ಹಾವೇರಿ ಬಳಿಕ ಮತ್ತೊಂದು ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಸರ್ಕಾರದ ಚಿಂತನೆ; ಮಳೆ ಕೊರತೆ

Published : Jul 05, 2026, 07:58 AM IST
Cloud Seeding

ಸಾರಾಂಶ

ಜಿಲ್ಲೆಯಲ್ಲಿ ಶೇ.29ರಷ್ಟು ಮಳೆ ಕೊರತೆಯಾಗಿದ್ದರೂ, ಇತ್ತೀಚಿನ ಮಳೆಯಿಂದ ಜಲಾಶಯಗಳಿಗೆ ನೀರು ಹರಿದುಬರುತ್ತಿದೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಮಳೆ ಕೈಕೊಟ್ಟರೆ ಸರ್ಕಾರದ ಮಟ್ಟದಲ್ಲಿ ಮೋಡ ಬಿತ್ತನೆ ಬಗ್ಗೆ ತೀರ್ಮಾನಿಸಲಾಗುವುದು ಹಾಗೂ ನಗರದ ರಸ್ತೆ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವುದಾಗಿ ಅವರು ಭರವಸೆ ನೀಡಿದರು.

ಬೆಳಗಾವಿ: ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಈವರೆಗೆ ಶೇ.29ರಷ್ಟು ಮಳೆ ಕೊರತೆ ದಾಖಲಾಗಿದ್ದರೂ, ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಗಳಿಗೆ ಒಳಹರಿವು ಆರಂಭವಾಗಿದೆ. ಮುಂದಿನ ಮೂರು-ನಾಲ್ಕು ದಿನಗಳಲ್ಲೂ ಉತ್ತಮ ಮಳೆಯಾಗುವ ಮುನ್ಸೂಚನೆ ಇದ್ದು, ಇದೇ ರೀತಿ ಮಳೆ ಮುಂದುವರಿದರೆ ಮಳೆ ಕೊರತೆಯೂ ನೀಗಲಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆ ಇಲ್ಲ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾನಗರ ಪಾಲಿಕೆ, ನಗರಸಭೆ ಹಾಗೂ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೇವಲ ಹತ್ತು ಪ್ರದೇಶಗಳಲ್ಲಿ ಮಾತ್ರ ಕುಡಿಯುವ ನೀರಿನ ಸಮಸ್ಯೆ ಇದೆ. ಇದೀಗ ರಕ್ಕಸಕೊಪ್ಪ ಜಲಾಶಯಕ್ಕೂ ನೀರು ಹರಿದು ಬರುತ್ತಿದ್ದು, ಒಂದು ವಾರ ಮಳೆ ಹೀಗೆ ಸುರಿದರೆ, ಜಲಾಶಯಗಳು ಭರ್ತಿಯಾಗುವ ನಿರೀಕ್ಷೆಯಿದೆ. ಇದರಿಂದ ಬೆಳಗಾವಿ ನಗರಕ್ಕೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ತಿಳಿಸಿದರು.

