
ಚಿಕ್ಕಬಳ್ಳಾಪುರ (ಆ.10): ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್(Nandi Hills Monsoon Marathon) ವೇಳೆ 21 ಕಿ.ಮೀ. ಓಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುವೊಬ್ಬರು ಓಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಭಾನುವಾರ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ ನಡೆದಿದೆ.
ಪಂಜಾಬ್ ಮೂಲದ ಅಮನ್ ದೀಪ್ ಸಿಂಗ್ ಜಗಡೆ (31) ಮೃತ ಕ್ರೀಡಾಪಟು. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಇರುವ ಖಾಸಗಿ ಕಂಪನಿಯೊಂದರಲ್ಲಿ ಅಮನ್ ದೀಪ್ ಸಿಂಗ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಭಾನುವಾರ ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ 10 ಹಾಗೂ ಕಿ.ಮೀ. ವಿಭಾಗಗಳಲ್ಲಿ ಓಟವನ್ನು ಏರ್ಪಡಿಸಲಾಗಿತ್ತು. 4,500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಪೈಕಿ ಅಮನ್ ದೀಪ್ ಸಿಂಗ್ ಅವರು 21 ಕಿ.ಮೀ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದರು. ನಂದಿ ಬೆಟ್ಟದ ಅರ್ಧ ಭಾಗದಷ್ಟು ಓಟವನ್ನು ಪೂರ್ಣಗೊಳಿಸಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.