ಚಿತ್ರದುರ್ಗ ಜಿಲ್ಲೆಯ ರೈತರಿಗೆ 223 ಕೋಟಿ ಬೆಳೆ ಪರಿಹಾರ: ಸಚಿವ ಬಿ.ಸಿ.ಪಾಟೀಲ್‌

By Govindaraj SFirst Published Dec 17, 2022, 8:27 PM IST
Highlights

ಮುಂಗಾರು ಹಂಗಾಮಿನಲ್ಲಿನ ಅತಿವೃಷ್ಟಿಯಿಂದಾಗಿ ಸಂಭವಿಸಿದ ಬೆಳೆ ಹಾನಿಗೆ ಸಂಬಂಧಪಟ್ಟಂತೆ ಜಿಲ್ಲೆಯ ರೈತರಿಗೆ 223.30 ಕೋಟಿ ರು. ಬೆಳೆಹಾನಿ ಪರಿಹಾರ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್‌ ತಿಳಿಸಿದರು. 

ಚಿತ್ರದುರ್ಗ (ಡಿ.17): ಮುಂಗಾರು ಹಂಗಾಮಿನಲ್ಲಿನ ಅತಿವೃಷ್ಟಿಯಿಂದಾಗಿ ಸಂಭವಿಸಿದ ಬೆಳೆ ಹಾನಿಗೆ ಸಂಬಂಧಪಟ್ಟಂತೆ ಜಿಲ್ಲೆಯ ರೈತರಿಗೆ 223.30 ಕೋಟಿ ರು. ಬೆಳೆಹಾನಿ ಪರಿಹಾರ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್‌ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ವಿವಿಧ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ, ಪರಿಹಾರ ತಂತ್ರಾಂಶದಲ್ಲಿ ದಾಖಲಿಸಿ, ರೈತರಿಗೆ ಬೆಳೆಹಾನಿ ಪರಿಹಾರ ಹಣ ಬಿಡುಗಡೆ ಮಾಡಲು ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ, ಇದರಿಂದಾಗಿ ರೈತರಿಗೆ ತ್ವರಿತವಾಗಿ ಪರಿಹಾರ ಪಾವತಿಸಲು ಸಾಧ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿಂಗಾರು ಹಂಗಾಮಿಗೆ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಇದೆ. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ 1.60 ಲಕ್ಷ ರೈತರಿಗೆ 164.54 ಕೋಟಿ ರುಪಾಯಿ ಪಾವತಿಯಾಗಿದೆ. ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಕಾರ್ಯಕ್ರಮದಡಿಯಲ್ಲಿ 27,488 ವಿದ್ಯಾರ್ಥಿಗಳಿಗೆ 10.33 ಕೋಟಿ ರು. ಪಾವತಿಯಾಗಿದೆ. ರೈತ ಶಕ್ತಿ ಯೋಜನೆ ಸಂಬಂಧಪಟ್ಟಂತೆ ಜಿಲ್ಲೆಯ ರೈತರ ಪಟ್ಟಿಯನ್ನು ಕಳುಹಿಸಲಾಗಿದೆ. ರೈತರ ಇ-ಕೆವೈಸಿ ಮಾಡುವ ಪ್ರಕ್ರಿಯೆಯಲ್ಲಿ ಚಿತ್ರದುರ್ಗ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಬಿ.ಸಿ.ಪಾಟೀಲ್‌ ಹೇಳಿದರು.

ಮುರುಘಾ ಶ್ರೀ ವಿರುದ್ಧ ಪಿತೂರಿ: ಸೌಭಾಗ್ಯ ಬಸವರಾಜನ್‌ ಪೊಲೀಸರ ವಶಕ್ಕೆ

ಜಿಲ್ಲೆಯಲ್ಲಿ ಹಾಸ್ಟೆಲ್‌ ವ್ಯವಸ್ಥೆಯ ಬಗ್ಗೆ ಸಾಕಷ್ಟುದೂರುಗಳು ಕೇಳಿಬರುತ್ತಿವೆ. ಸರ್ಕಾರ ಮಕ್ಕಳಿಗೆ ಉತ್ತಮ ಆಹಾರ ಮತ್ತು ಸೌಲಭ್ಯ ಒದಗಿಸಲು ಕೋಟಿಗಟ್ಟಲೆ ಹಣ ಒದಗಿಸುತ್ತಿದೆ. ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಶುಚಿರುಚಿಯಾದ ಉತ್ತಮ ಗುಣಮಟ್ಟದ ಆಹಾರ ನೀಡಬೇಕು ಎಂದು ಹೇಳಿದರು. ಹಾಸ್ಟೆಲ್‌ ಮೇಲುಸ್ತುವಾರಿ ನಿರ್ವಹಣೆಯಲ್ಲಿ ವಿಫಲರಾಗುವ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಎಚ್ಚರಿಕೆ ನೀಡಿದರು.

