ಜನರ ಸಮಸ್ಯೆಗಳನ್ನು ಅರಿತುಕೊಂಡು ಅವುಗಳನ್ನು ಪರಿಹರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ(ಜೂ.08): ಸ್ಮಾರ್ಟ್ ಸಿಟಿ ಯೋಜನೆಯ ಸಮರ್ಪಕ ಅನುಷ್ಠಾನ; ಕುಡಿಯುವ ನೀರು ಸರಬರಾಜು; ಆರೋಗ್ಯ ಸೌಲಭ್ಯ, ಕಸ ವಿಲೇವಾರಿ; ಸ್ಮಶಾನ ಅಭಿವೃದ್ಧಿ, ಮೂಲಸೌಕರ್ಯ ಒದಗಿಸುವುದು ಸೇರಿದಂತೆ ಎಲ್ಲ ಕೆಲಸಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವುದು ಎಲ್ಲ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಸೂಚನೆ ನೀಡಿದರು.
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬುಧವಾರ ನಡೆದ ಸ್ಮಾರ್ಟ ಸಿಟಿ, ಕುಡಿಯುವ ನೀರು ಸರಬರಾಜು, ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನರ ಸಮಸ್ಯೆಗಳನ್ನು ಅರಿತುಕೊಂಡು ಅವುಗಳನ್ನು ಪರಿಹರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸ್ಮಾರ್ಟ ಸಿಟಿ, ಹೆಸ್ಕಾಂ ಸೇರಿದಂತೆ ಪ್ರಮುಖ ಇಲಾಖೆಯ ಪ್ರತ್ಯೇಕವಾದ ಸಭೆ ನಡೆಸಲಾಗುವುದು. ಅಧಿಕಾರಿಗಳಿಗೆ ಸ್ವಲ್ಪಮಟ್ಟಿಗೆ ಸಮಯ ನೀಡಲಾಗುವುದು. ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಬೇಕು. ಮಹಾನಗರ ಪಾಲಿಕೆಯ ಸದಸ್ಯರು ತಿಳಿಸಿದ ಕೆಲಸಗಳನ್ನು ಆದ್ಯತೆ ಮೇರೆಗೆ ಮಾಡಬೇಕು ಎಂದರು.
undefined
ಕೊಲ್ಲಾಪುರ ಹಿಂಸಾಚಾರ: ಬೆಳಗಾವಿ ಗಡಿಯಲ್ಲಿ ಕಟ್ಟೆಚ್ಚರ
ಶಾಹು ಮಹಾರಾಜರ ಪುತ್ಥಳಿ ಸ್ಥಾಪನೆಗೆ ಸೂಚನೆ:
ಬೆಳಗಾವಿ ನಗರದಲ್ಲಿ ಶಾಹು ಮಹಾರಾಜರ ಪುತ್ಥಳಿ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ನೀಡಲಾಗಿದೆ. ಪುತ್ಥಳಿ ನಿರ್ಮಾಣ ಕೆಲಸ ತಕ್ಷಣವೇ ಆಗಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು. ಕ್ರೀಡಾಸಂಕೀರ್ಣ, ಈಜುಕೊಳ ಮತ್ತಿತರ ಕಾಮಗಾರಿಗಳು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಿ ಜನರ ಬಳಕೆಗೆ ಮುಕ್ತಗೊಳಿಸಬೇಕು. ಸಭೆಯಲ್ಲಿ ಜನರು ಸಲ್ಲಿಸಿದ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಿ ಅವುಗಳನ್ನು ಪರಿಹರಿಸಬೇಕು. ಉತ್ತಮ ಸಲಹೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ಸೂಚನೆ ನೀಡಿದರು.
