ಬೆಂಗಳೂರು ಮಳೆ: ರಾಜಕಾಲುವೆಗಳ ಅಕ್ಕಪಕ್ಕ 50 ಅಡಿವರೆಗೂ ಕಟ್ಟಡ ನಿರ್ಮಿಸುವಂತಿಲ್ಲ!

By Sathish Kumar KH  |  First Published Oct 24, 2024, 8:18 PM IST

ಬೆಂಗಳೂರಿನಲ್ಲಿ ಅತಿವೃಷ್ಠಿಯಿಂದ ಉಂಟಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜಕಾಲುವೆ ಒತ್ತುವರಿ ತೆರವು, ಕೆರೆಗಳ ನಡುವೆ ಸಂಪರ್ಕ ಕಲ್ಪಿಸುವ ಕಾರ್ಯಗಳನ್ನು ಕೈಗೊಳ್ಳಲಾಗುವುದು. 300 ಕಿ.ಮೀ ಉದ್ದದ ರಸ್ತೆ ನಿರ್ಮಾಣ, ಚರಂಡಿಗಳ ಹೂಳೆತ್ತುವಿಕೆ, ಅಪಾಯಕಾರಿ ಕಟ್ಟಡಗಳ ಸಮೀಕ್ಷೆ ಮತ್ತು ತೆರವು ಕಾರ್ಯಗಳನ್ನು ಕೈಗೊಳ್ಳಲಾಗುವುದು.


ಬೆಂಗಳೂರು (ಅ.24) : ಕೆರೆಗಳ ನಡುವೆ ಸಂಪರ್ಕ, ರಾಜಕಾಲುವೆ ಇಕ್ಕೆಲಗಳ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣಕ್ಕೆ ಮಾಡುವಂತಿಲ್ಲ. ರಾಜಕಾಲುವೆ ಪಕ್ಕದಲ್ಲಿ 300 ಕಿ.ಮೀ. ಉದ್ದ ರಸ್ತೆ ನಿರ್ಮಾಣ, ಚರಂಡಿಗಳ ಹೂಳೆತ್ತುವುದು, ಅಪಾಯಕಾರಿ, ಅನಧಿಕೃತ ಕಟ್ಟಗಳ ಸಮೀಕ್ಷೆ ಹಾಗೂ ತೆರವು ಇವುಗಳನ್ನು ಕೂಡಲೇ ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಬೇಕು. ಈ ಮೂಲಕ ಬೆಂಗಳೂರು ನಗರದಲ್ಲಿ ಅತಿವೃಷ್ಠಿಯಿಂದ ಉದ್ಭವಿಸುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಅತಿವೃಷ್ಠಿ ವಿಪತ್ತು ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಮತ್ತಿತರ ಅಧಿಕಾರಿಗಳ ಜತೆ ತುರ್ತುಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಗುರುವಾರ ಅತಿವೃಷ್ಠಿ ಸಮಸ್ಯೆ ನಿವಾರಣೆಗಾಗಿ ಹಲವು ಪ್ರಮುಖ ತೀರ್ಮಾನ ಕೈಗೊಂಡಿದ್ದು, ಅಧಿಕಾರಿಗಳಿಗೆ ಕೆಲವು ನಿರ್ದೇಶನ ನೀಡಿದ್ದೇನೆ. ಎಲ್ಲೆಲ್ಲಿ ಮಳೆನೀರು ವಸತಿ ಪ್ರದೇಶಗಳಿಗೆ ನುಗ್ಗಿ ಸಮಸ್ಯೆ ಎದುರಾಗುತ್ತಿದೆಯೋ ಅಲ್ಲಿ ಪರಿಹಾರಕ್ಕೆ ಯೋಜನೆ ರೂಪಿಸಿ, ಅದಕ್ಕೆ ಅಗತ್ಯವಿರುವ ಹಣಕಾಸಿನ ಅಂದಾಜನ್ನು ನೀಡಲು ವಲಯವಾರು ಆಯುಕ್ತರು, ಮುಖ್ಯ ಎಂಜಿನಿಯರ್ ಗಳು ಹಾಗೂ ಮಳೆನೀರುಗಾಲುವೆ ನಿರ್ವಹಣೆ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸಮಿತಿ ರಚಿಸಲಾಗಿದೆ. ಮುಂದಿನ ಒಂದು ವಾರದ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿದೆ. ಈ ಅಧಿಕಾರಿಗಳಿಗೆ ಆಯಾ ಪ್ರದೇಶದಲ್ಲಿ ಎಷ್ಟು ಮಳೆ ಬಂದರೆ ಯಾವ ರೀತಿ ತೊಂದರೆಯಾಗುತ್ತದೆ ಎಂಬುದರ ಅರಿವಾಗಿದೆ.

