ಪರಿಶಿಷ್ಟ ಪಂಗಡದ ಮೀಸಲಾತಿ ಹಾಗೂ ಇತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಲಕ್ಕಿ ಸಮುದಾಯದ ಜನರು ಮತ್ತೆ ಬೀದಿಗಿಳಿದಿದ್ದಾರೆ. ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮು ಗೌಡ ಹಾಗೂ ತುಳಸಿಗೌಡ ಅವರ ನೇತೃತ್ವದಲ್ಲಿ ಹೋರಾಟ ನಡೆದಿದೆ.
ಭರತ್‌ರಾಜ್ ಕಲ್ಲಡ್ಕ, ಏಷ್ಯಾನೆಟ್ ಸುವರ್ಣ ನ್ಯೂಸ್, ಕಾರವಾರ
ಉತ್ತರ ಕನ್ನಡ (ಜ.25): ಪರಿಶಿಷ್ಟ ಪಂಗಡದ ಮೀಸಲಾತಿ ಹಾಗೂ ಇತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಲಕ್ಕಿ ಸಮುದಾಯದ ಜನರು ಮತ್ತೆ ಬೀದಿಗಿಳಿದಿದ್ದಾರೆ. ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮು ಗೌಡ ಹಾಗೂ ತುಳಸಿಗೌಡ ಅವರ ನೇತೃತ್ವದಲ್ಲಿ ಹೋರಾಟ ನಡೆದಿದ್ದು, ಸಮುದಾಯಕ್ಕೆ ನ್ಯಾಯ ದೊರಕದಿದ್ದಲ್ಲಿ ಮುಂದಿನ ಚುನಾವಣೆಯಲ್ಲಿ ಮತದಾನ ನೋಟಾ ಹಾಕುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತ ಒಂದು ಸ್ಟೋರಿ ಇಲ್ಲಿದೆ ನೋಡಿ.
ಹೌದು! ಸಾಂವಿಧಾನಿಕ ನ್ಯಾಯಕ್ಕಾಗಿ ದಶಕಗಳಿಂದಲೂ ಹೋರಾಟ ನಡೆಸುತ್ತಿರುವ ಉತ್ತರ ನ್ನಡ ಜಿಲ್ಲೆಯ ಹಾಲಕ್ಕಿ ಸಮುದಾಯದ ಜನರು ತಮ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕಲ್ಲದೇ, ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಇಂದು ಮತ್ತೆ ಹೋರಾಟ ನಡೆಸಿದ್ದಾರೆ. ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮು ಗೌಡ ಹಾಗೂ ತುಳಸಿ ಗೌಡ ಅವರ ನೇತೃತ್ವದಲ್ಲಿ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಾಲಕ್ಕಿ ಸಮುದಾಯದ ಜನರು ಧರಣಿ ನಡೆಸುವ ಮೂಲಕ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ.
