
ಬೆಂಗಳೂರು (ಫೆ.17): ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಎಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳಿವೆ, ಎಷ್ಟು ಸುಸ್ಥಿತಿಯಲ್ಲಿವೆ, ಎಷ್ಟು ಸ್ಥಗಿತವಾಗಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಿ ವಾರದೊಳಗಾಗಿ ವರದಿ ನೀಡಲು ಸೂಚಿಸಲಾಗಿದೆ ಎಂದರು.
ನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಸಂಬಂಧಿಸಿದಂರೆ ಎಲ್ಲಾ ವಲಯಗಳಲ್ಲಿ ಟೆಂಡರ್ ಕರೆದು ಗುತ್ತಿಗೆದಾರರನ್ನು ನಿಯೋಜಿಸಿದ್ದು, ಅವರ ಮೂಲಕ ಘಟಕಗಳನ್ನು ನಿರ್ವಹಣೆ ಮಾಡಲಾಗುತ್ತಿದೆ. ಈ ಸಂಬಂಧ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿ-ಗತಿಗಳ ಕುರಿತು ವರದಿ ನೀಡಲು ಸೂಚಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಗಂಡನ ಪರಸ್ತೀ ಸಹವಾಸ; ಮಗು ಕೊಂದು ಸಾವಿಗೆ ಶರಣಾದ ಗ್ರಾಮ ಪಂಚಾಯತಿ ಅಧ್ಯಕ್ಷೆ!
ನಗರದಲ್ಲಿ ಕಾವೇರಿ 5 ಹಂತವು ಈಗಾಗಲೇ ಚಾಲ್ತಿಯಲ್ಲಿರುವುದರಿಂದ, 1ನೇ ಏಪ್ರಿಲ್ 2025 ರಿಂದ ಕುಡಿಯುವ ನೀರಿನ ಸಂಪೂರ್ಣ ಜವಾಬ್ದಾರಿ ಜಲಮಂಡಳಿ ಇಲಾಖೆಯದ್ದೇ ಆಗಿರುತ್ತದೆ. ಈ ಸಂಬಂಧ ಪಾಲಿಕೆಯ ಒಡೆತನದಲ್ಲಿದ್ದ ಬೋರ್ ವೆಲ್ ಗಳನ್ನು ಹಸ್ತಾಂತರಿಸುವ ಸಂಬಂಧ ಜಲಮಂಡಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ಅದರ ಜೊತೆಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಾ 1ನೇ ಏಪ್ರಿಲ್ 2025 ವೇಳೆಗೆ ಜಲಮಂಡಿಗೆ ಹಸ್ತಾಂತರಿಸಲಾಗುವುದೆಂದು ತಿಳಿಸಿದರು.
ಕುಡಿಯುವ ನೀರಿನ ವಿಚಾರವನ್ನು ಇನ್ನು ಮುಂದೆ ಸಂಪೂರ್ಣವಾಗಿ ಜಲಮಂಡಳಿಯೇ ನಿರ್ವಹಣೆ ಮಾಡಲಿದೆ. ಕುಡಿಯುವ ನೀರಿನ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಹಣಕಾಸು ಆಯೋಗದಿಂದ ಪಾಲಿಕೆಗೆ ಬರುವ ಅನುದಾನವನ್ನು ಜಲಮಂಡಳಿಗೆ ವರ್ಗಾಯಿಸಲಾಗುವುದೆಂದು ಹೇಳಿದರು.