Latest Videos

undefined

ಇದನ್ನೂ ಓದಿ: Bengaluru: ಎಲೆಕ್ಟ್ರಾನಿಕ್‌ ಸಿಟಿ ಫ್ಲೈಓವರ್‌ ಜಾಮ್‌; ಆಫೀಸ್‌ ಕ್ಯಾಬ್‌ ರೋಡಲ್ಲೇ ಬಿಟ್ಟು ಟೆಕ್ಕಿಗಳ ನಟರಾಜ ಸರ್ವೀಸ್‌!

ಮಳೆನೀರು ಸಾಗಲು ಕೆರೆಗಳ ನಡುವೆ ಸಂಪರ್ಕ: ಎಲ್ಲಾ ಕೆರೆಗಳ ನಡುವೆ ಸಂಪರ್ಕ ಏರ್ಪಡಿಸಿ ಮಳೆನೀರು ಸರಾಗವಾಗಿ ಹರಿಯುವಂತೆ ಮಾಡಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸಲು ಸೂಚಿಸಲಾಗಿದೆ. ಬರಗಾಲದಲ್ಲಿ ಕೆರೆಗಳು ಬತ್ತಿ ಹೋಗಿದ್ದವು. ಕೆರೆಗಳು ತುಂಬಬೇಕು, ಅಂತರ್ಜಲ ಪುನಶ್ಚೇತನಗೊಳ್ಳಬೇಕು. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಕೆರೆಗಳಿಗೆ ಕೊಳಚೆ ನೀರನ್ನು ಹರಿಸುವುದಲ್ಲ. ಕೇವಲ ಮಳೆ ನೀರು ಹೋಗುವಂತೆ ನೋಡಿಕೊಳ್ಳಬೇಕು. ಹೀಗಾಗಿ ಕೆರೆಗಳ ನಡುವೆ ಸಂಪರ್ಕ ಸಾಧಿಸಲು ಯೋಜನೆ ರೂಪಿಸಲು ಸೂಚಿಸಿದ್ದೇನೆ. ಈ ಕಾಮಗಾರಿಗೆ ಎಲ್ಲೆಲ್ಲಿ ಖಾಸಗಿ ಭೂಮಿ ಅಡ್ಡಬರುತ್ತದೆಯೋ ಅಲ್ಲಿ ಟಿಡಿಆರ್ ನೀಡುವ ಮೂಲಕ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದೇವೆ. ಇನ್ನು ರಾಜಕಾಲುವೆಗಳ ಒತ್ತುವರಿ ತೆರವಿಗೆ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಪ್ರವಾಹದ ನೀರು ಕೆರೆಗೆ ಹೋಗುವುದು ಹಾಗೂ ಕೆರೆಯಿಂದ ಕೋಡಿ ಬೀಳುವ ನೀರು ಸರಾಗವಾಗಿ ಹೋಗಲು ಅನುವಾಗುವಂತೆ ಗೇಟ್ ಅಳವಡಿಸಲು ಸೂಚಿಸಿದ್ದೇನೆ. ಇದಕ್ಕೆ ಬೇಕಾಗಿರುವ ಮೂಲಸೌಕರ್ಯ ತಯಾರಿ ಮಾಡಿಕೊಳ್ಳಲು ಬಿಡಿಎ, ಬಿಬಿಎಂಪಿ ಹಾಗೂ ಕೆರೆ ಅಭಿವೃದ್ಧಿ ಪ್ರಾಧಿಕಾರದವರಿಗೆ ಸೂಚಿಸಿದ್ದೇನೆ ಎಂದರು.

