ಸಾಲ ಮನ್ನಾಕ್ಕೆ ಕಾಂಗ್ರೆಸ್ ವಿರೋಧ ಇಲ್ಲ

First Published May 31, 2018, 10:40 AM IST
Highlights

ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಪಕ್ಷವು ಬದಟಛಿವಿದ್ದು, ರೈತರ ಸಾಲ ಮನ್ನಾ ವಿಚಾರದಲ್ಲಿ ಪಕ್ಷದ ವಿರೋಧ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳುವ ಮೂಲಕ ಜೆಡಿಎಸ್ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಸಾಲಮನ್ನಾ ಮಾಡಲು ಸಹಮತ ವ್ಯಕ್ತಪಡಿಸಿದ್ದಾರೆ.

ತುಮಕೂರು[ಮೇ.31]: ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಪಕ್ಷವು ಬದಟಛಿವಿದ್ದು, ರೈತರ ಸಾಲ ಮನ್ನಾ ವಿಚಾರದಲ್ಲಿ ಪಕ್ಷದ ವಿರೋಧ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳುವ ಮೂಲಕ ಜೆಡಿಎಸ್ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಸಾಲಮನ್ನಾ ಮಾಡಲು ಸಹಮತ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷವು ಚುನಾವಣಾ ಪ್ರಚಾರದ ವೇಳೆ 53 ಸಾವಿರ ಕೋಟಿ ರು. ರೈತರ ಸಾಲ ಮನ್ನಾ ಮಾಡುವ ಕುರಿತು ಘೋಷಣೆ ಮಾಡಿದೆ. ಅಲ್ಲದೇ, ಪ್ರಣಾಳಿಕೆಯಲ್ಲಿಯೂ ಆ ಭರವಸೆ ನೀಡಲಾಗಿದೆ. ಒಂದು ವೇಳೆ ಸ್ವತಂತ್ರವಾಗಿ ಜೆಡಿಎಸ್ ಅಧಿಕಾರಕ್ಕೆ ಬಂದಿದ್ದರೆ ಸಾಲ ಮನ್ನಾ ಮಾಡಲು ಯಾವುದೇ ಸಮಸ್ಯೆಯಾಗುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು. ರಾಜ್ಯದ ಜನತೆ ಯಾವುದೇ ಪಕ್ಷಕ್ಕೆ ಬಹುಮತ ನೀಡದ ಕಾರಣ ಅನಿವಾರ್ಯವಾಗಿ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. ಸಮ್ಮಿಶ್ರ ಸರ್ಕಾರ ರಚನೆಯಾದರೂ ರೈತರು ಆತಂಕ ಪಡಬೇಕಾದ ಅಗತ್ಯ ಇಲ್ಲ. ಆತ್ಯಹತ್ಯೆ ದಾರಿ ಹಿಡಿಯಬೇಕಾಗಿಲ್ಲ. ಸರ್ಕಾರದ ಮೇಲೆ ಯಾವುದೇ ರೀತಿಯಲ್ಲೂ ಅನುಮಾನ ಬೇಕಿಲ್ಲ. ಸಾಲಮನ್ನಾ ವಿಷಯದಲ್ಲಿ ಕಾಂಗ್ರೆಸ್ ಪಕ್ಷದ ವಿರೋಧ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಡಳಿತಾವಧಿಯಲ್ಲಿ 72 ಸಾವಿರ ಕೋಟಿ ರು.ನಷ್ಟು ರೈತರ ಸಾಲಮನ್ನಾ ಮಾಡಿದ್ದರು. ಇದಕ್ಕೆ ರಿಸರ್ವ್ ಬ್ಯಾಂಕ್ ಆಕ್ಷೇಪ ವ್ಯಕ್ತಪಡಿಸಿತು. ಇನ್ನು ರಾಜ್ಯದ ರೈತರ ಸಾಲ ಮನ್ನಾ ವಿಚಾರದಲ್ಲಿಯೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ನಿಯೋಗ ದೆಹಲಿಗೆ ತೆರಳಿ ಪ್ರಧಾನಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಆದರೆ ಸಾಲ ಮನ್ನಾಕ್ಕೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಬಳಿಕ ಕಾಂಗ್ರೆಸ್ ಸರ್ಕಾರವು ಸಹಕಾರಿ ಬ್ಯಾಂಕ್'ಗಳಲ್ಲಿನ 50 ಸಾವಿರ ರು.ವರೆಗಿನ ಸಾಲ ಮನ್ನಾ ಮಾಡಲಾಯಿತು ಎಂದರು. ಸಮ್ಮಿಶ್ರ ಸರ್ಕಾರದ ಆಡಳಿತವಧಿಯಲ್ಲಿ ನಾಳೆನೇ ಸಾಲ ಮನ್ನಾ ಮಾಡಿ ಎಂದು ಹೇಳುವುದು ಸರಿಯಲ್ಲ. ಎರಡು ಪಕ್ಷದವರು ಕುಳಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಬೇಕಿದೆ. ಇದಕ್ಕೆ ಕಾಲಾವಕಾಶದ ಅಗತ್ಯ ಇದೆ ಎಂದು ತಿಳಿಸಿದರು.

click me!