ಚಿತ್ರದುರ್ಗ, ವಿಜಯಪುರ, ರಾಮನಗರ ಜಿಲ್ಲೆಗಳನ್ನ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ. ಇನ್ನುಳಿದ ಜಿಲ್ಲೆಗಳಲ್ಲೂ ಮುಂದಿನ ದಿನಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು
ವರದಿ : ಪರಮೇಶ್ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್ ಧಾರವಾಡ
ಧಾರವಾಡ(ಸೆ.03): ಧಾರವಾಡದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ 9 ಕೋಟಿ ರೂ. ವೆಚ್ಚದ ತಾರಾಲಯ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕೆಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಸೂಚನೆ ನೀಡಿದ್ದಾರೆ.
ಇಂದು(ಮಂಗಳವಾರ) ನಗರದಲ್ಲಿರುವ ಧಾರವಾಡ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಅನುಕೂಲಕ್ಕಾಗಿ ವಿಜ್ಞಾನ ಕೇಂದ್ರಗಳನ್ನು ಹಾಗೂ ತಾರಾಲಯ ಸ್ಥಾಪಿಸುವ ನಿಟ್ಟಿನಲ್ಲಿ ಸರಕಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ರೈತರು ಇದ್ದರೆ ಮಾತ್ರ ನಾವು, ನೀವು: ಅಧಿಕಾರಿಗಳಿಗೆ ಸಚಿವ ಬೋಸರಾಜು ಕ್ಲಾಸ್..!
ಚಿತ್ರದುರ್ಗ, ವಿಜಯಪುರ, ರಾಮನಗರ ಜಿಲ್ಲೆಗಳನ್ನ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ. ಇನ್ನುಳಿದ ಜಿಲ್ಲೆಗಳಲ್ಲೂ ಮುಂದಿನ ದಿನಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದರು.
ಧಾರವಾಡ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವು 24 ಎಕರೆ ಜಾಗೆ ಹೊಂದಿದ್ದು ಅಂತರಾಷ್ಟ್ರೀಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲು ಕ್ರಮಕೈಗಳ್ಳಲಾಗುವುದು. ಆವರಣದಲ್ಲಿ 9 ಕೋಟಿ ವೆಚ್ಚದಲ್ಲಿ ಉತ್ಕೃಷ್ಟ ಮಟ್ಟದ ತಾರಾಲಯ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಈಗಾಗಲೇ 4.5 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿಯನ್ನು ಒಂದು ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.
ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ 3 ಡಿ ಡೋಮ್ ತಾರಾಲಯ ನಿರ್ಮಾಣ ಕಾರ್ಯಕ್ಕೆ ಅನುದಾನ ನೀಡಿದ್ದರೂ ಪ್ರಕ್ರಿಯೆ ಪ್ರಾರಂಭವಾಗದೇ ಇರುವ ಬಗ್ಗೆ ಅಧಿಕಾರಿಗಳ ಕಾರ್ಯವೈಖರಿಗೆ ಅತೃಪ್ತಿ ವ್ಯಕ್ತಪಡಿಸಿದರು. ಕಾಮಗಾರಿ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಲಾಖೆಯಿಂದ ವಿಜ್ಞಾನ ಕೌಶಲ್ಯ ತರಬೇತಿಗಳನ್ನು ಹಮ್ಮಿಕೊಳ್ಳಲಾಗುವುದು ಧಾರವಾಡ ವಿಜ್ಞಾನ ಕೇಂದ್ರ ಉತ್ತಮವಾಗಿ ನಿರ್ವಹಣೆ ಆಗುತ್ತಿದೆ. ಆಯಾ ಕಾಲಘಟ್ಟಕ್ಕೆ ಅನುಗುಣವಾದ ಹೊಸ ಪ್ರದರ್ಶನಗಳನ್ನ ಅಳವಡಿಸಲು ಕ್ರಮಗಳನ್ನು ಕೈಗೊಳ್ಳಬೇಕು ಅಭಿವೃದ್ದಿ ಕಾರ್ಯಗಳು ಸುಲಲಿತವಾಗಿ ನಡೆಯುವಂತೆ ಕ್ರಮವಹಿಸಲು ಆಗಾಗ್ಗೆ ಸಭೆ ನಡೆಸುವಂತೆ ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು ಅವರಿಗೆ ತಿಳಿಸಿದರು.
ಕೇರಳ ಹಾಗೂ ಗುಜರಾತ್ ಮಾದರಿಯಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ 200 ಕೋಟಿ ರೂ ವೆಚ್ಚದಲ್ಲಿ ವಿಜ್ಞಾನ ನಗರ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಬದಲಾಗಲ್ಲ: ಸಚಿವ ಬೋಸರಾಜು
ಧಾರವಾಡ ಜಿಲ್ಲೆಗೆ 100 ಕೋಟಿ ಅನುದಾನ ಸಣ್ಣ ನೀರಾವರಿ ಇಲಾಖೆಯಿಂದ ಧಾರವಾಡ ಜಿಲ್ಲೆಗೆ ವಿವಿಧ ಯೋಜನೆಗಳ ಅಡಿಯಲ್ಲಿ ಸುಮಾರು 100 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಲಾಗಿದೆ. ಹಲವಾರು ಜಲಾನಯನ ಹಾಗೂ ಕೆರೆ ಅಭಿವೃದ್ದಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಅನುದಾನದ ಕೊರತೆ ಇಲ್ಲ, ಮುಖ್ಯಮಂತ್ರಿಗಳು ನಮ್ಮ ಇಲಾಖೆಗೆ ಅಗತ್ಯ ಅನುದಾನ ನೀಡುತ್ತಿದ್ದಾರೆ. ಇಲಾಖೆ ವತಿಯಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ವಲಯವಾರು ಸಭೆಗಳನ್ನು ನಡೆಸುತ್ತಿದ್ದೇವೆ ಎಂದು ಹೇಳಿದರು.
ಕೇಂದ್ರದ ಜಲಶಕ್ತಿ ಮಂತ್ರಾಲಯದಿಂದ ಅಂತರ್ಜಲ ಅಭಿವೃದ್ಧಿಗೆ 2200 ಕೋಟಿ ರೂ ಗಳ ಪ್ರಸ್ತಾವನೆಯನ್ನು ಸಿದ್ಧಗೊಳಿಸಿದ್ದು ಇದರಿಂದ 9 ಲಕ್ಷ ಹೆಕ್ಟೆರ್ ಪ್ರದೇಶಕ್ಕೆ ನೀರಾವರಿ ಯೋಜನೆ ಹಮ್ಮಿಕೊಳ್ಳಲಾಗುವುದು.ಕೇಂದ್ರದ ಶೇ. 60 ಹಾಗೂ ರಾಜ್ಯ ಶೇ. 40 ರಷ್ಟು ಅನುದಾನ ಭರಿಸಲಾಗುವುದು ಇದರಿಂದ 41 ತಾಲೂಕಿಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದರು ತುಪ್ಪರಿಹಳ್ಳ ಹಾಗೂ ಬೆಣ್ಣೆಹಳ್ಳ ಏತನೀರಾವರಿಗೆ ಸಂಬಂಧಪಟ್ಟಂತೆ ಸಂಮೀಕ್ಷೆ ನಡೆಸಲಾಗುತ್ತಿದೆ. ಈ ಪ್ರದೇಶದಲ್ಲಿ ಸರಣಿ ಚಕ್‍ಡ್ಯಾಂ ಹಾಗೂ ಬ್ಯಾರೇಜ್‍ಗಳ ನಿರ್ಮಾಣಕ್ಕೆ ಯೋಜಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.