
ಬೆಂಗಳೂರು: ಕಳೆದ 12 ದಿನಗಳಿಂದ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ತೆರೆ ಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಶಾ ಕಾರ್ಯಕರ್ತೆಯರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಹೆಚ್ಚುವರಿಯಾಗಿ 2 ಸಾವಿರ ರೂಪಾಯಿ ಗೌರವಧನ ನೀಡಲು ಸರ್ಕಾರ ಒಪ್ಪಿಗೆ ನೀಡಿದೆ. ಇದರೊಂದಿಗೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂಪಾಯಿ ಗೌರವಧನ ಸಿಗಲಿದೆ.
ಮಾಸಿಕ 15 ಸಾವಿರ ರೂಪಾಯಿ ಗೌರವಧನ ನೀಡಬೇಕು ಎಂದು ಆಶಾ ಕಾರ್ಯಕರ್ತೆಯರು ಬೇಡಿಕೆ ಇಟ್ಟಿದ್ದರು. ಈ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಳೆದ 12 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಇಂದು ನಡೆದ ಸಭೆಯಲ್ಲಿ ಸರ್ಕಾರ ಹೆಚ್ಚುವರಿ 2 ಸಾವಿರ ರೂಪಾಯಿ ನೀಡುವ ಪ್ರಸ್ತಾವ ಮುಂದಿಟ್ಟಿದ್ದು, ಬಹುತೇಕ ಆಶಾ ಕಾರ್ಯಕರ್ತೆಯರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಜೊತೆ ಸಭೆ ನಡೆಸಿ ಅವರ ಮನವೊಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೃಷ್ಣಾಗೆ ಆಗಮಿಸಿದರು. ಬಳಿಕ ಆಶಾ ಕಾರ್ಯಕರ್ತೆಯರ ಜೊತೆ ಸಭೆ ಆರಂಭವಾಯಿತು. ಸಭೆಯಲ್ಲಿ ಆರ್ಥಿಕ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಸಿಎಂ ರಾಜಕೀಯ ಸಲಹೆಗಾರ ಜಿ.ಸಿ. ಚಂದ್ರಶೇಖರ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.
ಬೆಳಿಗ್ಗೆ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಮುಂದೆ ಹೆಚ್ಚುವರಿ 2 ಸಾವಿರ ರೂಪಾಯಿ ನೀಡುವ ಪ್ರಸ್ತಾವಕ್ಕೆ ಒಪ್ಪದಿದ್ದ ಆಶಾ ಕಾರ್ಯಕರ್ತೆಯರು, ಮುಖ್ಯಮಂತ್ರಿಗಳ ಜೊತೆಗಿನ ಸಭೆಯಲ್ಲಿ ಬಹುತೇಕ ಒಪ್ಪಿಗೆ ಸೂಚಿಸಿದ್ದಾರೆ. ಸರ್ಕಾರ 2 ಸಾವಿರ ರೂಪಾಯಿ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ಗೆ ಶಾಲು ಹೊದಿಸಿ ಸನ್ಮಾನಿಸಿದರು. ಬಳಿಕ ಆಶಾ ಕಾರ್ಯಕರ್ತೆಯರು ಹಾಗೂ ಸಿಎಂ ಸುದ್ದಿಗೋಷ್ಠಿ ನಡೆಸಿದರು. 12 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಈ ಸಭೆ ಮಹತ್ವದ ಬೆಳವಣಿಗೆಯಾಗಿದೆ.
ಬಳಿಕ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನ್ನಾಡಿದ ಸಿಎಂ ಡಿಕೆ ಶಿವಕುಮಾರ್, ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ 5 ಸಾವಿರ ರೂಪಾಯಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರ 2 ಸಾವಿರ ರೂಪಾಯಿ ನೀಡುತ್ತಿದೆ. ಕೇಂದ್ರದ ಪಾಲಿನ ಹೆಚ್ಚಳವಾಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮೇಲೆಯೇ ಹೆಚ್ಚಿನ ಒತ್ತಡ ಬಂದಿತ್ತು. ಆಶಾ ಕಾರ್ಯಕರ್ತೆಯರು ತಮ್ಮ ಸೇವೆ, ಸಮಸ್ಯೆಗಳನ್ನು ವಿವರಿಸಿ ಮನವಿ ಮಾಡಿದಾಗ ಅವರ ಹೋರಾಟದ ಬಗ್ಗೆ ಮನಸ್ಸು ಮಿಡಿದಿದೆ. ಈ ಹೆಣ್ಣು ಮಕ್ಕಳು ರಾಜ್ಯದ ಆಸ್ತಿ, ಅವರ ಸೇವೆಯನ್ನು ಗುರುತಿಸಿ ಹೆಚ್ಚುವರಿಯಾಗಿ 2 ಸಾವಿರ ರೂಪಾಯಿ ನೀಡಲು ತೀರ್ಮಾನಿಸಲಾಗಿದೆ ಎಂದರು.
ಏಪ್ರಿಲ್‌ನಿಂದ ಹೆಚ್ಚಳ ಮಾಡುವ ಆಲೋಚನೆ ಇತ್ತು. ಆದರೆ ಆಶಾ ಕಾರ್ಯಕರ್ತೆಯರು ಡಿಸೆಂಬರ್‌ನಿಂದಲೇ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಅಂತಿಮವಾಗಿ ಜನವರಿ 1ರಿಂದಲೇ ಹೆಚ್ಚುವರಿ 2 ಸಾವಿರ ರೂಪಾಯಿ ನೀಡುವುದಾಗಿ ಸಿಎಂ ಘೋಷಿಸಿದರು. ಮುಂದಿನ ಬಜೆಟ್‌ನಲ್ಲೂ ಈ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದರು. ಇನ್ನು ಪ್ರತಿಭಟನೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಕೆಲವರು ಪ್ರಯತ್ನಿಸಿದರೂ ಆಶಾ ಕಾರ್ಯಕರ್ತೆಯರು ಅದಕ್ಕೆ ಅವಕಾಶ ನೀಡಲಿಲ್ಲ ಎಂದು ಸಿಎಂ ಹೇಳಿದರು. ಪೊಲೀಸರಿಗೆ ಕೂಡ ಪ್ರತಿಭಟನಾಕಾರರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಸೂಚಿಸಿದ್ದಾಗಿ ತಿಳಿಸಿದ ಅವರು, ಇನ್ನು ಮುಂದೆ ಒಟ್ಟಾಗಿ ಕೆಲಸ ಮಾಡೋಣ ಎಂದು ಮನವಿ ಮಾಡಿದರು.