ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆತಂಕದಿಂದ ನಿಂತು ಹೋಗಿದ್ದ ಪ್ರಕ್ರಿಯೆಗಳು ಇದೀಗ ಮತ್ತೆ ಪುನರಾರಮಭವಾಗುತ್ತಿದೆ ಇದೇ ವೇಳೆ ಬರೋಬ್ಬರಿ 20 ಸಾವಿರ ಶಿಕ್ಷಕರ ನೇಮಕಾತಿ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು (ಜ.28): ಮುಂದಿನ ಎರಡು ವರ್ಷಗಳಲ್ಲಿ ರಾಜ್ಯ ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿ ಮಾಡಲು ಉದ್ದೇಶಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ಸ್ತರಗಳ ನೌಕರರ ಸಂಘಗಳ ಪದಾಧಿಕಾರಿಗಳೊಂದಿಗೆ ಬುಧವಾರ ನಗರದಲ್ಲಿ ಸಭೆ ನಡೆಸಿದ ಸಚಿವರು ಈ ವಿಷಯ ತಿಳಿಸಿದರು.
ಕಳೆದ ಒಂದು ವರ್ಷದಲ್ಲಿ 3008 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ, 2404 ಪ್ರೌಢಶಾಲಾ ಶಿಕ್ಷಕರಾಗಿ, 1342 ಪ್ರೌಢಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ, 396 ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಪ್ರಾಂಶುಪಾಲರಾಗಿ ಬಡ್ತಿ, 40 ಮಂದಿ ಪ್ರಾಂಶುಪಾಲರಿಗೆ ಪದವಿ ಪೂರ್ವ ಶಿಕ್ಷಣ ಉಪ ನಿರ್ದೇಶಕರಾಗಿ ಬಡ್ತಿ, 200ಕ್ಕೂ ಹೆಚ್ಚು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಬಡ್ತಿ ಸೇರಿದಂತೆ ಹಲವು ವರ್ಷಗಳಿಂದ ಬಾಕಿ ಇದ್ದ ಪದೋನ್ನತಿ ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.
ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಪೋಷಕರೇ ಗಮನಿಸಿ! ...
ಇದೇ ವೇಳೆ ಇಲಾಖೆಯ ಸಚಿವಾಲಯ, ಆಯುಕ್ತಾಲಯ ಮತ್ತು ನಿರ್ದೇಶನಾಲಯಗಳಲ್ಲಿ ಕಡತ ವಿಲೇವಾರಿ ಮಾಡುವಂತೆ ಮತ್ತು ಶಿಕ್ಷಕರು, ಉಪನ್ಯಾಸರ ವರ್ಗಾವಣೆ, ವೃಂದ ನೇಮಕಾತಿ, ಬಡ್ತಿ, ವೇತನ ತಾರತಮ್ಯ ಸೇರಿದಂತೆ ಸರ್ಕಾರಕ್ಕೆ ಆರ್ಥಿಕ ಹೊರೆಯಾಗದ ಶಿಕ್ಷಕರ ನ್ಯಾಯಯುತ ಬೇಡಿಕೆಗಳ ಬಗ್ಗೆ ಹದಿನೈದು ದಿನಗಳಲ್ಲಿ ಅಗತ್ಯ ಪ್ರಸ್ತಾವನೆ ಸಿದ್ಧಪಡಿಸಿ ನೀಡುವಂತೆ ಅಧಿಕಾರಿಗಳಿಗೆ ಸ್ಪಷ್ಟಸೂಚನೆ ನೀಡಿರುವುದಾಗಿ ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಕರ್ನಾಟಕ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಸಂಘ, ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವೇದಿಕೆ ಸೇರಿದಂತೆ ಬೋಧಕ ಹಾಗೂ ಬೋಧಕೇತರ ನೌಕರರ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.