ಸರ್ಕಾರ ಮಟ್ಟದಲ್ಲಿ ಚಿಂತನೆ

ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಪ್ರಮಾಣದಲ್ಲಿ ಬಿತ್ತನೆ ನಡೆದಿದ್ದು, ಈಗ ಸುರಿಯುತ್ತಿರುವ ಮಳೆ ರೈತರಿಗೆ ಆಶಾದಾಯಕವಾಗಿದೆ. ರಾಮದುರ್ಗ, ಸವದತ್ತಿ ಸೇರಿದಂತೆ ಕೆಲ ಭಾಗಗಳಲ್ಲಿ ಇನ್ನೂ ಸಮರ್ಪಕ ಮಳೆಯಾಗದಿದ್ದರೂ, ಅಲ್ಲಿಯೂ ಮುಂದಿನ ಎಂಟು ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಒಂದು ವೇಳೆ ಮಳೆ ಕೈಕೊಟ್ಟರೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಬೆಳೆ ಹಾನಿ ಸಮೀಕ್ಷೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆದರೆ, ಸದ್ಯಕ್ಕೆ ಅಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದ ಅವರು, ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಆರಂಭಿಸಿದಂತೆ ಅಗತ್ಯ ಎನಿಸಿದರೆ, ಇಲ್ಲಿಯೂ ಮೋಡ ಬಿತ್ತನೆ ಕುರಿತು ಸರ್ಕಾರದ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಗರದಲ್ಲಿ ನೀರಿನ ಪೈಪ್‌ಲೈನ್ ಅಳವಡಿಕೆಗಾಗಿ ರಸ್ತೆಗಳನ್ನು ಅಗೆದು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿರುವ ಕುರಿತು ಪ್ರತಿಕ್ರಿಯಿಸಿ, ಇದು ಎಲ್ ಆ್ಯಂಡ್ ಟಿ ಕಂಪನಿಯಿಂದ ಉಂಟಾಗಿರುವ ಸಮಸ್ಯೆ. ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು ಸೇರಿದಂತೆ ಈಗಾಗಲೇ ಹಲವು ಬಾರಿ ಸಭೆ ನಡೆಸಿದ್ದೇವೆ. ಎಲ್ ಆ್ಯಂಡ್‌ ಟಿ ಕಂಪನಿಯವರು ನಾಲ್ಕೈದು ವರ್ಷಗಳಿಂದ ರಸ್ತೆ ಅಗೆದು ಜನರನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ. ರಸ್ತೆಗಳನ್ನು ತಕ್ಷಣ ದುರಸ್ತಿ ಮಾಡಲು ಸೂಚಿಸುತ್ತೇನೆ. ಮಳೆಗಾಲದಲ್ಲಿ ಇಂತಹ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ನಿರ್ದೇಶನ ನೀಡಲಾಗುವುದು. ಮಳೆಯಿಂದ ಜಿಲ್ಲೆಯ ವಿವಿಧೆಡೆ ಹದಗೆಟ್ಟಿರುವ ರಸ್ತೆಗಳನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ದುರಸ್ತಿ ಮಾಡಲಾಗುವುದು. ಮಳೆಗಾಲ ಮುಗಿದ ಬಳಿಕ ಹಂತ ಹಂತವಾಗಿ ಹೊಸ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವುದು. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಬೆಳಗಾವಿ ನಗರದಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ, ತೆರವಿಗೆ ಮುನ್ನ ಸಂಬಂಧಪಟ್ಟವರಿಗೆ ನೋಟಿಸ್ ನೀಡಿ ಅಗತ್ಯ ಸಮಯಾವಕಾಶ ನೀಡುವಂತೆ ಅಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಯಮಕನಮರಡಿಯ ಹುಣಸಿಕೊಳ್ಳಮಠದಲ್ಲಿ ನಡೆದಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರುತಿ ಅಷ್ಟಗಿ ಅವರು ನೀಡಿರುವ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದೊಂದು ಹೊಸದಾಗಿ ಶುರುವಾಗಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಎಲ್ಲದಕ್ಕೂ ನಮ್ಮನ್ನೇ ಹೊಣೆ ಮಾಡುತ್ತಾರೆ. ಮೂಲೆಯಲ್ಲಿ ಎಮ್ಮೆ, ನಾಯಿ ಸತ್ತರೂ ನಮ್ಮನ್ನೇ ದೂರುತ್ತಾರೆ. 2028ರವರೆಗೆ ಇಂತಹ ಆರೋಪಗಳು ಬರುತ್ತಲೇ ಇರುತ್ತವೆ. ಹಲ್ಲೆ ಕುರಿತು ವಿಚಾರವಾಗಿ ಶ್ರೀಸಿದ್ಧಬಸವ ಸ್ವಾಮೀಜಿಯವರ ಹೇಳಿಕೆ ಗಮನಿಸಿದ್ದೇನೆ. ವೈಯಕ್ತಿಕ ಕಾರಣದಿಂದಾಗಿ ಘಟನೆ ನಡೆದಿದೆ. ಕೆಲವರಿಗೆ ಸುಳ್ಳು ಆರೋಪ ಮಾಡುವುದೇ ಕೆಲಸವಾಗಿದೆ ಎಂದು ತಿರುಗೇಟು ನೀಡಿದರು.

ಇನ್ನು, ಸಚಿವ ಸ್ಥಾನ ಯಾರಿಗೆ ನೀಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಸಚಿವ ಸಂಪುಟದಲ್ಲಿ ಇನ್ನೂ ಸುಮಾರು ೨೦ ಸ್ಥಾನಗಳು ಖಾಲಿ ಇದ್ದು, ಆದಷ್ಟು ಬೇಗ ವಿಸ್ತರಣೆ ನಡೆಯುವ ನಿರೀಕ್ಷೆಯಿದೆ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು

PREV
Read more Articles on
click me!

Recommended Stories

KPSC: ಪುತ್ರಿಯರಿಗೆ ಸರ್ಕಾರಿ ಹುದ್ದೆ ಕೊಡಿಸಲು ಸುಳ್ಳು ಪತ್ರ ಕೇಸ್ ಈಗ ರಾಜ್ಯಪಾಲರ ಅಂಗಳದಲ್ಲಿ! ರಾಜೀನಾಮೆ ನೀಡ್ತಾರಾ ಸಾಹುಕಾರ್‌?
Ilakal: ಅಂಧ ಅನಾಥ ಯುವತಿ ಹುಲಿಗೆಮ್ಮಾಳ ಬಾಳಿಗೆ ಬೆಳಕಾದ ನಾಗರಾಜ್; ಅಪರೂಪದ ಮದುವೆ