Animal Husbandry Department : ಪಶು ಇಲಾಖೆ ಖಾಲಿ ಹುದ್ದೆಗಳ ಭರ್ತಿಗೆ ಅನುಮತಿ : ಚವ್ಹಾಣ್‌

By Kannadaprabha News  |  First Published Dec 25, 2021, 8:06 AM IST
  • ಪಶು ಇಲಾಖೆ ಖಾಲಿ ಹುದ್ದೆಗಳ ಭರ್ತಿಗೆ ಅನುಮತಿ : ಚವ್ಹಾಣ್‌
  •  ಹುದ್ದೆ ಭರ್ತಿಯಿಂದ ಯೋಜನೆ ಅನುಷ್ಠಾನಕ್ಕೆ ವೇಗ

 ಬೆಳಗಾವಿ (ಡಿ.25):  ಪಶು ಸಂಗೋಪನೆ ಇಲಾಖೆಯಲ್ಲಿ (Animal Husbandry Department ) ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅನುಮತಿ ದೊರೆತಿದೆ ಎಂದು ತಿಳಿಸಿರುವ ಸಚಿವ ಪ್ರಭು ಚೌವ್ಹಾಣ್‌ (Prabhu Chavan) ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yediyutappa) ಅವರಿಗೆ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.  ಪಶುಸಂಗೋಪನೆ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಹುದ್ದೆಗಳು ಖಾಲಿ ಇದ್ದಿದ್ದರಿಂದ ಸಮರ್ಪಕವಾಗಿ ಯೋಜನೆಗಳ ಅನುಷ್ಠಾನಕ್ಕೆ ತೊಂದರೆಯಾಗುತ್ತಿತ್ತು. ಗೋಹತ್ಯೆ ನಿಷೇಧ ಕಾಯ್ದೆ, ಜಿಲ್ಲೆಗೊಂದು ಗೋಶಾಲೆ, ಪ್ರಾಣಿ ಕಲ್ಯಾಣ ಸಹಾಯವಾಣಿ ಸೇರಿದಂತೆ ಇತ್ತೀಚೆಗೆ ಪರಿಚಯಿಸಿದ ಇಲಾಖೆಯ ಯೋಜನೆಗಳಿಗೆ ಸಿಬ್ಬಂದಿ ಕೊರತೆಯಿಂದ ಹಿನ್ನಡೆ ಆಗುತ್ತಿತ್ತು.

ಪ್ರತಿಬಾರಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳ ಕೊರತೆ ನೀಗಿಸಲು ಮನವಿ ಮಾಡಿಕೊಳ್ಳುತ್ತಿದ್ದರು. ಅಲ್ಲದೆ ಅಧಿವೇಶನದ ಸಂದರ್ಭದಲ್ಲಿ ವಿಧಾನಪರಿಷತ್‌ ಹಾಗೂ ವಿಧಾನಸಭೆಯಲ್ಲಿ ಸದಸ್ಯರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಸಿಬ್ಬಂದಿ ಕೊರತೆ ಕುರಿತು ಪ್ರಶ್ನೆ ಹಾಕುವುದು ವಾಡಿಕೆಯಾಗಿತ್ತು.