ಕ್ರಿಮಿನಲ್‌ ಕೇಸ್‌: ಈಚೆಗೆ ಮೊಳಕಾಲ್ಮುರು ತಾಲೂಕಿನ ಬಿ.ಜಿ.ಕೆರೆಯಲ್ಲಿ ಹಿಂದುಳಿದ ವರ್ಗಗಳ ಹಾಸ್ಟೆಲ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಾಸ್ಟೆಲ್‌ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಹಾಸ್ಟೆಲ್‌ಗಳಿಗೆ ಭೇಟಿ ನೀಡಲಾಗುವುದು, ಈ ವೇಳೆ ನಿರ್ವಹಣೆಯಲ್ಲಿ ಲೋಪದೋಷ ಕಂಡುಬಂದಲ್ಲಿ ಸಂಬಂಧಪಟ್ಟಅಧಿಕಾರಿಗಳ ಮೇಲೆ ಎಫ್‌ಐಆರ್‌ ಮಾಡಿಸಿ, ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು ಎಂದರು.

ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಬಂದಾಗ ಸಮಸ್ಯೆಗೆ ಪರಿಹಾರ ಕೈಗೊಳ್ಳಲು, ಅಧಿಕಾರಿಗಳಿಗೆ ಮಾಹಿತಿ ನೀಡಲು ದೂರವಾಣಿ ವಿವರವುಳ್ಳ ಸಹಾಯವಾಣಿಯ ಮಾಹಿತಿ ಫಲಕ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಗ್ರಾಮೀಣ ಮತ್ತು ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಘಟಕ ದುರಸ್ತಿಗೆ ಬಂದಾಗ 24 ಗಂಟೆಯೊಳಗೆ ದುರಸ್ತಿ ಕಾರ್ಯಕೈಗೊಂಡು ಜನರಿಗೆ ಕುಡಿಯುವ ನೀರು ಒದಗಿಸಬೇಕು ಎಂದರು.

ಜಿಲ್ಲೆಗೆ ವಿಶೇಷ ಪ್ಯಾಕೇಜ್‌ನಿಂದ ಮಾತ್ರ ಅಭಿವೃದ್ಧಿ ಸಾಧ್ಯ: ಶಾಸಕ ಪುಟ್ಟರಂಗಶೆಟ್ಟಿ

ನಿಯಮ ಪಾಲನೆಯಾಗಲಿ: ಜಿಲ್ಲೆಯಲ್ಲಿ ಈಗಾಗಲೇ ರಾಗಿ ಖರೀದಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ರಾಗಿ ಖರೀದಿಯಲ್ಲಿ ಕಡ್ಡಾಯವಾಗಿ ನಿಯಮ ಪಾಲನೆಯಾಗಬೇಕು ಎಂದು ಸಚಿವರು ಸೂಚನೆ ನೀಡಿದರು. ಯಾವುದೇ ಕಾರಣಕ್ಕೂ ವ್ಯಾಪಾರಸ್ಥರಿಂದ ರಾಗಿ ಖರೀದಿ ಮಾಡಬಾರದು. ಪೂ›ಟ್‌ ಐಡಿ ಮೂಲಕ ಸಣ್ಣ ಮತ್ತು ಅತೀ ಸಣ್ಣ ರೈತರಿಂದ ರಾಗಿ ಖರೀದಿಸಬೇಕು ಎಂದು ಹೇಳಿದರು. ಸರ್ಕಾರವು ಅಂಗನವಾಡಿ ಮೂಲಕ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ನೀಡುತ್ತಿದ್ದು, ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಸಚಿವರು ತಿಳಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್‌.ದಿವಾಕರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಮ್‌ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

click me!