ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಕೋಟ್ಯಂತರ ರುಪಾಯಿಗಳ ಅವ್ಯವಹಾರ, ತನಿಖೆಗೆ ಆದೇಶಿಸಿದ ಸರ್ಕಾರ.
ಅಥಣಿ(ಜು.08): ಗ್ರಾಮೀಣ ಶುದ್ಧ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯಿಂದ ತಾಲೂಕಿನ 6 ಗ್ರಾಮಗಳ ಶುದ್ಧ ಕುಡಿಯುವ ನೀರಿನ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆ ಅಧಿಕಾರಿ ಮತ್ತು ಗುತ್ತಿಗೆದಾರ ಸೇರಿಕೊಂಡು ಸುಮಾರು .20 ಕೋಟಿಗಳ ಅವ್ಯವಹಾರ ಮಾಡಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮೀಣ ಶುದ್ಧ ಕುಡಿಯುವ ನೀರಿನ ಯೋಜನೆ ಹಾಗೂ ನೈರ್ಮಲ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಈ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಉನ್ನತವಾದ ತನಿಖೆ ನಡೆಸುತ್ತಿದ್ದು, ತನಿಖೆಯ ನಂತರ ಸತ್ಯತೆ ಹೊರಬರಬೇಕಾಗಿದೆ.
ಅಥಣಿ ಗ್ರಾಮೀಣ ಸಂಕೋನಟ್ಟಿ, ಅನಂತಪುರ, ತೆಲಸಂಗ, ಚಮಕೇರಿ ಮತ್ತು ಬನ್ನೂರ ಗ್ರಾಮಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕಳೆದ 2022ರಲ್ಲಿ ಟೆಂಡರ್ ಪ್ರಕ್ರಿಯೆ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ತಮ್ಮ ಹಿತೈಷಿಗಳಿಗೆ ಕಾಮಗಾರಿಯ ಗುತ್ತಿಗೆ ನೀಡುವ ಮೂಲಕ ಕೋಟ್ಯಂತರ ರುಪಾಯಿಗಳ ಅವ್ಯವಹಾರ ಮಾಡಲಾಗಿದೆ. ಹೆಸರು ಹೇಳಲು ಇಚ್ಛಿಸದ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಅಥಣಿ ತಾಲೂಕಿನ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಅಧಿಕಾರಿ ಮತ್ತು ಕಾಮಗಾರಿಯ ಟೆಂಡರ್ ಪಡೆದುಕೊಂಡ ಗುತ್ತಿಗೆದಾರ ಶಾಮೀಲಾಗಿಯೇ ಈ ಅವ್ಯವಹಾರ ನಡೆಸಿದ್ದಾರೆ. ಪ್ರಭಾವಿ ವ್ಯಕ್ತಿಗಳ ಕುಮ್ಮಕ್ಕಿನಿಂದಲೇ ಈ ಅವ್ಯವಹಾರ ಆಗಿದೆ. ಸೂಕ್ತ ತನಿಖೆಯಾದರೆ ಸತ್ಯತೆ ಹೊರಬರಲಿದೆ ಎನ್ನುತ್ತಾರೆ.
undefined
ಬೆಳಗಾವಿ: ಊರ ಹೆಸರೇ ತಪ್ಪು ಕನ್ನಡಕ್ಕೆ ಅವಮಾನ
ಈ ವ್ಯವಹಾರಕ್ಕೆ ಸಂಬಂಧಿಸಿದಂತೆ ಅಥಣಿ ವಲಯದ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ರವಿಂದ್ರ ಮೂರ್ಗಾಲಿ ಅವರನ್ನು ಸಂಪರ್ಕಿಸಿದಾಗ ಇಲಾಖೆಯಿಂದ ತನಿಖೆ ನಡೆದಿರುವುದು ಸತ್ಯ. ಆದರೆ, ಈ ಬಗ್ಗೆ ಯಾವುದೇ ಮಾಹಿತಿ ನೀಡಲು ಬರುವುದಿಲ್ಲ. ನಮ್ಮ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿರಿ ಎಂದು ಹೇಳುವ ಮೂಲಕ ಜಾರಿಕೊಳ್ಳುವ ಪ್ರಯತ್ನ ಮಾಡಿದರು. ಮೇಲಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಕೇಳಿದರೆ ಅದು ತಮ್ಮ ಹತ್ತಿರ ಇಲ್ಲ ಎನ್ನುವ ಹೇಳುವ ಮೂಲಕ ಹಲವು ಸಂದೇಹಗಳಿಗೆ ಎಡೆ ಮಾಡಿದರು.
ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಬಂದಿರುವ ಯಾವುದೇ ದೂರುಗಳನ್ನು ಹಗುರವಾಗಿ ಪರಿಗಣಿಸಿಲ್ಲ. ಅವುಗಳನ್ನು ತನಿಖೆ ಮಾಡಿಸುವ ಮೂಲಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಅಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರುಪಾಯಿಗಳ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನನಗೆ ಯಾವುದೇ ಮಾಹಿತಿ ಇಲ್ಲ. ಸಂಬಂಧಪಟ್ಟಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ವರದಿಯನ್ನು ಆಧರಿಸಿ ಕ್ರಮ ಕೈಕೊಳ್ಳಲಾಗುವುದು ಅಂತ ಬೆಳಗಾವಿ ಜಿಪಂ ಸಿಇಒ ಹರ್ಷಲ್ ಭೋಯರ್ ಹೇಳಿದ್ದಾರೆ.