ಬೆಂಗಳೂರು: ಚರ್ಚ್‌ಗೆ ತೆರಳುತ್ತಿದ್ದ ದಂಪತಿಯ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ, ಪತಿ ಬಲಿ

By Kannadaprabha NewsFirst Published Sep 2, 2023, 1:36 PM IST
Highlights

ಅಪಘಾತಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಸಂಬಂಧ ಕೆಎಸ್‌ಆರ್‌ಟಿಸಿ ಬಸ್‌ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. 

ಬೆಂಗಳೂರು(ಸೆ.02):  ಅತಿವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟು, ಪತ್ನಿ ಗಾಯಗೊಂಡಿರುವ ಘಟನೆ ಶಿವಾಜಿನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈಜಿಪುರ ನಿವಾಸಿ ಲೂಕಾಸ್‌(64) ಮೃತ ಸವಾರ. ಹಿಂಬದಿ ಕುಳಿತಿದ್ದ ಪತ್ನಿ ಸಣ್ಣಪುಟ್ಟಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶುಕ್ರವಾರ ಮುಂಜಾನೆ 5.45ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯನಗರ: ಕೂಡ್ಲಿಗಿ ಬಳಿ ಭೀಕರ ಅಪಘಾತ, ಮೂವರು ಹುಲಿಗೆಮ್ಮ ಭಕ್ತರ ದುರ್ಮರಣ

ಲೂಕಾಸ್‌ ದಂಪತಿ ಶಿವಾಜಿನಗರದ ಚರ್ಚ್‌ಗೆ ಪ್ರಾರ್ಥನೆ ಸಲ್ಲಿಸಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಕಬ್ಬನ್‌ ರಸ್ತೆಯಲ್ಲಿ ಮಣಿಪಾಲ್‌ ಸೆಂಟರ್‌ ಕಡೆಯಿಂದ ಮೈನ್‌ ಗಾರ್ಡ್‌ ಜಂಕ್ಷನ್‌ಗೆ ಬಂದು ಸಫೀನಾ ಪ್ಲಾಜಾ ಕಡೆಗೆ ತೆರಳಲು ದ್ವಿಚಕ್ರ ವಾಹನ ತಿರುಗಿಸಲು ಮುಂದಾಗಿದ್ದಾರೆ. ಇದೇ ಸಮಯಕ್ಕೆ ಮೆಜೆಸ್ಟಿಕ್‌ ಕಡೆಯಿಂದ ಕಬ್ಬನ್‌ ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಏಕಾಏಕಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದಂಪತಿ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಸವಾರ ಲೂಕಾಸ್‌ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಗಾಯಾಳುಗಳನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಲೂಕಾಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಸಂಬಂಧ ಕೆಎಸ್‌ಆರ್‌ಟಿಸಿ ಬಸ್‌ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಶಿವಾಜಿನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

click me!