ಕೊರೋನಾ ಭೀತಿ: ಏರ್ಪೋರ್ಟ್‌ನಲ್ಲಿ 40 ಸಾವಿರ ಜನರ ತಪಾಸಣೆ

By Kannadaprabha NewsFirst Published Mar 4, 2020, 8:43 AM IST
Highlights

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈವರೆಗೂ 40 ಸಾವಿರ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಶಂಕಿತ 251 ಮಂದಿಯ ರಕ್ತ ಪರೀಕ್ಷೆ ಮಾಡಲಾಗಿದೆ. ಈವರೆಗೂ ಬಂದಿರುವ 243 ವರದಿಗಳಲ್ಲಿ ಯಾರಲ್ಲೂ ಸೋಂಕು ದೃಢಪಟ್ಟಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಬೆಂಗಳೂರು(ಮಾ.04): ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈವರೆಗೂ 40 ಸಾವಿರ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಶಂಕಿತ 251 ಮಂದಿಯ ರಕ್ತ ಪರೀಕ್ಷೆ ಮಾಡಲಾಗಿದೆ. ಈವರೆಗೂ ಬಂದಿರುವ 243 ವರದಿಗಳಲ್ಲಿ ಯಾರಲ್ಲೂ ಸೋಂಕು ದೃಢಪಟ್ಟಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಕೊರೋನಾ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ತೆಲಂಗಾಣದಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವ ವ್ಯಕ್ತಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರಿಂದಾಗಿ ಬೆಂಗಳೂರಿನಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

 

ರಾಜ್ಯದಲ್ಲಿ ಈವರೆಗೂ ಕೊರೋನಾ ಸೋಂಕು ದೃಢಪಟ್ಟಿಲ್ಲ. ಹೀಗಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯಾದ್ಯಂತ 630 ಪ್ರತ್ಯೇಕ ಹಾಸಿಗೆ, ಖಾಸಗಿ ಆಸ್ಪತ್ರೆಯಲ್ಲಿ 1,600 ಪ್ರತ್ಯೇಕ ಹಾಸಿಗೆ ವ್ಯವಸ್ಥೆಯ ವಿಶೇಷ ವಾರ್ಡ್‌ ವ್ಯವಸ್ಥೆ ಮಾಡಲಾಗಿದೆ. ರಾಜ್ಯದಲ್ಲಿ ಈವರೆಗೂ ಒಂದೂ ಕೊರೋನಾ ಸೋಂಕು ದೃಢಪಟ್ಟಿಲ್ಲ. ಹೀಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕೊರೋನಾ ವೈರಸ್‌ ರಾಜ್ಯಕ್ಕೆ ಪ್ರವೇಶಿಸದಂತೆ ಆರೋಗ್ಯ ಇಲಾಖೆ ವತಿಯಿಂದ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಥರ್ಮಲ್‌ ಸ್ಕಾ್ಯನರ್‌ ಮೂಲಕ ಹೊರಗಿನಿಂದ ಆಗಮಿಸುವವರನ್ನು ತಪಾಸಣೆ ಮಾಡಲಾಗುತ್ತಿದೆ ಎಂದಿದ್ದಾರೆ.

24 ಗಂಟೆಗಳೂ ಕೆಲಸ ಮಾಡಲು ಸಿದ್ಧ

ಜನರ ಆರೋಗ್ಯದ ದೃಷ್ಟಿಯಿಂದ ಕೊರೋನಾ ವೈರಸ್‌ ರಾಜ್ಯಕ್ಕೆ ಬಾರದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಾರೆ. ಸದ್ಯ ರಾಜ್ಯಕ್ಕೆ ಕೊರೋನಾ ಭೀತಿ ಇಲ್ಲ. ಮುಂದೆಯೂ ಬಾರದಂತೆ ತಡೆಯಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ 24 ಗಂಟೆಗಳೂ ಕೆಲಸ ಮಾಡಲಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದರು.

