ಹಂಪಿ ಉತ್ಸವ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕರ್ಷಿಸಲಿ ಎಂದ ಡಿಸಿಎಂ ಸವದಿ| ಬೆಂಗಳೂರಿನಲ್ಲಿ ಹಂಪಿ ಉತ್ಸವದ ಭಿತ್ತಿಚಿತ್ರಗಳ ಬಿಡುಗಡೆ| ಹೊರ ರಾಜ್ಯದ ಕಲಾವಿದರು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಲಾವಿದರಿಗೆ ಅವಕಾಶ| ಸ್ಥಳೀಯ ಕಲಾವಿದರಿಗೂ ಹೆಚ್ಚಿನ ಆದ್ಯತೆ ನೀಡುವಂತೆ ಮತ್ತು ವೈವಿಧ್ಯಪೂರ್ಣವಾಗಿ ಆಚರಿಸಲು ಕ್ರಮ|
ಬಳ್ಳಾರಿ(ಡಿ.18): ಮುಂಬರುವ ಜನವರಿ 10 ಮತ್ತು 11 ರಂದು ನಡೆಯಲಿರುವ ಹಂಪಿ ಉತ್ಸವ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ರೀತಿಯಲ್ಲಿ ಆಯೋಜಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರಿನ ಕುಮಾರಕೃಪ ಅತಿಥಿಗೃಹದಲ್ಲಿ ಹಂಪಿ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಬಾರಿಯ ಹಂಪಿ ಉತ್ಸವ ವಿಜಯ ನಗರದ ಅರಸ ಶ್ರೀಕೃಷ್ಣದೇವರಾಯ ಅವರ ಪಟ್ಟಾಭಿ ಷೇಕದ ದಿನವಾದ ಜನವರಿ 10 ರಂದು ಹಮ್ಮಿಕೊಳ್ಳಲಾಗಿದೆ. ವಿಜಯನಗರ ಸಾಮ್ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆ ಬಿಂಬಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಹೇಳಿದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಹೊರ ರಾಜ್ಯದ ಕಲಾವಿದರು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಲಾವಿದರಿಗೆ ಅವಕಾಶ ನೀಡುವ ಜೊತೆಯಲ್ಲಿ ಸ್ಥಳೀಯ ಕಲಾವಿದರಿಗೂ ಹೆಚ್ಚಿನ ಆದ್ಯತೆ ನೀಡುವಂತೆ ಮತ್ತು ವೈವಿಧ್ಯಪೂರ್ಣವಾಗಿ ಆಚರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಜನವರಿ 10 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಂಪಿ ಉತ್ಸವ ಉದ್ಭಾಟಿಸಲಿದ್ದು, ಜನವರಿ 11 ರ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವರನ್ನು ಆಹ್ವಾನಿಸಲಾಗುವುದು ಎಂದರು.
ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಸಕ್ಕರೆ ಖಾತೆ ಸಚಿವ ಸಿ.ಟಿ. ರವಿ ಮಾತನಾಡಿ, ಮಹಿಳಾ ಸ್ವ-ಸಹಾಯ ಸಂಘಗಳನ್ನು ಬಳಸಿಕೊಳ್ಳುವಂತೆ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಬಹುದಾದ ಕಾರ್ಯ ಕ್ರಮಗಳ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ವೈಭವದಿಂದ ಹಮ್ಮಿಕೊಳ್ಳಲು ಅಗತ್ಯವಿರುವ ಅನುದಾನಕ್ಕಾಗಿ ಸಿಎಂಗೆ ಮನವಿ ಮಾಡುವುದಾಗಿ ತಿಳಿಸಿದರು.
ಸಭೆಯಲ್ಲಿ ಹಂಪಿ ಉತ್ಸವ ಕುರಿತ ಪ್ರಚಾರದ ಭಿತ್ತಿ ಚಿತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಈ ವೇಳೆ ಸಂಸದ ವೈ. ದೇವೇಂದ್ರಪ್ಪ, ಶಾಸಕರಾದ ಆನಂದ್‌ಸಿಂಗ್, ನಾಗೇಂದ್ರ, ಎಂಎಲ್‌ಸಿ ಕೆ.ಸಿ. ಕೊಂಡಯ್ಯ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿ ಎಸ್. ಎಸ್. ನಕುಲ್, ಅಪರ ಜಿಲ್ಲಾಧಿಕಾರಿ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.