
ಗೌರಿಬಿದನೂರು : ಕೃಷಿ ಫೀಡರ್‌ಗಳ ಸೋಲಾರ್ ವಿದ್ಯುತ್ ಮೂಲಕ ರೈತರ ಕೃಷಿಪಂಪ್ ಸೆಟ್ ಗಳಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ‘ಕುಸುಮ್-ಸಿ’ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಲಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉನ್ನತ ಶಿಕ್ಷಣ ಸಚಿವ ಡಾ। ಎಂ.ಸಿ.ಸುಧಾಕರ್ ಅವರು ಹೇಳಿದ್ದಾರೆ.
ಉದ್ಘಾಟನಾ ಕಾರ್ಯಕ್ರಮ ನಡೆಯಲಿರುವ ಇಲ್ಲಿನ ನೇತಾಜಿ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ಸಿದ್ಧತಾ ಕಾರ್ಯ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬುಧವಾರ ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಸ್ಥಾಪಿಸಿರುವ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸುವರು. ಬಳಿಕ, 11ಕ್ಕೆ ನೇತಾಜಿ ಕ್ರೀಡಾಂಗಣಲ್ಲಿ ಕುಸುಮ್-ಸಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದರು.
ಕೇಂದ್ರ- ರಾಜ್ಯ ಸಚಿವರು ಭಾಗಿ:
ಕಾರ್ಯಕ್ರಮದಲ್ಲಿ ಕೇಂದ್ರ ನವೀಕರಿಸಬಹುದಾದ ಇಂಧನ ಹಾಗೂ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಪಡಿತರ ವಿತರಣೆ ಸಚಿವರಾದ ಪ್ರಹ್ಲಾದ್ ಜೋಶಿ, ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯಸಚಿವರಾದ ಶ್ರೀಪಾದ್ ಯೆಸ್ಸೋನಾಯಕ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಭಾಗವಹಿಸಲಿದ್ದಾರೆ.
ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿ ಮತ್ತು ಚರಕಮಟ್ಟೇನಹಳ್ಳಿಗ್ರಾಮದ ಸುಮಾರು 60 ಎಕರೆ ಪ್ರದೇಶದಲ್ಲಿ 20 ಮೆ.ವ್ಯಾ ಸಾಮರ್ಥ್ಯದಲ್ಲಿ ಸೋಲಾರ್ ಘಟಕ ಸ್ಥಾಪಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕುಸುಮ್- ಸಿ ಯೋಜನೆಯಡಿ ಸ್ಥಾಪಿಸಲಾಗಿರುವ ಅತಿದೊಡ್ಡ ಘಟಕವಿದು. ಹೀಗಾಗಿ, ಗೌರಿಬಿದನೂರಿನಲ್ಲಿ ಯೋಜನೆಯನ್ನು ಉದ್ಘಾಟಿಸಲು ಮುಖ್ಯಮಂತ್ರಿಗಳು ಮತ್ತು ಇಂಧನ ಸಚಿವರು ಆಗಮಿಸುತ್ತಿದ್ದಾರೆ ಎಂದು ಹೇಳಿದರು.