
ಬೆಂಗಳೂರು(ನ.09): ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಲ್ಕು ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ಬಂದೋಬಸ್ತ್ ವ್ಯವಸ್ಥೆಯ ಸಿದ್ಧತೆ ಪರಿಶೀಲಿಸಿದ ಬಳಿಕ ಮಾತನಾಡಿದ ಸಚಿವರು, ಪ್ರಧಾನ ಮಂತ್ರಿಗಳ ಕಾರ್ಯಕ್ರಮ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
Kempegowda Statue Inauguration: ಮೋದಿಗೆ ಕೆಂಪೇಗೌಡ ಪೇಟಾ! ಏನಿದರ ವಿಶೇಷತೆ?
ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಅನಾವರಣ, ವಂದೇ ಭಾರತ್ ರೈಲಿಗೆ ಚಾಲನೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ನ ಉದ್ಘಾಟನೆ ಸಮಾರಂಭ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಕೆಂಪೇಗೌಡರ ಪ್ರತಿಮೆ ಅನಾವರಣದ ಬಳಿಕ ಬೃಹತ್ ಜನಸ್ತೋಮ ಉದ್ದೇಶಿಸಿ ಪ್ರಧಾನಿಗಳು ಮಾತನಾಡಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.
ಈ ಸಮಾರಂಭಕ್ಕೆ ಸುಮಾರು ನಾಲ್ಕು ಲಕ್ಷ ಜನರು ಸೇರುವ ಸಾಧ್ಯತೆಗಳಿವೆ. ಹೀಗಾಗಿ ಸಮಾರಂಭ ಅಚ್ಚುಕಟ್ಟಾಗಿ ನೆರೆವೇರಲು ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಭದ್ರತೆ ಕಲ್ಪಿಸಲಾಗುತ್ತಿದೆ. ಈಗಾಗಲೇ ಪ್ರಧಾನಿ ಭೇಟಿ ನೀಡುವ ಸ್ಥಳಗಳಿಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ತೆರಳಿ ಪರಿಶೀಲಿಸಿದ್ದೇನೆ. ಈ ಬಂದೋಬಸ್ತ್‌ನ ಮೇಲುಸ್ತುವಾರಿಯನ್ನು ಖುದ್ದು ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ನಡೆಸಲಿದ್ದಾರೆ. ಅಲ್ಲದೆ ಭದ್ರತೆಯಲ್ಲಿ ಹೆಚ್ಚುವರಿ ಆಯುಕ್ತರಾದ ಸಂದೀಪ್ ಪಾಟೀಲ್, ಸುಬ್ರಹ್ಮಣ್ಯೇಶ್ವರ ರಾವ್, ಜಂಟಿ ಆಯುಕ್ತರಾದ ಡಾ.ಬಿ.ಆರ್.ರವಿಕಾಂತೇಗೌಡ, ರಮಣಗುಪ್ತ ಹಾಗೂ ಐವರು ಡಿಸಿಪಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ರಾಜ್ಯದ ಮೂಲೆ ಮೂಲೆಗಳಿಂದ ಸಮಾರಂಭಕ್ಕೆ ಜನರು ಆಗಮಿಸಲಿದ್ದಾರೆ. ಹೀಗಾಗಿ ಕಾರ್ಯಕ್ರಮ ನಡೆಯುವ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗದಂತೆ ಸಂಚಾರ ವಿಭಾಗದ ಪೊಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂದು ಸಚಿವರು ಹೇಳಿದರು. ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಆರ್.ಸುಧಾಕರ್ ಹಾಗೂ ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.