ಚಿಕ್ಕಬಳ್ಳಾಪುರ ಅಭ್ಯರ್ಥಿಗಳ ಮೇಲೆ ಬೆಟ್ಟಿಂಗ್ ಜೋರು - ಹತ್ತರಿಂದ ಮೂವತ್ತು ಲಕ್ಷದವರೆಗೆ ಬಾಜಿ

By Kannadaprabha News  |  First Published May 28, 2024, 12:14 PM IST

ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಒಂದಾಗಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಈ ಪಕ್ಷದ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂದು ಅಭ್ಯರ್ಥಿಗಳ ಪರ ಬೆಟ್ಟಿಂಗ್ ಕಟ್ಟುವ ಕೆಲಸ ಕದ್ದುಮುಚ್ಚಿ ನಡೆಯುತ್ತಿದೆ.


ರುದ್ರೇಶ್ ಹೊನ್ನೇನಹಳ್ಳಿ

 ದಾಬಸ್‌ಪೇಟೆ :  ಲೋಕಸಭಾ ಚುನಾವಣೆಯ ಮತದಾನ ಮುಗಿದು ತಿಂಗಳು ಕಳೆದಿದೆ. ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗುವ ಮತ ಎಣಿಕೆಯ ಜೂನ್ 4ರ ಸುದಿನಕ್ಕಾಗಿ ಎಲ್ಲರೂ ಕಾತುರದಿಂದ ಕಾಯುತ್ತಿದ್ದು, ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಒಂದಾಗಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಈ ಪಕ್ಷದ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂದು ಅಭ್ಯರ್ಥಿಗಳ ಪರ ಬೆಟ್ಟಿಂಗ್ ಕಟ್ಟುವ ಕೆಲಸ ಕದ್ದುಮುಚ್ಚಿ ನಡೆಯುತ್ತಿದೆ.

Tap to resize

Latest Videos

ಫಲಿತಾಂಶಕ್ಕೆ ಇನ್ನೂ 8 ದಿನಗಳಿದ್ದು, ನೆಲಮಂಗಲ ತಾಲೂಕಿನಲ್ಲಿ ಆಯಾ ಪಕ್ಷಗಳ ಬೆಂಬಲಿಗರು, ಕಾರ್ಯಕರ್ತರು ಹಾಗೂ ಅಭ್ಯರ್ಥಿಗಳ ಅಭಿಮಾನಿಗಳು ತಮ್ಮ ನೆಚ್ಚಿನ ಅಭ್ಯರ್ಥಿಯೇ ಗೆಲ್ಲಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇನ್ನೂ ಕೆಲವರು ಕಟ್ಟಿ ಅಭಿಮಾನ ಮೆರೆಯುತ್ತಿದ್ದು, ಎರಡೂ ಪಕ್ಷದ ಮುಖಂಡರು, ಕಾರ್ಯಕರ್ತರು 10 ಲಕ್ಷದಿಂದ 30 ಲಕ್ಷದವರೆಗೆ ಬೆಟ್ಟಿಂಗ್ ಕಟ್ಟುತ್ತಿದ್ದು, ಈ ಬೆಟ್ಟಿಂಗ್ 50 ಲಕ್ಷವನ್ನೂ ದಾಟಬಹುದಾಗಿದೆ.

29 ಅಭ್ಯರ್ಥಿಗಳು ಕಣದಲ್ಲಿ:

ಚಿಕ್ಕಬಳ್ಳಾಪುರವೂ ಚಿಕ್ಕಬಳ್ಳಾಪುರ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರ, ಬೆಂಗಳೂರು ನಗರ ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಶೇ.77ರಷ್ಟು ಮತದಾನವಾಗಿದ್ದು, ಚುನಾವಣೆಯಲ್ಲಿ ಒಟ್ಟು 29 ಜನ ಸ್ಪರ್ಧಿಸಿದ್ದರು. ಇದರಲ್ಲಿ ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಯಿದೆ.

ಬಿಜೆಪಿ- ಕಾಂಗ್ರೆಸ್ ನಡುವೆ ಹಣಾಹಣಿ:

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಇವರಲ್ಲಿ ಯಾರು ಗೆಲ್ಲುತ್ತಾರೆ ಎಂಬ ಲೆಕ್ಕಾಚಾರ ಜೋರಾಗಿದೆ. ಯಾರು ಎಷ್ಟು ಮತ ಪಡೆಯುತ್ತಾರೆ ಎನ್ನುವ ಚರ್ಚೆಯೂ ಜೋರಾಗಿದೆ.

ಗೆಲುವಿನ ನಿರೀಕ್ಷೆಯಲ್ಲಿ ಕಾಂಗ್ರೆಸ್ ಬೆಂಬಲಿಗರು:

ಇನ್ನೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಐದು ಜನ ಕಾಂಗ್ರೆಸ್ ಶಾಸಕರು, ಒಬ್ಬರು ಪಕ್ಷೇತರ ಶಾಸಕರು ಹಾಗೂ ಇಬ್ಬರು ಬಿಜೆಪಿ ಶಾಸಕರಿದ್ದು, ಅಧಿಕ ಸಂಖ್ಯೆಯಲ್ಲಿ ಕಾಂಗ್ರೆಸ್ ಶಾಸಕರು ಹಾಗೂ ಪಕ್ಷೇತರ ಶಾಸಕ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದಾರೆ, ಅಲ್ಲದೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದು, ಮತದಾರರ ಮನ ಗೆದ್ದಿರುವ ಕಾರಣ, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಿದ್ದಾರೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಮುಖಂಡರಿದ್ದಾರೆ.

ಮೋದಿ ಮೇಲೆ ಅಪಾರ ವಿಶ್ವಾಸ:

ದೇಶದ ಅಭಿವೃದ್ಧಿ, ರಕ್ಷಣೆ ವಿಚಾರದಲ್ಲಿ ದೇಶದಲ್ಲಿ ಸಮರ್ಥ ನಾಯಕ ಮೋದಿಯವರ ಬಗ್ಗೆ ಅಪಾರ ವಿಶ್ವಾಸವಿದೆ. ಮೋದಿಯವರ ಜನಪ್ರಿಯತೆಯನ್ನು ನೋಡಿ ಬಿಜೆಪಿಗೆ ಮತ ಹಾಕಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಸಮನ್ವಯತೆಯಿಂದ ಎನ್ ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಗೆಲುವು ಸಾಧಿಸಲಿದ್ದಾರೆ ಎಂಬುದು ಬಿಜೆಪಿ ಮುಖಂಡರ ಮಾತಾಗಿದೆ. 

click me!