕ್ಷೆಗಳನ್ನು ಕನ್ನಡದಲ್ಲೂ ನಡೆಸುವ ಭರವಸೆಯನ್ನು ಲೋಕಸಭೆಯಲ್ಲಿ ನೀಡಿದ್ದರೂ ಆ ಭರವಸೆ ಇಂದಿಗೂ ಈಡೇರಿಲ್ಲ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

25 ಸಂಸದರ ಬಾಯಿಗೆ ಬೀಗ

ರಾಜ್ಯಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್‌ ಮತ್ತೆ ಮತ್ತೆ ಕನ್ನಡ-ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸೌಲಭ್ಯಗಳ ಸುನಾಮಿ ಬರಲಿದೆ ಎಂದು ಬುರುಡೆ ಬಿಟ್ಟಕರ್ನಾಟಕ ಬಿಜೆಪಿಯಿಂದ ಆಯ್ಕೆಯಾದ 25 ಸಂಸದರು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ.

- ಸಿದ್ದರಾಮಯ್ಯ, ವಿಪಕ್ಷ ನಾಯಕ

ಕಾನೂನು ಹೋರಾಟ : ಮಹೇಶ್‌ ಜೋಶಿ ಎಚ್ಚರಿಕೆ

ಬೆಂಗಳೂರು: ಬ್ಯಾಂಕಿಂಗ್‌ ಪರೀಕ್ಷೆಯನ್ನು ಕೇವಲ ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾತ್ರ ನಡೆಸುತ್ತಿದ್ದು ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಇದನ್ನು ಸರಿಪಡಿಸದಿದ್ದರೆ ಕಾನೂನು ಹೋರಾಟ ನಡೆಸುವುದಾಗಿ ದೂರದರ್ಶನ ಕೇಂದ್ರದ ವಿಶ್ರಾಂತ ಹೆಚ್ಚುವರಿ ಮಹಾ ನಿರ್ದೇಶಕ ಹಾಗೂ ಕಸಾಪ ಚುನಾವಣೆ ಸ್ಪರ್ಧಿ ಡಾ.ಮಹೇಶ ಜೋಶಿ ಎಚ್ಚರಿಸಿದ್ದಾರೆ.

ಗ್ರಾಮೀಣ ಬ್ಯಾಂಕುಗಳಲ್ಲಿ 10,447 ಹುದ್ದೆಗಳಿಗೆ ನೇಮಕಾತಿ, ಅರ್ಜಿ ಗುಜರಾಯಿಸಿ

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಕೆನರಾ ಬ್ಯಾಂಕ್‌ ಸೇರಿದಂತೆ 11 ಬ್ಯಾಂಕ್‌ನಲ್ಲಿ ಖಾಲಿ ಇರುವ 3 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದ ಕನ್ನಡಿಗರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರದ ಆರ್ಥಿಕ ಇಲಾಖೆಯ ಕಾರ್ಯದರ್ಶಿಹಾಗೂ ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಸಂಸ್ಥೆಯ ಮುಖ್ಯಸ್ಥರು ಈ ಬಗ್ಗೆ ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

click me!