Belagavi: ರೈತರ ಹೆದ್ದಾರಿ ಬಂದ್‌ಗೆ ಶಾಕ್; 8 ಕಠಿಣ ಷರತ್ತು ವಿಧಿಸಿದ DC ರೋಷನ್

Published : Oct 30, 2026, 05:13 PM IST
mohammad roshan Belagavi Farmer Protest

ಸಾರಾಂಶ

ಕಬ್ಬು ಬೆಳೆಗಾರರ ರಾಷ್ಟ್ರೀಯ ಹೆದ್ದಾರಿ ಬಂದ್ ಪ್ರತಿಭಟನೆಗೆ ಬೆಳಗಾವಿ ಜಿಲ್ಲಾಡಳಿತವು ಬಿಎನ್ಎಸ್ ಕಾಯ್ದೆ ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಆಘಾತ ನೀಡಿದೆ. ಹೆದ್ದಾರಿಗಳು, ಟೋಲ್ ಪ್ಲಾಜಾಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಎಂಟು ಕಠಿಣ ಷರತ್ತುಗಳನ್ನು ವಿಧಿಸಿದ್ದಾರೆ.

ಬೆಳಗಾವಿ: ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದ್ದು, ರೈತರು ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ ನೀಡಿದ್ದಾರೆ. ಆದರೆ, ಈ ಪ್ರತಿಭಟನೆಗೆ ಬೆಳಗಾವಿ ಜಿಲ್ಲಾಡಳಿತ ಶಾಕ್ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಬಂದ ಪತ್ರದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬಿಎನ್ಎಸ್ (BNS) ಕಾಯ್ದೆ 2023ರ ಕಲಂ 163 ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು, ರಸ್ತೆಗಳು ಹಾಗೂ ಟೋಲ್ ಪ್ಲಾಜಾಗಳನ್ನು ತಡೆಯದಂತೆ ನಿಷೇಧಾಜ್ಞೆ ಹೊರಡಿಸಿದ್ದಾರೆ. ಯಾವುದೇ ಕಾರಣಕ್ಕೂ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿರುವ ಜಿಲ್ಲಾಧಿಕಾರಿಗಳು, ಒಟ್ಟು ಎಂಟು ಷರತ್ತುಗಳನ್ನು ವಿಧಿಸಿ ಆದೇಶ ನೀಡಿದ್ದಾರೆ.

ಈ ಆದೇಶದಂತೆ, ಬೆಳಗಾವಿ ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ಸೇರಿದಂತೆ ಯಾವುದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಗುಂಪು ಪ್ರತಿಭಟನೆ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಯಾವುದೇ ವಾಹನಗಳನ್ನು ಅಡ್ಡಗಟ್ಟುವಂತಿಲ್ಲ

ಜಿಲ್ಲೆಯಲ್ಲಿರುವ ಮೂರು ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲು ಅವಕಾಶವಿಲ್ಲದಿರುವುದರ ಜೊತೆಗೆ, ಹೆದ್ದಾರಿಗೆ ಸಂಪರ್ಕಿಸುವ ರಸ್ತೆಗಳಲ್ಲಿ ಟ್ರ್ಯಾಕ್ಟರ್ ಸೇರಿದಂತೆ ಯಾವುದೇ ವಾಹನಗಳನ್ನು ಅಡ್ಡಗಟ್ಟುವಂತಿಲ್ಲ ಹಾಗೂ ಸಾರ್ವಜನಿಕ ಮತ್ತು ಸರ್ಕಾರಿ ಆಸ್ತಿ-ಪಾಸ್ತಿಗೆ ಹಾನಿ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ. ಅಲ್ಲದೆ, ಅಗತ್ಯ ಭದ್ರತೆ ಒದಗಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹಾಗೂ ಪೊಲೀಸ್ ಕಮಿಷನರ್‌ಗೆ ನಿರ್ದೇಶನ ನೀಡಲಾಗಿದ್ದು, ಈ ನಿರ್ಬಂಧ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.

ಜಿಲ್ಲಾಧಿಕಾರಿಗಳು ವಿಧಿಸಿರುವ ಎಂಟು ಷರತ್ತುಗಳು ಈ ರೀತಿಯಾಗಿವೆ

1.ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-48 ಸೇರಿದಂತೆ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಗುಂಪು ಪ್ರತಿಭಟನೆ, ಧರಣಿ, ಮೆರವಣಿಗೆ ಅಥವಾ ಇತರೆ ಯಾವುದೇ ಉದ್ದೇಶಕ್ಕಾಗಿ ರಸ್ತೆ ತಡೆ ನಡೆಸುವುದು, ವಾಹನ ಸಂಚಾರವನ್ನು ಸಂಪೂರ್ಣವಾಗಿ ಅಥವಾ ಭಾಗಶಃ ಬಂದ್ ಮಾಡುವುದು ಹಾಗೂ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ನಿಷೇಧಿಸಲಾಗಿದೆ.

