ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿಪಿವೈ ಕಣಕ್ಕಿಳಿಸಲು ಒತ್ತಾಯ

By Kannadaprabha NewsFirst Published Jul 21, 2024, 12:28 PM IST
Highlights

 ಗ್ಯಾರಂಟಿ ಹೆಸರಿನಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ದಿನಬೆಳಗಾದರೇ ಬರೀ ಹಗರಣಗಳಲ್ಲೇ ಸಿಲುಕಿ ನರಳಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಆರ್ಥಿಕ ವ್ಯವಸ್ಥೆ ಸಂಪೂರ್ಣವಾಗಿ ಹದಗೆಡುತ್ತಿದೆ ಎಂದು ಬಿಜೆಪಿ ವಕ್ತಾರ ಅಶ್ವತ್ಥ್ ನಾರಾಯಣಗೌಡ ಆರೋಪಿಸಿದರು

 ಚನ್ನಪಟ್ಟಣ :  ಗ್ಯಾರಂಟಿ ಹೆಸರಿನಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ದಿನಬೆಳಗಾದರೇ ಬರೀ ಹಗರಣಗಳಲ್ಲೇ ಸಿಲುಕಿ ನರಳಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಆರ್ಥಿಕ ವ್ಯವಸ್ಥೆ ಸಂಪೂರ್ಣವಾಗಿ ಹದಗೆಡುತ್ತಿದೆ ಎಂದು ಬಿಜೆಪಿ ವಕ್ತಾರ ಅಶ್ವತ್ಥ್ ನಾರಾಯಣಗೌಡ ಆರೋಪಿಸಿದರು.

ನಗರದ ಮಹೇಶ್ವರ ಕನ್ವೆನ್ಷನ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ದುರಾಡಳಿತ, ಭ್ರಷ್ಟಾಚಾರದಿಂದ ಜನರು ಕಂಗಾಲಾಗಿದ್ದಾರೆ. ಇದರ ವಿರುದ್ಧ ಬಿಜೆಪಿಯಿಂದ ನಿರಂತರ ಹೋರಾಟಗಳು ನಡೆಸಬೇಕಿದೆ. ಸರ್ಕಾರದ ದುರಾಡಳಿತ, ಭ್ರಷ್ಟಾಚಾರಗಳನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.

Latest Videos

ದಿನಕ್ಕೊಂದು ಹಗರಣ ಬೆಳಕಿಗೆ:

ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ದಿನಕ್ಕೊಂದು ಹಗರಣ ಬೆಳಕಿಗೆ ಬರುತ್ತಿದೆ. ಜನರ ಬದುಕು ಹಸನುಗೊಳಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಜನರ ಜೀವನ ದುಸ್ತರಗೊಳಿಸಿದೆ. ಕಾಂಗ್ರೆಸ್ ಆಡಳಿತ ವೈಖರಿಯಿಂದ ಜನ ನೆಮ್ಮದಿ ಕಳೆದುಕೊಳ್ಳವಂತಾಗಿದೆ ಎಂದು ಆರೋಪಿಸಿದರು.

ಗೂಂಡಾವರ್ತನೆಯ ಆಡಳಿತ ನಡೆಸುತ್ತಿರುವ ಸರ್ಕಾರಕ್ಕೆ ಯಾವುದೇ ಗೊತ್ತುಗುರಿ ಎಂಬುದು ಇಲ್ಲವಾಗಿದೆ. ಒಂದು ಕಡೆ ಸರ್ಕಾರದ ಖಜಾನೆಯನ್ನು ಲೂಟಿ ಹೊಡೆಯುತ್ತಿದ್ದರೆ, ಮತ್ತೊಂದು ಕಡೆ ಬೆಲೆ ಏರಿಕೆ ಬಿಸಿಯಿಂದ ಜನ ಹೈರಾಣಾಗಿದ್ದಾರೆ. ಕಾಂಗ್ರೆಸ್‌ನಿಂದಾಗ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಜನಸಾಮಾನ್ಯರ ಜೇಬಿಗೆ ಕನ್ನಹಾಕಿ ಹಣ ಲೂಟಿ ಮಾಡುತ್ತಿರುವ ಸರ್ಕಾರದ ವಿರುದ್ಧ ಜನಾಕ್ರೋಶ ಕಟ್ಟೆ ಹೊಡೆಯುವ ದಿನಗಳು ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಲವು ಹಕ್ಕೋತ್ತಾಯ ಮಂಡನೆ:

ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಎನ್.ಆನಂದಸ್ವಾಮಿ ಮಾತನಾಡಿ, ರಾಜ್ಯ ಸರ್ಜಾರದ ವಿರುದ್ಧ ಹೋರಾಟ, ಹಿಂದೂಗಳ ಬಗ್ಗೆ ಹಿಂಸೆ ಎಂದ ರಾಹುಲ್ ಗಾಂಧಿ ವಿರುದ್ಧ ಖಂಡನಾ ನಿರ್ಣಯ, ಮೂರನೇ ಬಾರಿ ಪ್ರಧಾನಿಯಾದ ನರೇಂದ್ರ ಮೋದಿಯವರಿಗೆ ಅಭಿನಂದನೆ, ಮುಂಬರುವ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕ್ಷೇತ್ರವನ್ನು ಉಳಿಸಿಕೊಂಡು ಎನ್‌ಡಿಎ ಅಭ್ಯರ್ಥಿಯಾಗಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನೇ ಕಣಕ್ಕೆ ಇಳಿಸುವುದು ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಜಿಲ್ಲಾ ಬಿಜೆಪಿಯ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಂಡಿಸಿದರು.

ಸಿಪಿವೈ ಎನ್‌ಡಿಎ ಅಭ್ಯರ್ಥಿಯಾಗಲಿ:

ಜಿಲ್ಲಾ ವಿಶೇಷ ಕಾರ್ಯಕಾರಿಣಿಯಲ್ಲಿ ಪ್ರಮುಖವಾಗಿ ಮುಂಬರುವ ಉಪಚುನಾಣೆಯಲ್ಲಿ ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಗೆ ಉಳಿಸಿಕೊಳ್ಳಬೇಕು. ಎನ್‌ಡಿಎ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನು ಕಣಕ್ಕಿಳಿಸಬೇಕು ಎಂದು ಹಕ್ಕೊತ್ತಾಯ ಮಂಡಿಸುತ್ತಿದ್ದಂತೆ ಸಭೆಯಲ್ಲಿದ್ದ ಮುಖಂಡರು ಹಾಗೂ ಪದಾಧಿಕಾರಿಗಳು ಸಭೆಯ ನಿರ್ಣಯವನ್ನು ಅಂಗಿಕರಿಸಿದರು.

ಸಭೆಯಲ್ಲಿ ರಾಷ್ಟ್ರೀಯ ಪರಿಷತ್ ಸದಸ್ಯ ಶಿವಮಾದು, ಜಿಲ್ಲಾ ಪ್ರಭಾರಿ ವಿಜಯ್ ಕುಮಾರ್, ಮುಖಂಡರಾದ ಗೌತಮ್ ಗೌಡ, ಪ್ರಸಾದ್ ಗೌಡ, ನಿಕಟಟಪೂರ್ವ ಅಧ್ಯಕ್ಷ ಹುಲುವಾಡಿ ದೇವರಾಜು, ತಾಲೂಕು ಅಧ್ಯಕ್ಷ ಟಿ.ಎಸ್.ರಾಜು. ನಗರಾಧ್ಯಕ್ಷ ಶಿವು, ಎಲೆಕೇರಿ ರವೀಶ್, ಜಯರಾಂ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

click me!