Jana Swaraj: ನ. 18ರಿಂದ 3 ದಿನ ಬಿಜೆಪಿ ನಾಯಕರ ಜನಸ್ವರಾಜ್‌ ಯಾತ್ರೆ!

Kannadaprabha News   | Asianet News
Published : Nov 17, 2021, 07:26 AM ISTUpdated : Nov 18, 2021, 11:40 AM IST
Jana Swaraj: ನ. 18ರಿಂದ 3 ದಿನ ಬಿಜೆಪಿ ನಾಯಕರ ಜನಸ್ವರಾಜ್‌ ಯಾತ್ರೆ!

ಸಾರಾಂಶ

*ಕೊಪ್ಪಳದಲ್ಲಿ ಸಿಎಂ ಬೊಮ್ಮಾಯಿ ಅವರಿಂದ ಉದ್ಘಾಟನೆ *ಚುನಾವಣೆಗೆ ಸಿದ್ಧತೆ: 4 ತಂಡದಲ್ಲಿ ನಾಯಕರ ಪ್ರವಾಸ *ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆ ಕುರಿತು ಜನಜಾಗೃತಿ

ಬೆಂಗಳೂರು(ನ.17): ಮುಂದಿನ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ (BJP) ಸಿದ್ಧತೆ ಆರಂಭಿಸಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yediyurappa) ಸೇರಿದಂತೆ ನಾಲ್ವರು ಹಿರಿಯ ನಾಯಕರ ನೇತೃತ್ವದ ‘ಜನ ಸ್ವರಾಜ್‌’ ಯಾತ್ರೆಯು ಗುರುವಾರದಿಂದ ಆರಂಭವಾಗಲಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ (Nalin kumar Katil), ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ (Jagadish Shettar) ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ (K. S. Eshwarappa) ನೇತೃತ್ವದಲ್ಲಿ ಮೂರು ದಿನಗಳ ಕಾಲ ಯಾತ್ರೆ ನಡೆಯಲಿದೆ. ಆಯಾ ಭಾಗದ ಕೇಂದ್ರ ಸಚಿವರು, ಸಂಸದರು, ಶಾಸಕರು, ಮುಖಂಡರು ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

Bitcoin Scam: ಕಾಂಗ್ರೆಸ್‌-ಬಿಜೆಪಿ ನಾಯಕರ ಮಧ್ಯೆ ವಾಗ್ಯುದ್ಧ..!

ಪಕ್ಷ ಸಂಘಟನೆ ಸೇರಿದಂತೆ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗೆ ಪೂರಕವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆ ಕುರಿತು ಜನಜಾಗೃತಿ ಮೂಡಿಸಲಾಗುವುದು. ಬಹುತೇಕ ಗ್ರಾಮಾಂತರ ಪ್ರದೇಶದಲ್ಲಿ ಪ್ರವಾಸ ನಿಗದಿಪಡಿಸಲಾಗಿದೆ.

ಯಾತ್ರೆಯ ಉದ್ದೇಶ?

ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆ ಕುರಿತು ಜನಜಾಗೃತಿ ಮೂಡಿಸುವುದು ಜನ ಸ್ವರಾಜ್‌ ಯಾತ್ರೆಯ ಮುಖ್ಯ ಉದ್ದೇಶ. ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಶೀಘ್ರ ನಡೆವ ಸಾಧ್ಯತೆ ಹಿನ್ನೆಲೆಯಲ್ಲಿ, ಬಹುತೇಕ ಗ್ರಾಮಾಂತರ ಪ್ರದೇಶದಲ್ಲಿ ಪ್ರವಾಸ ನಿಗದಿ.

ಎಲ್ಲಿಂದ ಆರಂಭ?:

ಕೊಪ್ಪಳದಲ್ಲಿ ನ.18ರಂದು ನಡೆಯಲಿರುವ ಅದ್ಧೂರಿ ಕಾರ್ಯಕ್ರಮದ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ನೇತೃತ್ವದ ತಂಡ ಈ ಭಾಗದಲ್ಲಿ ಪ್ರಚಾರ ನಡೆಸಲಿದೆ. ಇದೇ ವೇಳೆ ಬಿ.ಎಸ್‌.ಯಡಿಯೂರಪ್ಪ ಅವರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಿಂದ, ಚಿಕ್ಕಮಗಳೂರಿಂದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ನೇತೃತ್ವದಲ್ಲಿ ಪ್ರಚಾರ ಕಾರ್ಯ ಪ್ರಾರಂಭವಾಗಲಿದೆ.