2.ಜಿಲ್ಲೆಯ ವ್ಯಾಪ್ತಿಯಲ್ಲಿರುವ ಹಿರೇಬಾಗೇವಾಡಿ, ಹತ್ತರಗಿ, ಕೋಗಿನೊಳ್ಳಿ ಸೇರಿದಂತೆ ಎಲ್ಲಾ ಟೋಲ್ ಪ್ಲಾಜಾಗಳ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳನ್ನು ಬಂದ್ ಮಾಡುವುದು, ಟೋಲ್ ಸಂಗ್ರಹಣಾ ಕಾರ್ಯಕ್ಕೆ ಅಡ್ಡಿಪಡಿಸುವುದು, ಟೋಲ್ ಸಂಗ್ರಹಣಾ ಸಿಬ್ಬಂದಿಯ ಕರ್ತವ್ಯ ನಿರ್ವಹಣೆಗೆ ತಡೆಯೊಡ್ಡುವುದು ಹಾಗೂ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸುವ ಯಾವುದೇ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

3.ರಾಷ್ಟ್ರೀಯ ಹೆದ್ದಾರಿಗಳ ಕ್ಯಾರೇಜ್‌ವೇ, ಸರ್ವಿಸ್ ರಸ್ತೆ, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳು, ಟೋಲ್ ಪ್ಲಾಜಾ ಪ್ರದೇಶಗಳು ಹಾಗೂ ಅವುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಟ್ರ್ಯಾಕ್ಟರ್, ಕ್ರೂಸರ್, ಲಾರಿ, ಕಾರು ಅಥವಾ ಇತರೆ ಯಾವುದೇ ವಾಹನಗಳನ್ನು ಗುಂಪುಗೂಡಿಸಿ ನಿಲ್ಲಿಸುವುದು, ವಾಹನಗಳ ಸಾಲು ನಿರ್ಮಿಸುವುದು, ವಾಹನಗಳನ್ನು ಅಡ್ಡಲಾಗಿ ನಿಲ್ಲಿಸಿ ರಸ್ತೆ ತಡೆ ನಿರ್ಮಿಸುವುದು ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟುಮಾಡುವುದನ್ನು ನಿಷೇಧಿಸಲಾಗಿದೆ.

4.ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಥವಾ ಅವುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಧರಣಿ, ಮೆರವಣಿಗೆ, ಪ್ರತಿಭಟನೆ ಅಥವಾ ಗುಂಪು ಸೇರುವ ಮೂಲಕ ವಾಹನ ಸಂಚಾರಕ್ಕೆ ಅಡಚಣೆ ಉಂಟುಮಾಡುವುದು, ರಸ್ತೆಯ ಮೇಲೆ ಕುಳಿತುಕೊಳ್ಳುವುದು ಅಥವಾ ಮಲಗುವುದು, ಬ್ಯಾರಿಕೇಡ್‌ಗಳು ಅಥವಾ ಇತರೆ ವಸ್ತುಗಳನ್ನು ಅಡ್ಡಲಾಗಿ ಇರಿಸುವುದು ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗುವ ಯಾವುದೇ ರೀತಿಯ ಚಟುವಟಿಕೆಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

5.ರಾಷ್ಟ್ರೀಯ ಹೆದ್ದಾರಿಗಳಲ್ಲಿ ಆಂಬುಲೆನ್ಸ್, ಅಗ್ನಿಶಾಮಕ ವಾಹನಗಳು, ಪೊಲೀಸ್ ವಾಹನಗಳು, ತುರ್ತು ವೈದ್ಯಕೀಯ ಸೇವೆಗಳ ವಾಹನಗಳು ಹಾಗೂ ಅಗತ್ಯ ಸೇವೆಗಳ ವಾಹನಗಳ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆ ಉಂಟುಮಾಡುವುದನ್ನು ನಿಷೇಧಿಸಲಾಗಿದೆ. ಅಲ್ಲದೆ, ಶಾಲಾ-ಕಾಲೇಜುಗಳಿಗೆ ತೆರಳುವ ಮತ್ತು ಹಿಂತಿರುಗುವ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಗಳು, ಹಿರಿಯ ನಾಗರಿಕರು, ರೋಗಿಗಳು, ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ತೆರಳುವ ವ್ಯಕ್ತಿಗಳು ಹಾಗೂ ಅವರ ಆರೈಕೆದಾರರು ಮತ್ತು ಸಾರ್ವಜನಿಕರ ದೈನಂದಿನ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ನೋಡಿಕೊಳ್ಳತಕ್ಕದ್ದು.

