
ಉತ್ತರ ಕನ್ನಡ (ಜ.04): ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಳಿಯಾಳ ತಾಲೂಕಿನ ಕಾವಲವಾಡ ಗ್ರಾಮದ ಸಮೀಪ ನಡೆದಿದೆ.
ಹಳಿಯಾಳದ ನಿವಾಸಿ ವಿಶಾಲ ಸುರೋಜಿ (28) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ವಿಶಾಲ ಅವರು ಕೆಲಸದ ನಿಮಿತ್ತ ಹಳಿಯಾಳದಿಂದ ಕಲಘಟಗಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಮೃತ ವಿಶಾಲ ಕಾವಲವಾಡ ಗ್ರಾಮದ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ, ಎದುರಿನಿಂದ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಈ ಅವಘಡಕ್ಕೆ ನೇರ ಕಾರಣ ಎಂದು ಹೇಳಲಾಗುತ್ತಿದೆ. ಡಿಕ್ಕಿಯ ರಭಸಕ್ಕೆ ವಿಶಾಲ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಪ್ರಾಣಪಕ್ಷಿ ಹಾರಿಹೋಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಹಳಿಯಾಳ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಟ್ರ್ಯಾಕ್ಟರ್ ಚಾಲಕನಿಗಾಗಿ ಹುಡುಕಾಟ ಮುಂದುವರಿದಿದೆ.