
ಚಿಕ್ಕಮಗಳೂರು (ಡಿ.22): ಕಾಫಿನಾಡು ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ ಮಾರ್ಗದಲ್ಲಿ ಶಾಲಾ ಮಕ್ಕಳಿದ್ದ ಜೀಪ್‌ವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸೋಮವಾರ ನಡೆದಿದೆ. ಈ ಅಪಘಾತದಲ್ಲಿ ಕೇರಳ ಮೂಲದ ಆರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೇರಳದ ಶಾಲೆಯೊಂದರಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕಾಗಿ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಟ್ರಾವೆಲ್ ಏಜೆನ್ಸಿಯ ಮೂಲಕ ದೊಡ್ಡ ಬಸ್ ಮಾಡಿಕೊಂಡು ಬಂದಿದ್ದ ತಂಡಕ್ಕೆ ಮುಳ್ಳಯ್ಯನಗಿರಿ ಶಿಖರಕ್ಕೆ ತೆರಳಲು ಬಸ್ ಸೌಕರ್ಯ ಸಾಧ್ಯವಾಗದ ಕಾರಣ, ಸ್ಥಳೀಯವಾಗಿ ಬಾಡಿಗೆ ಜೀಪ್‌ಗಳನ್ನು ಬಳಸಲಾಗಿತ್ತು. ಮಕ್ಕಳನ್ನು ಕರೆದೊಯ್ಯುತ್ತಿದ್ದ ಜೀಪ್ ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ.
ಮುಳ್ಳಯ್ಯನಗಿರಿ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ರಸ್ತೆಯಲ್ಲೇ ಪಲ್ಟಿಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಜೀಪ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳದಲ್ಲಿದ್ದ ಪ್ರವಾಸಿಗರು ಹಾಗೂ ಸ್ಥಳೀಯರು ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ. ಗಾಯಗೊಂಡ ಆರು ಮಕ್ಕಳನ್ನು ಕೂಡಲೇ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಮಕ್ಕಳು ಪ್ರಾಣಾಪಾಯದಿಂದ ಹೊರಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ವಿಷಯ ತಿಳಿಯುತ್ತಿದ್ದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಚಾಲಕನಿಗಾಗಿ ಹುಡುಕಾಟ ಮುಂದುವರೆದಿದೆ.
ಗಿರಿ ಶ್ರೇಣಿಯ ಕಡಿದಾದ ಹಾದಿಗಳಲ್ಲಿ ವಾಹನ ಚಾಲನೆ ಮಾಡುವಾಗ ಚಾಲಕರು ಹೆಚ್ಚಿನ ಜಾಗರೂಕತೆ ವಹಿಸಬೇಕು ಹಾಗೂ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.