ಬಿಪಿಎಲ್‌ ಪಡಿತರ ಕಾರ್ಡ್‌ದಾರರಿಗೆ 5 ಲಕ್ಷವರೆಗೆ ಉಚಿತ ಚಿಕಿತ್ಸೆ

By Kannadaprabha NewsFirst Published Jun 30, 2022, 12:30 AM IST
Highlights

*  ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಜಿಲ್ಲಾ ಕುಂದು-ಕೊರತೆ ನಿವಾರಣಾ ಸಭೆ
*  ಪಡಿತರ ಚೀಟಿ ಮತ್ತು ಆಧಾರ್‌ ಕಾರ್ಡ್‌ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ 
*  ಆರೋಗ್ಯ ಕಾರ್ಡ್‌ ಪಡೆಯಲು ಮನವಿ

ವಿಜಯಪುರ(ಜೂ.30):  ಬಿಪಿಎಲ್‌ ಪಡಿತರ ಚೀಟಿದಾರರು ಹಾಗೂ ರಾಷ್ಟ್ರೀಯ ಸ್ವಾಸ್ಥ್ಯ ಬೀಮಾ ಯೋಜನೆಯಲ್ಲಿ ನೋಂದಾಯಿತ ಫಲಾನುಭವಿಗಳಿಗೆ ಒಂದು ವರ್ಷಕ್ಕೆ .5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಜಿಲ್ಲಾ ಕುಂದು-ಕೊರತೆ ನಿವಾರಣಾ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಬಿಪಿಎಲ್‌ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ಟ್ರೀಯ ಸ್ವಾಸ್ಥ್ಯ ಬೀಮಾ ಯೋಜನೆಯಲ್ಲಿ ನೋಂದಾಯಿತ ಫಲಾನುಭವಿಗಳಿಗೆ ಒಂದು ವರ್ಷಕ್ಕೆ .5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯವಿದೆ. ಎಪಿಎಲ್‌ ಕಾರ್ಡುದಾರರು ಅಥವಾ ಬಿಪಿಎಲ್‌ ಕಾರ್ಡ್‌ ಹೊಂದಿಲ್ಲದವರಿಗೆ ಸಹ ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್‌ ದರದ ಶೇ.30ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ .1.50 ಲಕ್ಷ ಇದೆ. ಪಡಿತರ ಚೀಟಿ ಮತ್ತು ಆಧಾರ್‌ ಕಾರ್ಡ್‌ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ ಎಂಬ ವಿಷಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ದಾಖಲಾಗುವ ರೋಗಿಗಳಿಂದ ಯಾವುದೇ ಶುಲ್ಕ ಪಡೆಯಬಾರದು ಎಂದು ಎಲ್ಲ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಸೂಚಿಸಿದರು.

ಪಡಿತರ ಕಳ್ಳಸಾಗಣೆ ತಪ್ಪಿಸಲು ಪ್ರತಿ ಚೀಲಕ್ಕೂ ಚಿಪ್‌..!

ಆರೋಗ್ಯ ಕಾರ್ಡ್‌ ಪಡೆಯಲು ಮನವಿ

ಬಿಪಿಎಲ್‌ ಅಥವಾ ಎಪಿಎಲ್‌ ಕಾರ್ಡ್‌ ಇದ್ದವರು ಸಮೀಪದ ಗ್ರಾಮ ಪಂಚಾಯತಿಗಳಲ್ಲಿ ಅಥವಾ ಗ್ರಾಮ ಒನ್‌ ಕೇಂದ್ರ ಅಥವಾ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ಮಾಡಿ ರೇಷನ್‌ ಕಾರ್ಡ್‌ ಮತ್ತು ಆಧಾರ್‌ ಕಾರ್ಡ್‌ ತೋರಿಸಿ ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಸಭೆಯ ಮೂಲಕ ವಿಜಯಪುರ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್‌ ಶಿಂಧೆ ಮಾತನಾಡಿ, ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಯೋಜನೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದ ಮಹತ್ವದ ಯೋಜನೆಯಾಗಿದ್ದು, ಅರ್ಹ ಫಲಾನುಭವಿಗಳಿಗೆ ಈ ಯೋಜನೆಯಿಂದ ಅನುಕೂಲವಾಗಬೇಕು ಎಂದರು.

ಪ್ರಾಥಮಿಕ ಮತ್ತು ಸಾಮಾನ್ಯ ದ್ವಿತೀಯ ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತದೆ. ದ್ವಿತೀಯ ಕ್ಲಿಷ್ಟಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದಲ್ಲಿ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದರೆ ರೆಫರಲ್‌ ನೀಡಲಾಗುತ್ತದೆ. ರೆಫರಲ್‌ ಪಡೆದುಕೊಂಡ ರೋಗಿಯು ತಾನು ಇಚ್ಚಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ. ಎಲ್‌.ಎಸ್‌.ಲಕ್ಕನ್ನವರ, ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಜಿಲ್ಲಾ ನೋಡಲ್‌ ಅಧಿಕಾರಿ ಡಾ. ಸಂಪತ್‌ ಗುಣಾರಿ ಹಾಗು ವಿವಿಧ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ರೋಗಿಗಳು ಮತ್ತು ಇತರರು ಉಪಸ್ಥಿತರಿದ್ದರು.
 

click me!