
ಬೆಳಗಾವಿ(ಏ.10): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೇರಿ ಬೇಡವೆಂದರೂ ಸತೀಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಕಣಕ್ಕಿಳಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ.
ಮೂಡಲಗಿ ತಾಲೂಕಿನ ನಾಗನೂರು ಪಟ್ಟಣದ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಬೆಳಗಾವಿ ಲೋಕಸಭೆ ಉಪಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ ಅಂಗಡಿ ಪ್ರಚಾರಾರ್ಥವಾಗಿ ನಡೆದ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಕ್ಷುಲ್ಲಕ ರಾಜಕೀಯ ಮಾಡುತ್ತಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಎಷ್ಟೇ ಅಪಪ್ರಚಾರ ಮಾಡಿದರೂ ಅವರ ಆಟ ಬಿಜೆಪಿ ಮುಂದೆ ನಡೆಯುವುದಿಲ್ಲ. ಮಂಗಲ ಅಂಗಡಿಯವರು ಈ ಚುನಾವಣೆಯಲ್ಲಿ ಭಾರೀ ಮತಗಳ ಮುನ್ನಡೆಯೊಂದಿಗೆ ಆಯ್ಕೆಯಾಗಲಿದ್ದಾರೆ. ಗೋಕಾಕ ಮತ್ತು ಅರಭಾವಿ ಮತಕ್ಷೇತ್ರಗಳಲ್ಲಿ ಅವರಿಗೆ ಭಾರೀ ಮುನ್ನಡೆ ದೊರಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
'ಮೋದಿಗೆ ಸುಳ್ಳಿನ ನೋಬೆಲ್ ಪ್ರಶಸ್ತಿ ನೀಡಬೇಕು'
ದಿ.ಸುರೇಶ ಅಂಗಡಿಯವರು 16 ತಿಂಗಳು ಕೇಂದ್ರ ಸಚಿವರಾಗಿದ್ದ ಸಂದರ್ಭದಲ್ಲಿ ಕರ್ನಾಟಕಕ್ಕೆ ಬಹು ದೊಡ್ಡ ಕಾಣಿಕೆ ನೀಡಿದ್ದಾರೆ. 19 ಸಾವಿರ ಕೋಟಿ ಅನುದಾನವನ್ನು ಕರ್ನಾಟಕಕ್ಕೆ ತಂದಿದ್ದಾರೆ. ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯದೊತ್ತಡದಿಂದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಆದರೆ, ಎಲ್ಲ ಬಿಜೆಪಿ ನಾಯಕರೊಂದಿಗೆ ಅವರು ನಿರಂತರ ಸಂಪರ್ಕದಲ್ಲಿದ್ದಾರೆ. ಜೊತೆಗೆ ನನ್ನೊಂದಿಗೂ ಮಾತನಾಡಿದ್ದಾರೆ. ಕಳೆದ ಲೋಕಸಭಾ ಚುನಾವಣೆಗಿಂತ ಈ ಉಪಚುನಾವಣೆಯಲ್ಲಿ ಅತ್ಯಧಿಕ ಮತಗಳ ಮುನ್ನಡೆ ದೊರಕಿಸಿ ಕೊಡುವ ವಾಗ್ದಾನ ನೀಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.