
ದಕ್ಷಿಣ ಕನ್ನಡ (ಜು.17): ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 18, 2026) ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ 'ಆರೆಂಜ್ ಅಲರ್ಟ್' ಘೋಷಿಸಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಈ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದನ್ವಯ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿಪೂರ್ವ (ಪಿಯುಸಿ) ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜುಲೈ 17 ಮತ್ತು 18ರಂದು ಕರಾವಳಿಯಾದ್ಯಂತ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರಿನ ಹವಾಮಾನ ಕೇಂದ್ರದ ವರದಿಯ ಪ್ರಕಾರ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಕರಾವಳಿ ಮತ್ತು ಒಳನಾಡಿನಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ಜುಲೈ 17ರಂದು ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಮಳೆಯ ಜೊತೆಗೆ ಕರಾವಳಿ ಮತ್ತು ಘಟ್ಟ ಪ್ರದೇಶದ ಜಿಲ್ಲೆಗಳಲ್ಲಿ ಜುಲೈ 17 ಮತ್ತು 18ರಂದು ಭೂಕುಸಿತ ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಆದ್ದರಿಂದ ಘಟ್ಟ ಪ್ರದೇಶದ ರಸ್ತೆಗಳಲ್ಲಿ ಸಂಚರಿಸುವಾಗ ಸಾರ್ವಜನಿಕರು ಹೆಚ್ಚಿನ ಜಾಗರೂಕತೆ ವಹಿಸಬೇಕೆಂದು ಸೂಚಿಸಲಾಗಿದೆ.
ಕರಾವಳಿ ಮಾತ್ರವಲ್ಲದೆ, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಜುಲೈ 17ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾಸನ ಮತ್ತು ಕೊಡಗು ಜಿಲ್ಲೆಗಳಿಗೂ ಮಳೆಯ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ 40 ರಿಂದ 50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.
ಸಾರ್ವಜನಿಕರಿಗೆ ಜಿಲ್ಲಾಡಳಿತದ ಸೂಚನೆಗಳು:
ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.
ನದಿ ತೀರ, ಸಮುದ್ರ ತೀರ ಹಾಗೂ ಹಳ್ಳಕೊಳ್ಳಗಳ ಹತ್ತಿರ ಸಾರ್ವಜನಿಕರು ಮತ್ತು ಪ್ರವಾಸಿಗರು ತೆರಳದಂತೆ ನಿರ್ಬಂಧ ವಿಧಿಸಲಾಗಿದೆ.
ಗಾಳಿಯ ವೇಗ ಹೆಚ್ಚಿರುವುದರಿಂದ ದುರ್ಬಲ ಕಟ್ಟಡಗಳು ಅಥವಾ ಹಳೆಯ ಮರಗಳ ಕೆಳಗೆ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ.
ವಿದ್ಯುತ್ ತಂತಿಗಳು ತುಂಡಾಗಿ ಬಿದ್ದಿರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು.
ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ಸಾರ್ವಜನಿಕರು ಕೂಡಲೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಸಹಾಯವಾಣಿಯನ್ನು ಸಂಪರ್ಕಿಸಲು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.