ತುಮಕೂರು (ನ.17) : ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಅಮೃತ ಸರೋವರಗಳನ್ನು ನಿರ್ಮಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಹಾಗೂ ದಿಶಾ ಸಮಿತಿ ಅಧ್ಯಕ್ಷ ಎ.ನಾರಾಯಣಸ್ವಾಮಿ ತಿಳಿಸಿದರು.
ಜಿಲ್ಲಾ ಪಂಚಾಯತಿಯಲ್ಲಿ ಜರುಗಿದ ದಿಶಾ ಸಮಿತಿ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಒಂದು ಹನಿ ನೀರೂ ಸಹ ವ್ಯರ್ಥವಾಗಬಾರದೆನ್ನುವ ಉದ್ದೇಶದಿಂದ ಪ್ರಧಾನ ಮಂತ್ರಿಗಳ ಆಶಯವಾದ ಅಮೃತ ಸರೋವರ ನಿರ್ಮಾಣ ಕಾರ್ಯವನ್ನು ಅತಿ ಜರೂರಾಗಿ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ದಿಶಾ ಸಭೆಯಲ್ಲಿ ಸೂಚಿಸಿದ್ದೇನೆ ಎಂದು ಹೇಳಿದರು.
undefined
ತುಮಕೂರು: ತಾಯಿ, ಸೋದರರ ಸಾವಿನಿಂದ ಅನಾಥವಾದ ಬಾಲಕಿಗೆ 10 ಲಕ್ಷ, ಸಚಿವ ಸುಧಾಕರ್
ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಿ ದಿಶಾ ಸಮಿತಿ ಅಧ್ಯಕ್ಷರನ್ನಾಗಿ ಸರ್ಕಾರ ನನ್ನನ್ನು ನೇಮಿಸಿದ್ದು, ಜಿಲ್ಲೆಯಲ್ಲಿ ಕೇಂದ್ರ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು. ಪ್ರಮುಖವಾಗಿ ನರೇಗಾ ಯೋಜನೆಯಡಿ ಅಮೃತ ಸರೋವರಗಳನ್ನು ನಿರ್ಮಿಸಲು ಆದ್ಯತೆ ನೀಡಲಾಗುವುದು. ಈಗಾಗಲೇ ಜಿಲ್ಲೆಯಲ್ಲಿ 70 ಅಮೃತ ಸರೋವರಗಳನ್ನು ಗುರುತಿಸಲಾಗಿದ್ದು, 20ಕ್ಕೂ ಹೆಚ್ಚು ಅಮೃತ ಸರೋವರಗಳನ್ನು ಹೊಸದಾಗಿ ನಿರ್ಮಿಸಲಾಗಿದೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಎಂದರು.
ನರೇಗಾ ಯೋಜನೆಯಡಿ ಜಿಲ್ಲೆಯ 600ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಆವರಣ ಗೋಡೆ, 440 ಶಾಲೆಗಳಲ್ಲಿ ಶೌಚಾಲಯ, 334 ಶಾಲೆಗಳಲ್ಲಿ ಆಟದ ಮೈದಾನ ನಿರ್ಮಾಣ ಮಾಡುವುದರ ಜೊತೆಗೆ ನೀರಿನ ಸಂರಕ್ಷಣೆಗಾಗಿ 391 ಶಾಲೆ ಹಾಗೂ ಪಂಚಾಯತಿ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವಿಧಾನವನ್ನು ಅಳವಡಿಸಲಾಗಿದೆ. ನವೆಂಬರ್ ಮಾಹೆಯ ಅಂತ್ಯದಲ್ಲಿ ರೈಲು ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧ ಭೂಸ್ವಾಧೀನ ಹಾಗೂ ಹಕ್ಕುಪತ್ರ ವಿತರಣೆ ಕುರಿತು ಚರ್ಚಿಸಲು ಕಂದಾಯ ಮಂತ್ರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮುನ್ನ 2022-23ನೇ ಸಾಲಿನ ಮೊದಲನೇ ಮತ್ತು 2ನೇ ತ್ರೈಮಾಸಿಕ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ನರೇಗಾ, ಕೃಷಿ, ತೋಟಗಾರಿಕೆ, ಕೌಶಲ್ಯಾಭಿವೃದ್ಧಿ, ಸ್ವಚ್ಛಭಾರತ್ ಮಿಷನ್, ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆ, ಸ್ಮಾರ್ಚ್ ಸಿಟಿ ಯೋಜನೆ, ಮತ್ತಿತರ ಯೋಜನೆಗಳ ಇಲಾಖಾವಾರು ಪ್ರಗತಿ ಪರಿಶೀಲಿಸಿದರು.
ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳಿಗೆ ಇಚ್ಛಾಶಕ್ತಿ ಇರಬೇಕು. ಸಭೆಗೆ ಅಂಕಿ ಅಂಶಗಳನ್ನು ಒದಗಿಸುವುದಷ್ಟೇ ಅಧಿಕಾರಿಗಳ ಕರ್ತವ್ಯವಲ್ಲ. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸದುಪಯೋಗವನ್ನು ತಲುಪಿಸಿದಾಗ ಮಾತ್ರ ಸರ್ಕಾರದ ಸದುದ್ದೇಶ ಸಾರ್ಥಕವಾಗುತ್ತದೆ. ಜಿಲ್ಲೆಯಲ್ಲಿ ಹಕ್ಕು ಪತ್ರ ವಿತರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ಅರ್ಹರಿಗೆ ಹಕ್ಕುಪತ್ರ ನೀಡುವ ಸಂಬಂಧ ಪ್ರತ್ಯೇಕ ಸಭೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾಹಿತಿ ನೀಡುತ್ತಾ, ಜಿಲ್ಲೆಯ ಪ್ರತಿ ತಾಲೂಕಿನಲ್ಲಿ 1000 ಹಕ್ಕುಪತ್ರ ವಿತರಣೆಗೆ ಗುರಿ ನಿಗಧಿಪಡಿಸಿಕೊಳ್ಳಲಾಗಿದ್ದು, ಶೀಘ್ರ ಕಾರ್ಯಪ್ರವೃತ್ತರಾಗಬೇಕೆಂದು ಸಚಿವರ ಅವಗಾಹನೆಗೆ ತಂದರು.
ಜಿಲ್ಲೆಯಲ್ಲಿರುವ ಎಲ್ಲಾ ಬ್ಯಾಂಕ್‌ಗಳು ರೈತರಿಗೆ ಕಡ್ಡಾಯವಾಗಿ ಸಾಲ ನೀಡಬೇಕು. ಈ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು. ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಪಡೆದ ಪ.ಜಾತಿ/ಪಂಗಡದ ಫಲಾನುಭವಿಗಳ ಪಟ್ಟಿಯನ್ನು ಪ್ರತ್ಯೇಕವಾಗಿ ವರ್ಗೀಕರಿಸಿ ಮಾಹಿತಿ ನೀಡಬೇಕೆಂದು ಲೀಡ್‌ಬ್ಯಾಂಕ್ ಮ್ಯಾನೇಜರ್ ಬಿ.ಡಿ. ಯಲ್ಲೂರ್ಕರ್ ಅವರಿಗೆ ಸೂಚನೆ ನೀಡಿದರು.
ಸ್ಮಾರ್ಚ್ ಸಿಟಿ ಯೋಜನೆಯಡಿ ನಗರದಲ್ಲಿ ಸುಮಾರು 600 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾದ ವಿವಿಧ ಕಾಮಗಾರಿಗಳು ಡಿಸೆಂಬರ್ ಅಂತ್ಯದವರೆಗೆ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧಗೊಳ್ಳಲಿದೆ. ಒಟ್ಟಾರೆ 930 ಕೋಟಿ ರು. ವೆಚ್ಚದಲ್ಲಿ 178 ಕಾಮಗಾರಿಗಳನ್ನು ಕೈಗೊಂಡಿದ್ದು, ಈ ಪೈಕಿ 146 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಸ್ಮಾರ್ಚ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ರಂಗಸ್ವಾಮಿ ಸಭೆಗೆ ವಿವರಣೆ ನೀಡಿದರು.
ಸಭೆಯಲ್ಲಿ ಸಂಸದ ಜಿ.ಎಸ್.ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್, ದಿಶಾ ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.
ವಾಹನ ಸವಾರರಿಗೆ ಫೈನ್ ಹಾಕಲು ರಸ್ತೆಗಿಳಿದ ಜಡ್ಜ್: ಪೊಲೀಸರಿಗೆ ಪಾಠ
ಭೂಸ್ವಾಧೀನಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣ
ಜಿಲ್ಲೆಯಲ್ಲಿ ಕೈಗೊಂಡಿರುವ ತುಮಕೂರು-ರಾಯದುರ್ಗ, ತುಮಕೂರು-ದಾವಣಗೆರೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ನಾರಾಯಣಸ್ವಾಮಿ, ತುಮಕೂರು-ದಾವಣಗೆರೆ ರೈಲು ಮಾರ್ಗದಲ್ಲಿ ದಾವಣಗೆರೆಯಿಂದ ಭರಮಸಾಗರದವರೆಗೂ ಭೂಸ್ವಾಧೀನಪಡಿಸಿಕೊಳ್ಳಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಭರಮಸಾಗರದಿಂದ ಚಿತ್ರದುರ್ಗದವರೆಗಿನ 18 ಕಿ.ಮೀ. ಮಾರ್ಗದಲ್ಲಿ ಭೂಸ್ವಾಧೀನಪಡಿಸಿಕೊಂಡ ಜಮೀನಿನ ಮಾಲೀಕರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ತುಮಕೂರು-ರಾಯದುರ್ಗ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ವಿಶೇಷ ಭೂ-ಸ್ವಾಧೀನ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ತಿಳಿಸಿದರು.