ರಾಜಕಾಲುವೆ ಅಕ್ಕಪಕ್ಕ 50 ಅಡಿ ಕಟ್ಟಡ ನಿರ್ಮಾಣ ಮಾಡುವಂತಿಲ್ಲ: ರಾಜಕಾಲುವೆ ಅಕ್ಕಪಕ್ಕದಲ್ಲಿ 50 ಅಡಿಗಳಷ್ಟು ಅಂತರದಲ್ಲಿ ಯಾರೂ ಕಟ್ಟಡ ಕಟ್ಟುವಂತಿಲ್ಲ. ಇಂತಹ ಜಾಗವನ್ನು ಗುರುತಿಸಿದ್ದು, ಇಲ್ಲಿ 300 ಕಿ.ಮೀ. ಉದ್ದದ ರಸ್ತೆ ನಿರ್ಮಾಣ ಮಾಡಲಾಗುವುದು. ಇದರಿಂದ ಒತ್ತುವರಿ ನಿಲ್ಲುತ್ತದೆ ಹಾಗೂ ಮಳೆನೀರು ಹರಿಯಲು ನೆರವಾಗುತ್ತದೆ. ಯೋಜನೆಯ ಆರಂಭಿಕ ಹಂತಕ್ಕೆ ಹಣ ಮೀಸಲಿಡಲಾಗಿದೆ. ಈ ಭಾಗದ ಭೂಮಾಲೀಕರಿಗೆ ಟಿಡಿಆರ್ ಮೂಲಕ ಪರಿಹಾರ ನೀಡಲಾಗುವುದು. ಮಳೆ ಪೀಡಿತ ಪ್ರದೇಶಗಳಲ್ಲಿ ಪರಿಹಾರಗಳು ಭರದಿಂದ ಸಾಗುತ್ತಿದೆ. ಕೇಂದ್ರಿಯ ವಿಹಾರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ನಿವಾಸಿಗಳನ್ನು ಸ್ಥಳಾಂತರ ಮಾಡಿದ್ದೇವೆ. ನೀರನ್ನು ಹೊರತೆಗೆಯಲಾಗುತ್ತಿದೆ. ಕೆಲವು ಕುಟುಂಬಗಳು ಸ್ಥಳಾಂತರಗೊಳ್ಳಲು ಒಪ್ಪದ ಕಾರಣ ಅವರ ಜವಾಬ್ದಾರಿ ವಹಿಸಿಕೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ: ಇನ್ನು ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ಅನೇಕ ಕಟ್ಟಡಗಳು ಪಾಲಿಕೆ ಗಮನಕ್ಕೆ ಬಂದಿದ್ದು, ಅವುಗಳನ್ನು ಕೂಡಲೇ ಒಡೆದು ಹಾಕಲು ಆದೇಶ ನೀಡಲಾಗಿದೆ. ನಂಜಪ್ಪ ಗಾರ್ಡನ್ ಪ್ರದೇಶದಲ್ಲಿ 10 x 25 ಅಡಿ ನಿವೇಶನದಲ್ಲಿ ನೆಲಮಹಡಿ ಜತೆಗೆ 5 ಮಹಡಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಇದನ್ನು ತೆರವುಗೊಳಿಸಲು ಸೂಚಿಸಿದ್ದೇನೆ. ಪ್ರತಿ ವಲಯದಲ್ಲಿ ಅಕ್ರಮ, ಕಳಪೆ ಗುಣಮಟ್ಟದ ಕಾಮಗಾರಿ ಹಾಗೂ ಜೀವಕ್ಕೆ ಅಪಾಯ ತರಬಹುದಾದ ಕಟ್ಟಡಗಳ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದೇನೆ. ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಅಗತ್ಯ ಕ್ರಮ ಕೈಗೊಳ್ಳಲು ನಮಗೆ ಸಂಪೂರ್ಣ ಅಧಿಕಾರವಿದೆ. ಈ ಪರಿಸ್ಥಿತಿಯಲ್ಲಿ ಸರ್ಕಾರ ಯಾವುದೇ ಆಸ್ತಿಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡು ಕ್ರಮಕೈಗೊಳ್ಳಲು ಅಧಿಕಾರವಿದೆ. ಬಿಎಂಟಿಎಫ್, ಬಿಡಿಎ, ಬಿಬಿಎಂಪಿ, ಬಿಎಂಆರ್ ಡಿಎ ಕೆಲವು ತಿದ್ದುಪಡಿ ತಂದು ಅವರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು. ಈ ಹಿಂದೆಯೂ ಅಧಿಕಾರವನ್ನು ಮೇಲ್ಕಂಡ ಸಂಸ್ಥೆಗಳಿಗೆ ನೀಡಲಾಗಿತ್ತು. ಆದರೆ 2020-21ರ ಸಮಯದಲ್ಲಿ ಅದನ್ನು ಹಿಂಪಡೆಯಲಾಗಿತ್ತು. ಈಗ ಮತ್ತೆ  ನೀಡಲಾಗುತ್ತಿದೆ. ಕಂದಾಯ ಬಡಾವಣೆಯಾಗಿರಲಿ, ಬೇರೆ ಬಡಾವಣೆಯಾಗಿರಲಿ ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಒತ್ತುವರಿ ನಿಲ್ಲಿಸಲು ಸುಗ್ರೀವಾಜ್ಞೆ ತರಲು ಗೃಹ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇವೆ. ಈ ವಿಚಾರವಾಗಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗುವುದು ಎಂದರು.