Tap to resize

Latest Videos

ಕಳೆದ ಸರ್ಕಾರದ ಅವಧಿಯಲ್ಲಿ ಬಿ.ಎಸ್‌.ಯಡಿಯೂರಪ್ಪ (BS Yediyurappa)  ಅವರೊಂದಿಗೆ ನೇಮಕಾತಿ ಕುರಿತು ಚರ್ಚೆ ನಡೆಸಿದ್ದೆ. ಅಲ್ಲದೆ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪಶುಸಂಗೋಪನೆ ಇಲಾಖೆಗೆ ನೇಮಕಾತಿಯಲ್ಲಿ ಇರುವ ತೊಡಕುಗಳ ಕುರಿತು ಮಾತುಕತೆ ನಡೆಸಿದ್ದೆ. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡಿಕೊಂಡ ನಂತರ ಪಶುಸಂಗೋಪನೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಗಳಿಂದ ಎದುರಾಗುತ್ತಿರುವ ಸಮಸ್ಯೆ ಕುರಿತು ಹಲವು ಬಾರಿ ಚರ್ಚೆ ನಡೆಸಲಾಗಿತ್ತು. ಇದೀಗ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯಿಂದಾಗಿ ಇಲಾಖೆಯ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ವೇಗ ದೊರೆಯಲಿದ್ದು ಪಶುಸಂಗೋಪನೆ ಇಲಾಖೆ ಮತ್ತಷ್ಟು ಚುರುಕಾಗಿ ಕಾರ್ಯ ನಿರ್ವಹಿಸಲು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆ, ಜಿಲ್ಲೆಗೊಂದು ಗೋಶಾಲೆ, ಪ್ರಾಣಿ ಕಲ್ಯಾಣ ಸಹಾಯವಾಣಿ ಸೇರಿದಂತೆ ಇತ್ತೀಚೆಗೆ ಪರಿಚಯಿಸಿದ ಇಲಾಖೆಯ ಯೋಜನೆಗಳಿಗೆ ಸಿಬ್ಬಂದಿ ಕೊರತೆಯಿಂದ ಹಿನ್ನಡೆ ಆಗುತ್ತಿತ್ತು.

- ಪ್ರಭು ಚವ್ಹಾಣ್‌, ಪಶುಸಂಗೋಪನೆ ಸಚಿವ

ರಾಜ್ಯದಲ್ಲಿ ಶೀಘ್ರದಲ್ಲಿ  ಉದ್ಯೋಗ  ನೀತಿ :  ರಾಜ್ಯದಲ್ಲಿ (Karnataka)  ಶೀಘ್ರದಲ್ಲೇ ಅತ್ಯಂತ ರಚನಾತ್ಮಕವಾದ `ಉದ್ಯೋಗ ನೀತಿ'ಯನ್ನು ಜಾರಿಗೆ ತರಲಾಗುವುದು. ಈ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ಕೊಡುತ್ತಿದ್ದು, ನಿರುದ್ಯೋಗ ಸಮಸ್ಯೆ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)  ಹೇಳಿದ್ದಾರೆ. ಇಲ್ಲಿನ ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ 'ಸರ್ವರಿಗೂ ಉದ್ಯೋಗ' ಕಾರ್ಯಕ್ರಮ ಲೋಕಾರ್ಪಣೆ ಮತ್ತು 'ಉದ್ಯೋಗ ಮೇಳ'ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದುವರೆಗೂ ಉದ್ಯೋಗದಾತರಿಗೆ ಒಂದು ಸಾಮಾನ್ಯ ಸೂತ್ರದಡಿ ಪ್ರೋತ್ಸಾಹ ಮತ್ತು ಉತ್ತೇಜಕ ಭತ್ಯೆಗಳನ್ನು ಕೊಡಲಾಗುತ್ತಿತ್ತು. ಆದರೆ ಇನ್ನು ಮುಂದೆ ಯಾವ ಸಂಸ್ಥೆಯು ಎಷ್ಟು ಉದ್ಯೋಗಗಳನ್ನು ಸೃಷ್ಟಿಸಿದೆ ಎನ್ನುವುದನ್ನು ಆಧರಿಸಿ ಪ್ರೋತ್ಸಾಹ ಕೊಡಲಾಗುತ್ತದೆ ಎಂದರು. 

ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣ (Education),  ಕೌಶಲ್ಯ ಪೂರೈಕೆ ಮತ್ತು ಉದ್ಯೋಗ ಸೃಷ್ಟಿ ಈ ಮೂರೂ ಅಂಶಗಳು ಒಂದರ ಜೊತೆಯಲ್ಲಿ ಇನ್ನೊಂದಿರುವಂತೆ ವ್ಯವಸ್ಥೆಯನ್ನು ರೂಪಿಸಲಾಗಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ, ಶಿಕ್ಷಣ ಕ್ರಮವನ್ನು ಉದ್ಯೋಗದಾತ ಸಂಸ್ಥೆಗಳೊಂದಿಗೆ ಸಕ್ರಿಯವಾಗಿ ಬೆಸೆಯಲಾಗಿದೆ. ಇನ್ನೊಂದೆಡೆಯಲ್ಲಿ ಉನ್ನತ ಶಿಕ್ಷಣ ಮತ್ತು ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಜಾಗತಿಕ ಮಟ್ಟದ ಶೈಕ್ಷಣಿಕ ವಾತಾವರಣದೊಂದಿಗೆ ಬೆಸೆಯಲಾಗುತ್ತಿದೆ. ಇದಕ್ಕಾಗಿ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಗಳು ಹತ್ತಾರು ಒಡಂಬಡಿಕೆಗಳನ್ನು ಮಾಡಿಕೊಂಡಿವೆ ಎಂದು ಅವರು ವಿವರಿಸಿದರು. 

 ಈ ಉದ್ಯೋಗ (Job) ಮೇಳವು ಸರಕಾರದ ಬದ್ಧತೆಯ ಪ್ರತೀಕವಾಗಿದೆಯೇ ವಿನಾ ಪ್ರಚಾರ ಗಿಟ್ಟಿಸಿಕೊಳ್ಳಲೆಂದು ಇದನ್ನೆಲ್ಲ ಮಾಡುತ್ತಿಲ್ಲ. ಇಲ್ಲಿ ಪ್ರತಿಯೊಂದನ್ನೂ ವ್ಯವಸ್ಥಿತವಾಗಿ ಮಾಡಲಾಗಿದೆ. ಇದಕ್ಕಾಗಿ ನಾನು ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಅಶ್ವತ್ಥನಾರಾಯಣ ಅವರನ್ನು ಅಭಿನಂದಿಸುತ್ತೇನೆ ಎಂದು ಇದೇ ವೇಳೆ ಬಸವರಾಜ ಬೊಮ್ಮಾಯಿ ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಪ್ರತಿಯೊಬ್ಬ ವಿದ್ಯಾವಂತರಿಗೂ ಅವರಿಗೆ ಆಸಕ್ತಿ ಇರುವಂತಹ ಉದ್ಯೋಗಗಳೇ ದೊರಕುವಂತಾಗಬೇಕು ಎನ್ನುವುದು ಸರಕಾರದ ಸಂಕಲ್ಪವಾಗಿದ್ದು, ಈ ಮಹತ್ತ್ವಾಕಾಂಕ್ಷೆಯಿಂದಲೇ 'ಸಕಲರಿಗೂ ಉದ್ಯೋಗ' ಕಾರ್ಯಕ್ರಮ ರೂಪಿಸಲಾಗಿದೆ ಎಂದರು. 

ಬೆಳಗಾವಿಯಲ್ಲಿ ಈಗಾಗಲೇ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕೇಂದ್ರ ಕಚೇರಿ ಇದೆ. ರಾಜ್ಯದ ಒಟ್ಟು 6 ವಿ.ವಿ.ಗಳನ್ನು 'ಯೂನಿವರ್ಸಿಟಿ ಆಫ್ ಎಮಿನೆನ್ಸ್' ಮಟ್ಟಕ್ಕೆ ಮತ್ತು 7 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ವಿಟಿಯು ಅಭಿವೃದ್ಧಿಗೆ ಸಂಬಂಧಿಸಿದ ಕ್ರಿಯಾ ಯೋಜನೆಯು ಒಂದು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಚಿವರಾದ ಶಶಿಕಲಾ ಜೊಲ್ಲೆ, ಬಸವರಾಜ ಭೈರತಿ, ಶಾಸಕ ಅಭಯ ಪಾಟೀಲ ಮುಂತಾದವರು ಉಪಸ್ಥಿತರಿದ್ದರು. 

click me!