ಕಳಪೆ ಮೊಟ್ಟೆ, ಬಾಳೆಹಣ್ಣು ಕೊಟ್ಟರೆ ಶಿಸ್ತು ಕ್ರಮ: ಶಾಸಕ ತಿಪ್ಪಾರೆಡ್ಡಿ ಎಚ್ಚರಿಕೆ

By Govindaraj SFirst Published Aug 3, 2022, 5:15 PM IST
Highlights

ಮಕ್ಕಳಲ್ಲಿರುವ ಅಪೌಷ್ಟಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ಪೂರಕ ಪೌಷ್ಟಿಕ ಆಹಾರ ಒದಗಿಸುವುದು ಬಹಳ ಮುಖ್ಯವಾಗಿದೆ. ಮಕ್ಕಳಿಗೆ ಕಳಪೆ ಮೊಟ್ಟೆ ಹಾಗೂ ಬಾಳೆ ಹಣ್ಣು ಕೊಟ್ಟರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಹೆಚ್‌.ತಿಪ್ಪಾರೆಡ್ಡಿ ಹೇಳಿದರು. 

ಚಿತ್ರದುರ್ಗ (ಆ.03): ಮಕ್ಕಳಲ್ಲಿರುವ ಅಪೌಷ್ಟಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ಪೂರಕ ಪೌಷ್ಟಿಕ ಆಹಾರ ಒದಗಿಸುವುದು ಬಹಳ ಮುಖ್ಯವಾಗಿದೆ. ಮಕ್ಕಳಿಗೆ ಕಳಪೆ ಮೊಟ್ಟೆ ಹಾಗೂ ಬಾಳೆ ಹಣ್ಣು ಕೊಟ್ಟರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಹೆಚ್‌.ತಿಪ್ಪಾರೆಡ್ಡಿ ಹೇಳಿದರು. ನಗರದ ಐಯುಡಿಪಿ ಲೇಔಟ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌ ಯೋಜನೆಯಡಿ 1 ರಿಂದ 7ನೇ ತರಗತಿ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾಚಿಕ್ಕಿ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪೌಷ್ಟಿಕ ಆಹಾರದ ವಿಚಾರದಲ್ಲಿ ಉದಾಸೀನ ತೋರಬಾರದು ಎಂದರು.

ಪೌಷ್ಟಿಕ ಆಹಾರಕ್ಕೆ ಉತ್ತಮ ಬೆಳವಣಿಗೆ: ಶಾಲಾ ಮಕ್ಕಳು ಪೌಷ್ಟಿಕಾಂಶದ ಕೊರತೆಯಿಂದ ಅನಾರೋಗ್ಯಕ್ಕೆ ತುತ್ತಾಗಬಾರದು. ಮಕ್ಕಳು ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿರಬೇಕು ಎಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರಗಳಾದ ಮೊಟ್ಟೆ, ಬಾಳೆಹಣ್ಣು ಹಾಗೂ ಶೇಂಗಾಚಿಕ್ಕಿ ವಿತರಣೆ ಮಾಡಲಾಗುತ್ತಿದೆ. ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು, ಶೇಂಗಾಚಿಕ್ಕಿಯನ್ನು ವಿತರಿಸಲಾಗುತ್ತಿದ್ದು, ಇದರಿಂದ ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

Chitradurga: ರಾಹುಲ್ ಗಾಂಧಿಗೆ ಸಲಹೆ ನೀಡಿದ ಹಿರಿಯೂರಿನ ಷಡಕ್ಷರಮುನಿ ಸ್ವಾಮೀಜಿ

ಗುಣಮಟ್ಟದಿಂದ ಕೂಡಿರಬೇಕು: ಪ್ರಧಾನಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌ ಯೋಜನೆಯಡಿ ವಿತರಣೆ ಮಾಡುವ ಪೂರಕ ಪೌಷ್ಟಿಕ ಆಹಾರ ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಯಾವುದೇ ಕಾರಣಕ್ಕೂ ಕಾಟಾಚಾರಕ್ಕೆ, ಕಳಪೆ ಗುಣಮಟ್ಟದ ಮೊಟ್ಟೆಗಳನ್ನು ವಿತರಿಸಬಾರದು. ಇದರಿಂದ ಮಕ್ಕಳ ಆರೋಗ್ಯಕ್ಕೆ ತೊಂದರೆಯಾಗಲಿದೆ. ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗಳಿಗೆ ದಾಖಲಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಶಾಲಾ ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಭಾವಿಸಿ, ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಬೇಕು. ಜೊತೆಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಾಕೀತು ಮಾಡಿದರು.

120 ಕೋಟಿ ರು. ಪ್ರಸ್ತಾವನೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್‌ ರೆಡ್ಡಿ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಶಾಸಕರು ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಸುಮಾರು ರು.30 ಕೋಟಿ ಅನುದಾನವನ್ನು ಪ್ರಾಥಮಿಕ ಶಾಲೆಗಳಿಗೆ ನೀಡಿದ್ದಾರೆ. ಕೆಎಂಇಆರ್‌ಸಿ ಯೋಜನೆಯಡಿ ಶಿಕ್ಷಣಕ್ಕಾಗಿ 120 ಕೋಟಿ ರು. ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಕ್ರಿಯಾ ಯೋಜನೆಯಿಂದ ಶಿಕ್ಷಣ ಇಲಾಖೆ ಕ್ರಾಂತಿಕಾರಿ ಬದಲಾವಣೆ ಕಾಣಲಿದೆ ಎಂದು ಹೇಳಿದರು.

Chitradurga: ಮುರುಘಾ ಶರಣರಿಂದ ದೀಕ್ಷೆ ಪಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ!

ಚಿತ್ರದುರ್ಗ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹುಲಿಕುಂಟರಾಯಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಸಂಪತ್‌ ಕುಮಾರ್‌, ಐಯುಡಿಪಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಗೌಸ್‌ ಫಯಾಜ್‌ ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಇದ್ದರು.

click me!