ಬೆಳಗಾವಿ ನಗರ ಪ್ರವೇಶಿಸುವ ಮಾರ್ಗದಲ್ಲಿ ಕಸದ ರಾಶಿ ಕಂಡುಬರುತ್ತಿದ್ದು, ಇದನ್ನು ನಿಯಮಿತವಾಗಿ ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕು. ವ್ಯಾಪಾರಸ್ಥರು, ಅಂಗಡಿಕಾರರು ರಾತ್ರಿ ವೇಳೆ ನಿಗದಿತ ಸ್ಥಳ ಹೊರತುಪಡಿಸಿ ಇತರೆಡೆ ಕಸ ಎಸೆದರೆ ಅಂತಹವರ ಮೇಲೆ ನಿಗಾವಹಿಸಿ ದಂಡ ವಿಧಿಸಬೇಕು ಎಂದು ಸೂಚನೆ ನೀಡಿದರು.
ಹಿಂದೆ ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿ ವಂತಿಕೆಯನ್ನು ತುಂಬಿದ ಫಲಾನುಭವಿಗಳು ಈಗ ಕಾರಣಾಂತರದಿಂದ ವಸತಿ ಸೌಲಭ್ಯ ಬೇಡ ಎಂದು ವಂತಿಕೆ ಹಣ ಹಿಂದಿರುಗಿಸುವಂತೆ ಕೋರಿ ಅರ್ಜಿ ಸಲ್ಲಿಸಿದರೆ ಅಂತವರಿಗೆ ವಂತಿಗೆ ಹಣ ಹಿಂದಿರುಗಿಸಲು ಒಂದು ತಿಂಗಳಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಜಾರಕಿಹೊಳಿ ಹೇಳಿದರು.
ಕಾಕತಿ ಕೆಲವು ಭಾಗವು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಬರುತ್ತಿದ್ದು, ತೆರಿಗೆ ಕಟ್ಟಿದರೂ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡದಿರುವ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದ ಅವರು, ಈ ಸಮಸ್ಯೆ ಪರಿಹಾರ ಕಂಡುಹಿಡಿಯಬೇಕು. ಅಕ್ರಮ-ಸಕ್ರಮ ಯೋಜನೆಯಡಿ ಅವಕಾಶಗಳಿದ್ದರೆ ಪರಿಶೀಲಿಸುವಂತೆ ಹೇಳಿದರು.
ವಾರ್ಡ್ ಸಮಿತಿಗಳನ್ನು ರಚಿಸಲು ಸೂಚನೆ: ವಾರ್ಡ ಸಮಿತಿಗಳು ಇನ್ನೂ ರಚನೆಯಾಗದಿರುವ ಕುರಿತು ಮಾಹಿತಿಯನ್ನು ಪಡೆದುಕೊಂಡ ಅವರು, ಮುಂದಿನ ಒಂದು ತಿಂಗಳಿನಲ್ಲಿ ವಾರ್ಡ ಸಮಿತಿ ರಚಿಸುವಂತೆ ತಿಳಿಸಿದರು.
ಬೆಳಗಾವಿ ನಗರದಲ್ಲಿ ನಿರಂತರ ನೀರು ಸರಬರಾಜು ಮಾಡುವ ಯೋಜನೆಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಸಭೆ ನಡೆಸಿ ಕಾಮಗಾರಿಗಳನ್ನು ಚುರುಕುಗೊಳಿಸಲು ಹಾಗೂ ಸಮರ್ಪಕವಾಗಿ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಪೌರಕಾರ್ಮಿಕರ ಆಯ್ಕೆಯ ಪಟ್ಟಿಸಿದ್ಧವಾಗಿದ್ದರೆ ಕೂಡಲೇ ನೇಮಕಾತಿ ಆದೇಶ ನೀಡಬೇಕು ಎಂದು ಪಾಲಿಕೆಯ ಆಯುಕ್ತರಿಗೆ ಸೂಚನೆ ನೀಡಿದರು. 155 ಪೌರಕಾರ್ಮಿಕರ ನೇಮಕಾತಿ ಆದೇಶವನ್ನು ಒಂದೇ ಹಂತದಲ್ಲಿ ನೀಡಲಾಗುವುದು ಎಂದು ತಿಳಿಸಿದರು.
