
ಬೆಳಗಾವಿ (ಡಿ.19): ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿ ಶಾಲಾ ವಾಹನ ಹಾಗೂ ಟಾಟಾ ಏಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಶಾಲಾ ಬಸ್ ಪಲ್ಟಿಯಾಗಿದ್ದು, ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ವಿವರ: ಹುಕ್ಕೇರಿ ಪಟ್ಟಣದ ಖಾಸಗಿ ಶಾಲೆಯೊಂದಕ್ಕೆ ಸೇರಿದ ಬಸ್, ಶುಕ್ರವಾರ ಸಂಜೆ ಶಾಲಾ ಅವಧಿ ಮುಗಿದ ಬಳಿಕ ವಿದ್ಯಾರ್ಥಿಗಳನ್ನು ಬೆಣಿವಾಡ ಗ್ರಾಮಕ್ಕೆ ಬಿಡಲು ಹೋಗುತ್ತಿತ್ತು. ಈ ವೇಳೆ ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿ ಎದುರಿನಿಂದ ಬಂದ ಟಾಟಾ ಏಸ್ ವಾಹನ ಹಾಗೂ ಶಾಲಾ ಬಸ್ ನಡುವೆ ಜೋರಾಗಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಶಾಲಾ ಬಸ್ ರಸ್ತೆಯಲ್ಲೇ ಪಲ್ಟಿಯಾಗಿದೆ.
ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದರು. ಬಸ್ ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ತಕ್ಷಣ ರಕ್ಷಣೆಗೆ ಧಾವಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಟಾಟಾ ಏಸ್ ವಾಹನದಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಎಲ್ಲ ಗಾಯಾಳುಗಳನ್ನು ತಕ್ಷಣವೇ ಹುಕ್ಕೇರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸ್ ಭೇಟಿ:
ಘಟನಾ ಸ್ಥಳಕ್ಕೆ ಹುಕ್ಕೇರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಚಾಲಕನ ಅತಿವೇಗ ಕಾರಣವೇ ಅಥವಾ ತಾಂತ್ರಿಕ ದೋಷವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಷಕರು ಆತಂಕದಿಂದ ಆಸ್ಪತ್ರೆ ಹಾಗೂ ಘಟನಾ ಸ್ಥಳಕ್ಕೆ ದೌಡಾಯಿಸಿದ್ದರು.