ಅನಧಿಕೃತ ಕಟ್ಟಡಗಳ ತೆರವು, ಅತಿಕ್ರಮಣದಾರರಿಗೆ ನೋಟಿಸ್‌

By Kannadaprabha NewsFirst Published Sep 20, 2019, 12:42 PM IST
Highlights

ಹುಬ್ಬಳ್ಳಿ-ಧಾರವಾಡ ಅವಳಿನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳ, ರಸ್ತೆ ಒತ್ತುವರಿ ಮಾಡಿ ನಿರ್ಮಿಸಿಕೊಂಡಿರುವ ಧಾರ್ಮಿಕ ಸ್ಥಳಗಳು ಸೇರಿದಂತೆ ಎಲ್ಲ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ನೋಟಿಸ್‌ ಜಾರಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. 

ಧಾರವಾಡ [ಸೆ.20]:   ಹುಬ್ಬಳ್ಳಿ-ಧಾರವಾಡ ಅವಳಿನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳ, ರಸ್ತೆ ಒತ್ತುವರಿ ಮಾಡಿ ನಿರ್ಮಿಸಿಕೊಂಡಿರುವ ಧಾರ್ಮಿಕ ಸ್ಥಳಗಳು ಸೇರಿದಂತೆ ಎಲ್ಲ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ನೋಟಿಸ್‌ ಜಾರಿ ಮಾಡಲಾಗುವುದು. ಹತ್ತು ದಿನಗಳೊಳಗೆ ತೆರವು ಕಾರ್ಯಾಚರಣೆ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಆಸ್ತಿಗಳ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಜಿಲ್ಲಾಡಳಿತ, ಪೊಲೀಸ್‌ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುವುದು. ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ, ಬಿಆರ್‌ಟಿಎಸ್‌ ರಸ್ತೆಗಳು ಹಾಗೂ ಮಹಾನಗರ ಪಾಲಿಕೆಯ ಆಸ್ತಿಗಳ ಒತ್ತುವರಿ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ಕಾಲಮಿತಿಯಲ್ಲಿ ಒತ್ತುವರಿದಾರರಿಗೆ ತೆರವುಗೊಳಿಸಲು ಸೂಚನೆ ನೀಡಲಾಗುವುದು. ಅವರು ತೆರವುಗೊಳ್ಳದಿದ್ದರೆ ಪೊಲೀಸ್‌ ರಕ್ಷಣೆಯೊಂದಿಗೆ ತೆಗೆದು ಹಾಕಲಾಗುವುದು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸರ್ಕಾರಕ್ಕೆ ಸೇರಿರುವ ಸ್ಥಳ, ನಿವೇಶನ, ರಸ್ತೆ ಅತಿಕ್ರಮಣಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ವಾಹನ ನಿಲುಗಡೆ ಸ್ಥಳಗಳನ್ನು ಹಾಗೂ ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರಿಗೆ ಮೀಸಲಿಡುವುದು ಅಗತ್ಯವಾಗಿದೆ. ಮೊದಲ ಆದ್ಯತೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ಸ್ಥಳಗಳನ್ನು ಸಾರ್ವಜನಿಕರಿಗೆ ಒದಗಿಸಲು ಒತ್ತು ನೀಡಲಾಗುವುದು. ಒತ್ತುವರಿಯಾಗಿರುವ ಎಲ್ಲ ಜಾತಿ, ಧರ್ಮಗಳ ಧಾರ್ಮಿಕ ಸ್ಥಳಗಳನ್ನು ಕೂಡಾ ತೆರವುಗೊಳಿಸಲಾಗುವುದು. ಹಿರಿಯ ಅಧಿಕಾರಿಗಳನ್ನೊಳಗೊಂಡ ಸಮಿತಿಯು ಧಾರ್ಮಿಕ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಸೂಚನೆ ನೀಡಲಿದೆ. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಕಾರ್ಯಾಚರಣೆ ಕೈಗೊಳ್ಳಲಾಗುವುದು. ಸಾರ್ವಜನಿಕರು ಜಿಲ್ಲೆಯ ಮತ್ತು ಅವಳಿ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.

ಮಹಾನಗರ ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌ ಮಾತನಾಡಿ, ಸಾರ್ವಜನಿಕ ಆಸ್ತಿಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಪೊಲೀಸ್‌ ಇಲಾಖೆಯು ಎಲ್ಲ ರೀತಿಯ ಸಹಾಯ ನೀಡಲಿದೆ. ಯಾವುದೇ ವೈಯಕ್ತಿಕ ಹಿತಾಸಕ್ತಿ ಇಲ್ಲದೇ ಈ ಕಾರ್ಯಾಚರಣೆ ನಡೆಯಲಿದೆ. ಸರ್ಕಾರದ ಆಸ್ತಿಗಳ ರಕ್ಷಣೆ ಹಾಗೂ ಕಾನೂನು, ಸುವ್ಯವಸ್ಥೆ ಕಾಪಾಡಲು ಅಗತ್ಯ ಸಹಕಾರವನ್ನು ಪೊಲೀಸ್‌ರು ನೀಡಲಿದ್ದಾರೆ ಎಂದರು.

ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌ ಮಾತನಾಡಿ, ಸಾರ್ವಜನಿಕ ಸಾರಿಗೆ ಸುಗಮ ಸಂಚಾರಕ್ಕೆ ವ್ಯತ್ಯಯವಾಗಲು ಕೆಲವೆಡೆ ಬಸ್‌ ನಿಲ್ದಾಣಗಳು, ವಾಹನ ನಿಲುಗಡೆ ಸ್ಥಳಗಳು ಅತಿಕ್ರಮಣವಾಗಿರುವುದನ್ನು ಗುರುತಿಸಲಾಗಿದೆ. ಅವುಗಳನ್ನು ಕೂಡಾ ತೆರವುಗೊಳಿಸಲಾಗುವುದು ಎಂದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ್‌, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಉಪ ವಿಭಾಗಾಧಿಕಾರಿ ಮಹ್ಮದ ಜುಬೇರ್‌, ಡಿಸಿಪಿ ಡಾ. ಶಿವಕುಮಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿನಾಯಕ ಪಾಲನಕರ, ಲೋಕೋಪಯೋಗಿ ಕಾರ್ಯನಿರ್ವಾಹಕ ಎಂಜಿನಿಯರ್‌ ವಿರೂಪಾಕ್ಷಪ್ಪ ಯಮಕನಮರಡಿ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಮಠದ, ಕೆಐಎಡಿಬಿ ಅಭಿವೃದ್ಧಿ ಅಧಿಕಾರಿ ಮನೋಹರ ವಡ್ಡರ, ಬಿಆರ್‌ಟಿಎಸ್‌ ಉಪ ಪ್ರಧಾನ ವ್ಯವಸ್ಥಾಪಕ ಬಸವರಾಜ ಸೇರಿದಂತೆ ಮತ್ತಿತರು ಇದ್ದರು.

click me!