ಕೆಲವು ಕಡೆಗಳಲ್ಲಿ ಹೊಸ ಬಡಾವಣೆ ನಿರ್ಮಾಣ ಮಾಡುವಾಗ ಕೇವಲ ಹತ್ತು ಅಡಿ ರಸ್ತೆ ಮಾಡಲಾಗುತ್ತಿದ್ದು, ಇದರಿಂದ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಪರಿಶೀಲಿಸುವಂತೆ ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅನುಕೂಲವಾಗುವಂತೆ ನಗರದಲ್ಲಿ ಇರುವ ಎಲ್ಲ ಕೊಳವೆ ಬಾವಿಗಳನ್ನು ಪುನರುಜ್ಜೀವನಗೊಳಿಸಬೇಕು; ಅಗತ್ಯವಿದ್ದರೆ ದುರಸ್ತಿಗೊಳಿಸಬೇಕು. ಶುದ್ಧೀಕರಿಸಿದ ಕುಡಿಯುವ ನೀರು ಪೂರೈಸಬೇಕು ಎಂದು ತಿಳಿಸಿದರು.
ಬೀದಿನಾಯಿಗಳ ನಿಯಂತ್ರಣಕ್ಕೆ ನಿಯಮಾವಳಿ ಪ್ರಕಾರ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕು. ನಗರ ವೇಗವಾಗಿ ಬೆಳೆಯುತ್ತಿರುವುದರಿಂದ ಕಸ ವಿಲೇವಾರಿ ಘಟಕಗಳನ್ನು ಸ್ಥಾಪಿಸುವ ಅಗತ್ಯವಿದೆ. ನಾಲ್ಕೂ ದಿಕ್ಕುಗಳಲ್ಲಿ ಒಂದೊಂದು ಘಟಕಗಳನ್ನು ಸ್ಥಾಪಿಸುವ ಬಗ್ಗೆ ಗಂಭೀರವಾಗಿ ಪ್ರಯತ್ನಿಸಬೇಕು ಎಂದು ಸೂಚನೆ ನೀಡಿದರು.
ನಗರದಲ್ಲಿ ಎಲ್ಲ ಕಡೆಯೂ ಎಲ್‌ಇಡಿ ದೀಪಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕು. ಕೆಲವು ಕಡೆಗಳಲ್ಲಿ ಕಡಿಮೆ ಸಾಮರ್ಥ್ಯದ ದೀಪ ಅಳವಡಿಸಿರುವುದರಿಂದ ಸಮರ್ಪಕವಾಗಿ ಬೆಳಕು ದೊರಕುತ್ತಿಲ್ಲ. ಸಾಮರ್ಥ್ಯವನ್ನು ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಂದ ಜನತೆಗೆ ಅನುಕೂಲ: ಲಕ್ಷ್ಮಣ ಸವದಿ
ಮಹಾಪೌರರಾದ ಶೋಭಾ ಸೋಮನಾಚೆ, ಉಪ ಮಹಾಪೌರರಾದ ರೇಷ್ಮಾ ಪಾಟೀಲ, ವಿಧಾನ ಪರಿಷತ ಸದಸ್ಯ ಸಾಬಣ್ಣ ತಳವಾರ, ಕೆಯುಐಡಿಎಫ್‌ಸಿ ಜಂಟಿ ನಿರ್ದೇಶಕಿ ಪದ್ಮಾ ಮತ್ತಿತರರು ಉಪಸ್ಥಿತರಿದ್ದರು.
ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ, ಕೆಯುಐಡಿಎಫ್‌ಸಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ಸಲಹೆಗಳನ್ನು ನೀಡಿದರು. ಅಹವಾಲುಗಳನ್ನು ಕೂಡ ಸಲ್ಲಿಸಿದರು. ಸಭೆಯ ಬಳಿಕ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೇ ಹೆಬ್ಬಾಳಕರ ಅವರನ್ನು ಮಹಾನಗರ ಪಾಲಿಕೆಯ ವತಿಯಿಂದ ಮಹಾಪೌರರು ಮತ್ತು ಉಪ ಮಹಾಪೌರರು ಸನ್ಮಾನಿಸಿದರು.