ಕೊರೋನಾ ಸೋಂಕು ಹರಡದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಟೊಂಕ ಕಟ್ಟಿನಿಂತಿರುವ ಸಮಯದಲ್ಲಿ ಇಲ್ಲಿನ ತಾಲೂಕು ಕಚೇರಿಯಲ್ಲಿಯೇ ಕೊರೋನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆ.
ಗುಂಡ್ಲುಪೇಟೆ(ಜೂ.30): ಕೊರೋನಾ ಸೋಂಕು ಹರಡದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಟೊಂಕ ಕಟ್ಟಿನಿಂತಿರುವ ಸಮಯದಲ್ಲಿ ಇಲ್ಲಿನ ತಾಲೂಕು ಕಚೇರಿಯಲ್ಲಿಯೇ ಕೊರೋನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆ.
ಇದಕ್ಕೆ ಕಾರಣ ಕಚೇರಿಗೆ ಬರುವ ಸಾರ್ವಜನಿಕರ ಆರೋಗ್ಯ ತಪಾಸಣೆಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲು ಓರ್ವ ಸಿಬ್ಬಂದಿ ಇಲ್ಲ. ಇದರ ಬದಲಾಗಿ ಮಾಸ್ಕ್ ಮಾರಾಟ ಮಾಡುವ 14 ವರ್ಷದ ಬಾಲಕ ಕಚೇರಿಗೆ ಬರುವ ಜನರಿಗೆ ಸ್ಕ್ರೀನಿಂಗ್ ಮಾಡುತ್ತಿದ್ದಾನೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ದಾವಣಗೆರೆಯಲ್ಲಿ ಮತ್ತೆರೆಡು ಹೊಸ ಕೇಸ್; 11 ಮಂದಿ ಡಿಸ್ಚಾರ್ಜ್
ಮಾಸ್ಕ್ ಮಾರುವ ಹುಡುಗ ಥರ್ಮಲ್ ಸ್ಕ್ರೀನಿಂಗ್ ಮಾಡುತ್ತಿದ್ದರೂ, ತಹಸೀಲ್ದಾರ್ ಎಂ.ನಂಜುಂಡಯ್ಯ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಪಟ್ಟಣದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಇಂತ ಸಮಯದಲ್ಲಾದರೂ ತಾಲೂಕು ಆಡಳಿತ ಥರ್ಮಲ್ ಸ್ಕ್ರೀನಿಂಗ್‌ಗೆ ಓರ್ವ ಸಿಬ್ಬಂದಿ ನೇಮಿಸದಿರುವುದು ದುರಂತ ವಿಷಯ.
ಅಧಿಕಾರಿ, ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿರುವುದು ಕಡ್ಡಾಯ
ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಠಿಯಿಂದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲೇ ವಾಸ್ತವ್ಯ ಹೂಡಲು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿರದೇ ಮೈಸೂರು ಜಿಲ್ಲೆಯಿಂದ ಪ್ರತಿನಿತ್ಯ ಓಡಾಡುತ್ತಿರುವುದು ಕಂಡು ಬಂದಿದೆ. ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಸಂಬಂಧ ತುರ್ತು ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕಿದೆ.
ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರು ಹೊರಜಿಲ್ಲೆಗಳಿಂದ ಓಡಾಟ ನಡೆಸುವುದರಿಂದ ಕೊರೋನಾ ಹರಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲೇ ವಾಸ್ತವ್ಯ ಹೂಡಬೇಕು. ತಪ್ಪಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.