'ಸಿಎಂ ಬೊಮ್ಮಾಯಿ ಅವರಿಂದ ಯಡಿಯೂರಪ್ಪ ಅವರಿಗೆ ಅವಮಾನ'

By Kannadaprabha NewsFirst Published Sep 22, 2021, 9:42 AM IST
Highlights
  • ಮೈಸೂರನ್ನು ಪ್ಯಾರಿಸ್‌ ಮಾಡುವುದಾಗಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿಯವರ ಮಾತು ಏನಾಯಿತು
  •  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿರುವ ಹೇಳಿಕೆ ಖಂಡನಿಯ
  • ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಹೇಳಿಕೆ

 ಮೈಸೂರು (ಸೆ.22):  ಮೈಸೂರನ್ನು ಪ್ಯಾರಿಸ್‌ ಮಾಡುವುದಾಗಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿಯವರ ಮಾತು ಏನಾಯಿತು ಎಂದು ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಪ್ರಶ್ನಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್‌ ಸಿಂಗ್‌ ಅವರು ನಮ್‌ರ್‍ ಯೋಜಯಲ್ಲಿ ಮೈಸೂರು ನಗರದ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದರು. ಆದರೆ, ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮೈಸೂರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.

ಪ್ರಧಾನಿ ಮೋದಿಯವರು ಚುನಾವಣಾ ಪೂರ್ವದಲ್ಲಿ ಪ್ರಚಾರಕ್ಕಾಗಿ ಬಂದಿದ್ದಾಗ ಮೈಸೂರನ್ನು ಪ್ಯಾರಿಸ್‌ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಈ ಭರವಸೆ ಹುಸಿಯಾಗಿದೆ. ಈ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳು ಮೋದಿಯವರ ಗಮನಕ್ಕೆ ತರಬೇಕು. ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಯನ್ನು ಮೋದಿಯವರಿಗೆ ನೆನಪಿಸಬೇಕು. ಬಿಜೆಪಿಯವರು ಹಸಿ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ರೈತರ ಕುರಿತು ಸಿಎಂ ಹೇಳಿಕೆಗೆ ಕಿಡಿ

ದೆಹಲಿಯಲ್ಲಿ ಕಳೆದೊಂದು ವರ್ಷದಿಂದ ನಡೆಯುತ್ತಿರುವ ರೈತರ ಹೋರಾಟ ಪ್ರಾಯೋಜಿತ ಹೋರಾಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿರುವ ಹೇಳಿಕೆ ಖಂಡನಿಯ. ಬಸವರಾಜ ಬೊಮ್ಮಾಯಿ ಅವರಿಂದ ಇಂತಹ ಮಾತನ್ನು ನಿರೀಕ್ಷೆ ಮಾಡಿರಲಿಲ್ಲ. ಯಡಿಯೂರಪ್ಪ ಅವರು ಕೂಡ ರೈತ ಪರ ಹೋರಾಟ ಮಾಡಿಕೊಂಡೇ ಇಷ್ಟೊಂದು ಎತ್ತರಕ್ಕೆ ಬೆಳೆದವರು. ಪಕ್ಷ ಸಂಘಟನೆಗಾಗಿ ರಾಜ್ಯದ ಉದ್ದಗಲಕ್ಕೂ ಯಡಿಯೂರಪ್ಪ ಅವರು ಹೋರಾಟ ಮಾಡಿದ್ದಾರೆ. ಹಾಗಾಗಿಯೇ ಜನ ಯಡಿಯೂರಪ್ಪ ಅವರನ್ನು ನಾಯಕ ಎಂದು ಒಪ್ಪಿಕೊಂಡು ಈಗಲೂ ಗೌರವಿಸುತ್ತಾರೆ. ರೈತರ ಹೋರಾಟ ಪ್ರಾಯೋಜಿತ ಹೋರಾಟ ಎಂದಿರುವ ಬಸವರಾಜ ಬೊಮ್ಮಾಯಿ ಅವರು ಈ ಮೂಲಕ ಯಡಿಯೂರಪ್ಪ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಅವರು ದೂರಿದರು.

ಕಾಂಗ್ರೆಸ್ಸಿದ್ದರೆ ಜನ ಬೀದಿ ಹೆಣವಾಗುತ್ತಿದ್ದರು: ಬೊಮ್ಮಾಯಿ ವಾಗ್ಬಾಣ!

ಕಾಂಗ್ರೆಸ್‌ನವರು ಎತ್ತಿನ ಬಂಡಿ ಏರಿದರೆ, ಸೈಕಲ್‌ ತುಳಿದುಕೊಂಡು ಪ್ರತಿಭಟಿಸಿದರೆ ಟೀಕಿಸಲಾಗುತ್ತಿದೆ. ಹಾಗಾದರೆ ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಬಿಜೆಪಿಯವರೇನು ಎತ್ತಿನ ಗಾಡಿ ಏರಿ, ಸೈಕಲ್‌ ತುಳಿದುಕೊಂಡು ಪ್ರತಿಭಟನೆ ಮಾಡಿಲ್ಲವೇ ಎಂದು ಅವರು ಹರಿಹಾಯ್ದರು.

ಕರ್ನಾಟಕದಲ್ಲಿ ಜನ ಬದಲಾವಣೆಯ ನಿರೀಕ್ಷೆಯಲ್ಲಿದ್ದಾರೆ. ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬ ನಿರೀಕ್ಷೆ ಇದೆ. ಇದಕ್ಕೆ ಪಕ್ಷ ರಾಜ್ಯಾದ್ಯಂತ ಒಂದಿಲ್ಲೊಂದು ಕಾರ್ಯಕ್ರಮ ಮಾಡುತ್ತಿದೆ. ಸಿದ್ದರಾಮಯ್ಯನವರಿಂದ ಸದನದ ಒಳಗೆ ಮತ್ತು ಹೊರಗೆ ಸಾಮೂಹಿಕವಾಗಿ ಪಕ್ಷವನ್ನು ಸದೃಢಗೊಳಿಸುವ ಕೆಲಸ ಆಗುತ್ತಿದೆ. ಡಿ.ಕೆ. ಶಿವಕುಮಾರ್‌ ಪಕ್ಷದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಮೂಹಿಕವಾಗಿ ಪಕ್ಷದ ಸಂಘಟನೆ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಆರ್‌. ಧರ್ಮಸೇನ, ಮಾಜಿ ಶಾಸಕ ವಾಸು, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್‌, ನಗರಾಧ್ಯಕ್ಷ ಆರ್‌. ಮೂರ್ತಿ, ವಕೀಲ ಅಮರನಾಥ್‌ ಇದ್ದರು.

ಮೈಸೂರಿನಲ್ಲಿ ಇತ್ತೀಚೆಗೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ವರದಿ ಮಾಡಲು ಬಂದಿದ್ದ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿರುವುದು ಖಂಡನಿಯ. ಇದು ಅತ್ಯಂತ ಹೇಯ ಕೃತ್ಯವಾಗಿದೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕು.

- ಆರ್‌. ಧರ್ಮಸೇನ, ವಿಧಾನ ಪರಿಷತ್‌ ಸದಸ್ಯ

click me!