6.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಆಸ್ತಿಗಳು, ಟೋಲ್ ಪ್ಲಾಜಾಗಳು, ರಸ್ತೆ ಸುರಕ್ಷತಾ ಉಪಕರಣಗಳು, ಬ್ಯಾರಿಕೇಡ್‌ಗಳು ಹಾಗೂ ಇತರೆ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಉಂಟುಮಾಡುವುದು, ಅವುಗಳ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುವುದು ಅಥವಾ ಕರ್ತವ್ಯನಿರತ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸುವುದನ್ನು ನಿಷೇಧಿಸಲಾಗಿದೆ.

7.ಪೊಲೀಸ್ ಅಧೀಕ್ಷಕರು, ಬೆಳಗಾವಿ ಜಿಲ್ಲೆ ಹಾಗೂ ಪೊಲೀಸ್ ಆಯುಕ್ತರು, ಬೆಳಗಾವಿ ನಗರ ಇವರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಗಳು, ಟೋಲ್ ಪ್ಲಾಜಾಗಳು, ಪ್ರಮುಖ ಜಂಕ್ಷನ್‌ಗಳು ಹಾಗೂ ಸಂಪರ್ಕ ರಸ್ತೆಗಳಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್ ಮತ್ತು ಸಂಚಾರ ನಿಯಂತ್ರಣ ವ್ಯವಸ್ಥೆಯನ್ನು ಕೈಗೊಂಡು, ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸತಕ್ಕದ್ದು. ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು ಹಾಗೂ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಸಹಕಾರವನ್ನು ಪಡೆದುಕೊಳ್ಳತಕ್ಕದ್ದು.

8.ಈ ಆದೇಶದ ಯಾವುದೇ ಷರತ್ತುಗಳನ್ನು ಉಲ್ಲಂಘಿಸುವ ವ್ಯಕ್ತಿಗಳು ಅಥವಾ ಸಂಘಟನೆಗಳ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ಹಾಗೂ ಇತರೆ ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಾನೂನುಬದ್ಧ ಕ್ರಮ ಕೈಗೊಳ್ಳತಕ್ಕದ್ದು.

ಈ ಆದೇಶವು ಶಾಂತಿಯುತವಾಗಿ ಮತ್ತು ಕಾನೂನುಬದ್ಧವಾಗಿ ತಮ್ಮ ಬೇಡಿಕೆಗಳನ್ನು ವ್ಯಕ್ತಪಡಿಸುವ ಹಕ್ಕನ್ನು ಸಂಪೂರ್ಣವಾಗಿ ನಿರ್ಬಂಧಿಸುವ ಉದ್ದೇಶವನ್ನು ಹೊಂದಿರುವುದಿಲ್ಲ. ಬದಲಾಗಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟಾಗದಂತೆ, ತುರ್ತು ಸೇವೆಗಳ ಸುಗಮ ಕಾರ್ಯನಿರ್ವಹಣೆಗೆ ಧಕ್ಕೆಯಾಗದಂತೆ ಹಾಗೂ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಮಾತ್ರ ಮೇಲ್ಕಂಡ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

PREV
Read more Articles on
click me!

Recommended Stories

₹2500 ಕೋಟಿ ವೆಚ್ಚದಲ್ಲಿ ಹೊಸಕೋಟೆಗೆ ಕಾವೇರಿ ನೀರು; ಇತ್ತ ಮೆಟ್ರೋ ಸಂಪರ್ಕಕ್ಕೆ ಡಿಪಿಆರ್
Arun Salanki: ಗೆಳೆಯನ ದುರ್ಮರಣದ 2 ತಿಂಗಳಲ್ಲೇ ಇನ್ಸ್ಪೆಕ್ಟರ್ ಸೋಲಂಕಿ ಸಾವು! ವೈರಲ್‌ ಆದ ಅರುಣ್‌ ಹಳೇ ಪೋಸ್ಟ್!