ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ದುಷ್ಕರ್ಮಿಗಳಿಂದ ಚಾಕು ಇರಿತ, ಐಸಿಯುಗೆ ದಾಖಲು

Published : Jan 06, 2026, 04:33 PM IST
Laxmi Hebbalkar Son Car Driver

ಸಾರಾಂಶ

ಬೆಳಗಾವಿಯಲ್ಲಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ್ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ, ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ಈ ಘಟನೆ ಆತಂಕಕ್ಕೆ ಕಾರಣವಾಗಿದೆ. ಗಾಯಗೊಂಡ ಕಾರು ಚಾಲಕ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್ (32) ಎಂದು ಗುರುತಿಸಲಾಗಿದೆ. ಬಸವಂತ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನಾಗಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ಕಾರು ನಿಲ್ಲಿಸಿ ನಿಂತಿದ್ದ ವೇಳೆ ಹಲ್ಲೆ

ವರದಿ ಮೂಲಗಳ ಪ್ರಕಾರ, ಬಸವಂತ ಅವರು ಕಾರನ್ನು ನಿಲ್ಲಿಸಿ ಕೆಳಗೆ ನಿಂತಿದ್ದ ಸಂದರ್ಭದಲ್ಲಿ, ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ಚಾಕುವಿನಿಂದ ದಾಳಿ ನಡೆಸಿದ್ದಾರೆ. ಆರೋಪಿಗಳು ಎದೆ, ಭುಜ ಹಾಗೂ ತೊಡೆ ಸೇರಿ ನಾಲ್ಕು ಕಡೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಬಸವಂತ ಅವರನ್ನು ತಕ್ಷಣವೇ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.

ಆಸ್ಪತ್ರೆಗೆ ಡಿಸಿಪಿ, ಎಸಿಪಿ ಭೇಟಿ

ಘಟನೆ ಮಾಹಿತಿ ತಿಳಿದ ತಕ್ಷಣ ಡಿಸಿಪಿ ಹಾಗೂ ಎಸಿಪಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮೃಣಾಲ್ ಹೆಬ್ಬಾಳ್ಕರ್ ಕೂಡ ಆಸ್ಪತ್ರೆಗೆ ಆಗಮಿಸಿ ಚಾಲಕನ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ಘಟನೆ ನಡೆದ ಕೂಡಲೇ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದಾಳಿಕೋರರ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ದಾಳಿಯ ಹಿಂದಿನ ಉದ್ದೇಶವೇನು ಎಂಬುದರ ಕುರಿತು ವಿವಿಧ ರೀತಿಯಿಂದ ತನಿಖೆ ನಡೆಯುತ್ತಿದೆ.

PREV
Read more Articles on
click me!

Recommended Stories

ಲವ್ ಮಾಡ್ತಿದ್ದರೂ ಮದುವೆ ಮಾಡಿಕೊಳ್ಳದ ಬಾಯ್‌ಫ್ರೆಂಡ್ ಮನೆಗೆ ಹೋಗಿ ಪ್ರಾಣಬಿಟ್ಟ ಹಾಸನ ಯುವತಿ ನಿಖಿತಾ!
ಹೈಕೋರ್ಟ್ ಪೀಠ ಸೇರಿ ರಾಜ್ಯಾದ್ಯಂತ ನ್ಯಾಯಾಲಯಗಳಿಗೆ ಸರಣಿ ಬಾಂಬ್ ಬೆದರಿಕೆ: ಬಿಗುವಿನ ವಾತಾವರಣ, ಕೋರ್ಟ್ ಕಲಾಪಗಳು ಸ್ಥಗಿತ