24 ತಾಸು ಸಹಾಯವಾಣಿ: ಸುಧಾಕರ್‌

ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆ ಸೂಚನೆಯಂತೆ ರಾಜ್ಯದಲ್ಲಿ ಕೊರೋನಾ ವೈರಸ್‌ ಬಗ್ಗೆ ಎಲ್ಲ ಬಗೆಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ನಿಯಮದ ಪ್ರಕಾರ ಶಂಕಿತರನ್ನು 14 ದಿನಗಳ ಕಾಲ ನಿಗಾ ವ್ಯವಸ್ಥೆಯಲ್ಲಿಡಬೇಕು. ಆದರೆ ಈ ಬಗ್ಗೆ ಹೆಚ್ಚಿನ ಕ್ರಮಗಳನ್ನು ವೈಹಿಸಿರುವ ಆರೋಗ್ಯ ಇಲಾಖೆ 28 ದಿನಗಳ ಕಾಲ ನಿಗಾದಲ್ಲಿರಿಸಿದೆ. ಸಾರ್ವಜನಿಕರಿಗೆ ಕೊರೋನಾ ವೈರಸ್‌ ಕುರಿತು ಅರಿವು ಮೂಡಿಸಲು ಎಲ್ಲೆಡೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ಜತೆಗೆ 24 ಗಂಟೆಗಳ ಸಹಾಯವಾಣಿಯನ್ನು ತೆರೆದು ಜನರಿಗೆ ಅಗತ್ಯ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು. 24/7 ಸಹಾಯವಾಣಿ - 104

ಇನ್ನೊಬ್ಬ ಶಂಕಿತ ಆಸ್ಪತ್ರೆಗೆ ದಾಖಲು

ಅಬುಧಾಬಿಯಿಂದ ಬಂದ ವ್ಯಕ್ತಿಯಲ್ಲಿ ಸೋಂಕಿನ ಲಕ್ಷಣ: ಮಂಗಳವಾರ ಅಬುಧಾಬಿಯಿಂದ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಸೋಂಕು ಲಕ್ಷಣಗಳು ಗೋಚರವಾಗಿರುವ ಹಿನ್ನೆಲೆಯಲ್ಲಿ ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆಗೆ ದಾಖಲಿಸಿ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಮೂಲಕ ಶಂಕಿತರ ತಾಪಸಣೆ ಹಾಗೂ ಸೋಂಕಿತರ ಚಿಕಿತ್ಸೆಗಾಗಿ ಬೆಂಗಳೂರಿನ ರಾಜೀವ್‌ ಗಾಂಧಿ ಎದೆ ರೋಗಗಳ ಆಸ್ಪತ್ರೆ ಪ್ರತ್ಯೇಕ ವಾರ್ಡ್‌ಗಳಲ್ಲಿ ಮೂರು ಮಂದಿ ದಾಖಲಾದಂತಾಗಿದೆ.

 

ಈ ಪೈಕಿ ತೆಲಂಗಾಣ ಮೂಲದ ಟೆಕ್ಕಿಯೊಂದಿಗೆ ಕೊಠಡಿ ಹಂಚಿಕೊಂಡಿದ್ದ ವ್ಯಕ್ತಿಯನ್ನು ಮಂಗಳವಾರ ಸಂಜೆಯೇ ವಾಪಸು ತನ್ನ ಕೊಠಡಿಗೆ ಕಳುಹಿಸಲಾಗಿದೆ. ಉಳಿದಂತೆ ಇರಾನ್‌ ಮೂಲದ ದಂತ ವೈದ್ಯಕೀಯ ವಿದ್ಯಾರ್ಥಿ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿಲ್ಲ. ಇರಾನ್‌ನಲ್ಲಿ ವಿದ್ಯಾರ್ಥಿಯ ತಾಯಿಗೆ ಸೋಂಕು ದೃಢಪಟ್ಟಿದೆ ಎಂಬ ಕಾರಣಕ್ಕೆ ಸ್ವತಃ ಆಗಮಿಸಿ ಆಸ್ಪತ್ರೆಗೆ ದಾಖಲಾಗಿದ್ದ ಆದರೆ ಪರೀಕ್ಷೆಯಲ್ಲಿ ಸೋಂಕು ಇಲ್ಲದಿರುವುದು ದೃಢಪಟ್ಟಿದೆ. ಆದರೂ, ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಯಲ್ಲೇ ಉಳಿಸಿಕೊಳ್ಳಲಾಗಿದೆ ಎಂದು ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆಯ ನಿರ್ದೇಶಕ ಡಾ.ಸಿ. ನಾಗಾಜು ಹೇಳಿದ್ದಾರೆ.

click me!