ಇದನ್ನೂ ಓದಿ: ಮಳೆ ಎಫೆಕ್ಟ್‌: ಮನೆಮನೆಯಿಂದ ಕಸ ಸಂಗ್ರಹ ಬಂದ್‌, ಗಬ್ಬೆದ್ದು ನಾರುತ್ತಿರುವ ಸಿಲಿಕಾನ್‌ ಸಿಟಿ ಬೆಂಗ್ಳೂರು!

ಸೋಮವಾರದಿಂದ ಕಟ್ಟಡಗಳ ಸಮೀಕ್ಷೆ: ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಬಗ್ಗೆ ಸೋಮವಾರದಿಂದ ಸಮೀಕ್ಷೆ ನಡೆಸಲಾಗುವುದು. ಖಾಸಗಿ ಹಾಗೂ ಪಾಲಿಕೆಯಿಂದ ಈ ಸಮೀಕ್ಷೆ ನಡೆಸಲಾಗುವುದು. ಯಾವುದಾದರೂ ಕಟ್ಟಡ ಕಾನೂನುಬಾಹಿರವಾಗಿ ನಿರ್ಮಾಣವಾಗುತ್ತಿದೆಯೇ ಎಂದು ಪತ್ತೆಹಚ್ಚಲಾಗುವುದು. ಅಕ್ರಮ ಕಟ್ಟಡ ನಿರ್ಮಾಣ ತಡೆಯಲಾಗುವುದು. ಪ್ರತಿ ಕಟ್ಟಡದ ಫೋಟೋ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡ್ರೋನ್ ಮೂಲಕ ಇದರ ಮೇಲ್ವಿಚಾರಣೆ ಮಾಡಲಾಗುವುದು. ಬಿಎಂಆರ್ ಡಿಎ ಹಾಗೂ ಬಿಎಂಟಿಎಫ್ ವ್ಯಾಪ್ತಿಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆ ಸೇರಲಿದ್ದು, ಈ ಪ್ರದೇಶಗಳಲ್ಲಿ ಅಕ್ರಮ ಕಟ್ಟಡ ನಿರ್ಮಾಣ ನಿಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಎಲ್ಲಾ ಚರಂಡಿಗಳ ಹೂಳೆತ್ತಲಾಗುವುದು ಎಂದು ಮಾಹಿತಿ ನೀಡಿದರು.

click me!