
ಚಿಕ್ಕಬಳ್ಳಾಪುರ: ಎಐಸಿಸಿ ವೀಕ್ಷಕಿ ದೀಪ್ತಿ ಮೇರಿ ವರ್ಗೀಸ್ ನೇತೃತ್ವದಲ್ಲಿ ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ಸಂಜೆ ನಡೆದ ಕಾಂಗ್ರೆಸ್ ಸಭೆಯಲ್ಲಿ ಗೊಂದಲ ಮತ್ತು ಗಲಾಟೆ ನಡೆಸಿದ ಆರೋಪದ ಮೇಲೆ ಪಕ್ಷದಿಂದ ಉಚ್ಚಾಟಿತರಾಗಿದ್ದ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮುದಾಸೀರ್ ದಾವೂದ್ ಅವರ ಉಚ್ಚಾಟನೆ ಆದೇಶವನ್ನು ಇಂದು ಬೆಳಗ್ಗೆ ವಾಪಸ್ ಪಡೆಯಲಾಗಿದೆ.
ಸಂವಹನ ವ್ಯತ್ಯಾಸದಿಂದ ಉಚ್ಚಾಟನೆ ಆದೇಶವಾಗಿತ್ತು, ಕೆಪಿಸಿಸಿ ಅಧ್ಯಕ್ಷರ ಸೂಚನೆಗೆ ಮೇರೆಗೆ ಉಚ್ಚಾಟನೆ ಆದೇಶ ರದ್ದುಪಡಿಸಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಎಂ.ನಾರಾಯಣ ಸ್ವಾಮಿ ತಿಳಿಸಿದ್ದಾರೆ. ಮುದಾಸಿರ್ ಸೇರಿದಂತೆ ಬಹಳಷ್ಟು ಮುಖಂಡರು ಶಾಸಕ ಪ್ರದೀಪ್ ಈಶ್ವರ್ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದರು.
ಕಾಂಗ್ರೆಸ್ ಸಭೆಯಲ್ಲಿ ಗದ್ದಲ ಉಂಟಾಗಿತ್ತು. ಇದರಿಂದ ಬೇಸರಗೊಂಡು ಮಾಜಿ ಸಚಿವ ಶಿವಶಂಕರ ರೆಡ್ಡಿ ಸಭೆಯಿಂದ ಹೊರ ನಡೆದಿದ್ದರು. ಈ ಬೆಳವಣಿಗೆಗಳ ನಂತರ ಮುದಾಸಿರ್ ಅವರನ್ನು ಪಕ್ಷದಿಂದ ಆರು ವರ್ಷ ಉಚ್ಚಾಟಿಸಲಾಗಿತ್ತು. ಆದರೆ ಈ ಬಗ್ಗೆ ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ.ಎಂ.ಸಿ ಸುಧಾಕರ್, ಎಐಸಿಸಿ ಸದಸ್ಯ ರಕ್ಷಾ ರಾಮಯ್ಯ, ಮಹಮದ್ ನಲಪಾಡ್ ಅವರ ಮಧ್ಯಪ್ರವೇಶದಿಂದ ಉಚ್ಚಾಟನೆ ವಾಪಸ್ ಪಡೆಯಲಾಗಿದೆ ಎನ್ನಲಾಗಿದೆ. ಇಷ್ಟೆಲ್ಲಾ ನಡೆಯುತ್ತಿದ್ದರು ಕಾಂಗ್ರೆಸ್ ಹೈಕಮಾಂಡ್ ಮೌನ ಮಾತ್ರ ಹಿರಿಯ ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್-2026) ಪ್ರಕ್ರಿಯೆಯನ್ನು ಜಿಲ್ಲೆಯಲ್ಲಿ ಪೂರ್ಣಗೊಳಿಸಿ, ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಮನೆಮನೆಗೆ ಭೇಟಿ ನೀಡಿ ಪರಿಶೀಲನೆ, ಮತದಾರರ ವಿವರಗಳ ದೃಢೀಕರಣ, ಕರಡು ಮತದಾರರ ಪಟ್ಟಿ ಪ್ರಕಟಣೆ, ಹಕ್ಕು ಮತ್ತು ಆಕ್ಷೇಪಣೆಗಳ ಸ್ವೀಕಾರ ಹಾಗೂ ಅವುಗಳ ವಿಲೇವಾರಿ ಸೇರಿದಂತೆ ವಿವಿಧ ಹಂತಗಳನ್ನು ನಿಗದಿತ ವೇಳಾಪಟ್ಟಿಯಂತೆ ಸಮರ್ಪಕವಾಗಿ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಈ ಹಿಂದೆ ಪ್ರಕಟಿಸಲಾಗಿದ್ದ ಕರಡು ಮತದಾರರ ಪಟ್ಟಿಯಲ್ಲಿ 9,44,623 ಮತದಾರರಿದ್ದರು. ಪರಿಷ್ಕರಣೆ ಪ್ರಕ್ರಿಯೆಯ ಬಳಿಕ ಅ. 27ರಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 9,53,372 ಮತದಾರರು ದಾಖಲಾಗಿದ್ದಾರೆ. ಈ ಮೂಲಕ ಕರಡು ಪಟ್ಟಿಗೆ ಹೋಲಿಸಿದರೆ 8,749 ಮತದಾರರ ಹೆಚ್ಚಳವಾಗಿದೆ ಎಂದು ತಿಳಿಸಿದರು.
ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ 1,91,004, ಬಾಗೇಪಲ್ಲಿ ಕ್ಷೇತ್ರದಲ್ಲಿ 1,85,048, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 1,93,785, ಶಿಡ್ಲಘಟ್ಟ ಕ್ಷೇತ್ರದಲ್ಲಿ 1,86,679 ಹಾಗೂ ಚಿಂತಾಮಣಿ ಕ್ಷೇತ್ರದಲ್ಲಿ 1,96,856 ಮತದಾರರು ಅಂತಿಮ ಪಟ್ಟಿಯಲ್ಲಿ ದಾಖಲಾಗಿದ್ದಾರೆ. ಮತದಾರರ ಪಟ್ಟಿಯಲ್ಲಿನ ಹೆಸರು, ವಿಳಾಸ ಹಾಗೂ ಇತರ ವಿವರಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಕೈಗೊಳ್ಳುವ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸಲಾಗಿದೆ. ಮತದಾರರ ಪಟ್ಟಿಯಲ್ಲಿ ವ್ಯತ್ಯಾಸ ಕಂಡುಬಂದ ಪ್ರಕರಣಗಳನ್ನು ಗುರುತಿಸಿ, ಸಂಬಂಧಪಟ್ಟ ನಿಯಮಗಳನ್ವಯ ಪರಿಶೀಲನೆ ಮತ್ತು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ಅಂತಿಮ ಮತದಾರರ ಪಟ್ಟಿಯ ಪ್ರಕಟಣೆಯೊಂದಿಗೆ ಎಸ್ಐಆರ್-2026ರ ಪರಿಷ್ಕರಣೆ ಪ್ರಕ್ರಿಯೆಯ ಪ್ರಮುಖ ಹಂತ ಪೂರ್ಣಗೊಂಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರಿಗೂ ಮತದಾನದ ಹಕ್ಕು ದೊರೆಯುವ ನಿಟ್ಟಿನಲ್ಲಿ ಮತದಾರರ ಪಟ್ಟಿ ನಿಖರವಾಗಿರುವುದು ಅತ್ಯಂತ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಪ್ರಕ್ರಿಯೆ ಯಶಸ್ವಿಯಾಗಿ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.