ಕಟೀಲ್‌ ತಂಡ:

ನಳಿನ್‌ ಕುಮಾರ್‌ ನೇತೃತ್ವದ ತಂಡದಲ್ಲಿ ವಸತಿ ಸಚಿವ ವಿ.ಸೋಮಣ್ಣ, ಗೃಹ ಸಚಿವ ಆರಗ ಜ್ಞಾನೇಂದ್ರ, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ, ಶಾಸಕರಾದ ರಾಜೂಗೌಡ, ಎನ್‌.ಮಹೇಶ್‌, ಪಕ್ಷದ ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ, ಸಂಸದ ಪ್ರತಾಪ್‌ ಸಿಂಹ ಇರಲಿದ್ದಾರೆ. ಸಂಚಾಲಕರಾಗಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಹ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿ ಎಸ್‌.ಕೇಶವ ಅವರು ಕಾರ್ಯನಿರ್ವಹಿಸಲಿದ್ದಾರೆ.

ಬಿಎಸ್‌ವೈ ತಂಡ:

ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ತಂಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಬೃಹತ್‌ ಮತ್ತು ಮಧ್ಯಮ ನೀರಾವರಿ ಸಚಿವ ಗೋವಿಂದ ಕಾರಜೋಳ, ಸಾರಿಗೆ ಸಚಿವ ಬಿ.ಶ್ರೀರಾಮುಲು, ಪಕ್ಷದ ರಾಜ್ಯ ಉಪಾಧ್ಯಕ್ಷರಾದ ತೇಜಸ್ವಿನಿ ಅನಂತಕುಮಾರ್‌, ಎಂ.ಬಿ.ನಂದೀಶ್‌ ಇರಲಿದ್ದಾರೆ. ಸಂಚಾಲಕರಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ಸಹ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿ ಕೆ.ಎಸ್‌.ನವೀನ್‌ ಕಾರ್ಯನಿರ್ವಹಿಸಲಿದ್ದಾರೆ.

ಈಶ್ವರಪ್ಪ ತಂಡ:

ಕೆ.ಎಸ್‌.ಈಶ್ವರಪ್ಪ ನೇತೃತ್ವದ ತಂಡದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಂದಾಯ ಸಚಿವ ಆರ್‌.ಅಶೋಕ್‌, ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್‌, ಮೀನುಗಾರಿಕೆ ಸಚಿವ ಎಸ್‌.ಅಂಗಾರ, ಶಾಸಕ ಅರವಿಂದ ಲಿಂಬಾವಳಿ, ರಾಜ್ಯ ಉಪಾಧ್ಯಕ್ಷ ಎಂ.ಶಂಕರಪ್ಪ ಇರಲಿದ್ದಾರೆ. ಸಂಚಾಲಕರಾಗಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ಸಹ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿ ವಿನಯ್‌ ಬಿದರೆ ಕಾರ್ಯ ನಿರ್ವಹಿಸಲಿದ್ದಾರೆ.

ಶೆಟ್ಟರ್‌ ತಂಡ:

ಜಗದೀಶ್‌ ಶೆಟ್ಟರ್‌ ನೇತೃತ್ವದ ತಂಡದಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್‌, ಅಬಕಾರಿ ಸಚಿವ ಗೋಪಾಲಯ್ಯ, ರಾಜ್ಯ ಉಪಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಎಂ.ರಾಜೇಂದ್ರ ಇರಲಿದ್ದಾರೆ. ಸಂಚಾಲಕರಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್‌ ಟೆಂಗಿನಕಾಯಿ, ಸಹ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿ ಮುನಿರಾಜು ಗೌಡ ಕಾರ್ಯನಿರ್ವಹಿಸಲಿದ್ದಾರೆ.

PREV
Read more Articles on
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