
ಬೆಂಗಳೂರು (ಡಿ.24): ಬೆಂಗಳೂರಿನಿಂದ ಗೋಕರ್ಣಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸೀ ಬರ್ಡ್ ಸ್ಲೀಪರ್ ಕೋಚ್ ಖಾಸಗಿ ಬಸ್ ಚಿತ್ರದುರ್ಗದ ಬಳಿಯ ಗೊರ್ಲತ್ತು ಬಳಿ ಭೀಕರ ಅಪಘಾತ ಸಂಭವಿಸಿ 9 ಜನರು ಮೃತಪಟ್ಟಿದ್ದಾರೆ. ಈ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಜೊತೆಗೆ, ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಜೊತೆಗೆ ರಾಜ್ಯದ ಗಣ್ಯರಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಇನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳಿಂದ ಘಟನಾ ವರದಿ ಕೇಳಿದ್ದಾರೆ.
ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್)ಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ 'ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ' ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, 'ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ' ಎಂದು ಸಂತಾಪ ಸೂಚಿಸಿದ್ದಾರೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, 'ಚಿತ್ರದುರ್ಗದ ಹಿರಿಯೂರು ಬಳಿ ಇಂದು ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸದ್ಯಕ್ಕೆ ಬಂದ ಮಾಹಿತಿ ಪ್ರಕಾರ 11ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದನ್ನು ಕೇಳಿ ಅತ್ಯಂತ ದುಃಖವಾಯಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್‌ಗೆ ಡಿಕ್ಕಿ ಹೊಡೆದಿರುವುದೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಸಾರಿಗೆ ಆಯುಕ್ತರಾದ ಶ್ರೀ ಯೋಗೇಶ್ವರ್ ಹಾಗೂ ಸಹಾಯಕ ಆಯುಕ್ತರಾದ ಶ್ರೀಮತಿ ಓಂಕಾರೇಶ್ವರಿ ಅವರು ಹೋಗುತ್ತಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ' ಎಂದು ತಿಳಿಸಿದ್ದಾರೆ.
ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪದ ಗೊರ್ಲತ್ತು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದ ದುರ್ಘಟನೆಯಲ್ಲಿ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಸಜೀವ ದಹನವಾಗಿರುವ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ದುರ್ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬವರ್ಗದವರಿಗೆ ಭಗವಂತನು, ಈ ನೋವನ್ನು ಅರಗಿಸಿಕೊಳ್ಳುವ ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಟ್ವೀಟ್ ಪೋಸ್ಟ್ ಹಂಚಿಕೊಂಡಿದ್ದಾರೆ.