ಯಾವುದೇ ಅಮಿಷೆಗಳಿಗೆ ಒಳಗಾಗಿ ಬಿಜೆಪಿಗೆ ಹೋಗಿಲ್ಲ: ಸಿದ್ದು ವಿರುದ್ಧ ಸಚಿವ ಬೈರತಿ ಗರಂ
ಹಾಲಕ್ಕಿ ಒಕ್ಕಲಿಗರು ಬುಡಕಟ್ಟು ಸಮುದಾಯಕ್ಕೆ ಸೇರಿದ್ದರೂ ಪರಿಶಿಷ್ಟ ಪಂಗಡದ ಮೀಸಲಾತಿ ನೀಡುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಸಮುದಾಯದ ಸಾಕಷ್ಟು ಮಂದಿ ವಿದ್ಯಾವಂತ ಯುವಕ, ಯುವತಿಯರು ಮೀಸಲಾತಿ ಸಮಸ್ಯೆಯಿಂದಾಗಿ ಹೆಚ್ಚಿನ ಶಿಕ್ಷಣ ಪಡೆದುಕೊಳ್ಳುವುದು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಹಾಲಕ್ಕಿಗರನ್ನು ಎಸ್‌ಟಿಗೆ ಸೇರ್ಪಡೆಗೊಳಿಸಬೇಕೆಂದು ಪದ್ಮಶ್ರೀ ಪುರಸ್ಕೃತರಾದ ಸುಕ್ರಜ್ಜಿ ಹಾಗೂ ತುಳಸಜ್ಜಿ ಒತ್ತಾಯಿಸಿದ್ದಾರೆ. ಈ ಹಿಂದೆ ಕದಂಬ ನೌಕಾನೆಲೆಯಂತಹ ರಾಷ್ಟ್ರದ ಪ್ರತಿಷ್ಠಿತ ಯೋಜನೆಗಳಿಗೆ ಭೂಮಿ ನೀಡಿ ನಿರಾಶ್ರಿತರಾದವರಲ್ಲಿ ಹಾಲಕ್ಕಿ ಒಕ್ಕಲಿಗರ ಸಂಖ್ಯೆ ಹೆಚ್ಚಿದ್ದು, ದೇಶಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿರುವ ಈ ಸಮುದಾಯದ ಬೇಡಿಕೆಯನ್ನು ಸರ್ಕಾರ ಈಡೇರಿಸದಿರುವುದು ಬೇಸರ ಮೂಡಿಸಿದೆ ಎಂದು ಅವರು ಹೇಳಿದರು.
ಇನ್ನು ಅಂಕೋಲಾ ವ್ಯಾಪ್ತಿಯಲ್ಲಿ ಕಿಂಡಿ ಆಣೆಕಟ್ಟೆಯಂತಹ ಯೋಜನೆಗಳಿಗೆ ವಿರೋಧ ವ್ಯಕ್ತಪಡಿಸಿದರೂ ಸರ್ಕಾರ ನಿರ್ಮಾಣ ಮಾಡಲು ಮುಂದಾಗಿದ್ದು, ಮತ್ತೆ ಹಾಲಕ್ಕಿಗರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದೆ. ಈ ಎಲ್ಲಾ ವಿಚಾರಗಳಿಗೆ ಸಂಬಂಧಿಸಿ ಸಾಂಕೇತಿಕವಾಗಿ ಧರಣಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಬೇಡಿಕೆ ಈಡೇರದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಹಾಲಕ್ಕಿ ಒಕ್ಕಲಿಗರು ನೀಡಿದ್ದಾರೆ. ಅಲ್ಲದೇ, ಮುಂದಿನ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಮತ ಹಾಕುವ ಬದಲು ನೋಟಾ ಹಾಕಲು ನಿರ್ಧರಿಸಿದ್ದೇವೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೊಮ್ಮಾಯಿ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ, ಬಿಜೆಪಿ ಮುಂದಿನ ಚುನಾವಣೆಯಲ್ಲಿ ಗೆಲ್ಲಲ್ಲ: ರಣದೀಪ್ ಸುರ್ಜೇವಾಲ
ಹಾಲಕ್ಕಿ ಸಮುದಾಯದ ಪ್ರತಿಭಟನೆ ಬಳಿಕ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಮೂಲಕ ಸರ್ಕಾರಕ್ಕೆ ಹಾಲಕ್ಕಿ ಸಮುದಾಯದವರ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಯಿತು. ಒಟ್ಟಿನಲ್ಲಿ ಪರಿಶಿಷ್ಟ ಪಂಗಡದ ಸೇರ್ಪಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಹಾಲಕ್ಕಿ ಸಮುದಾಯದ ಜನರು ಮತ್ತೆ ಬೀದಿಗಿಳಿದಿದ್ದು, ಚುನಾವಣೆಯ ಮುನ್ನವೇ ತಮ್ಮ ಬೇಡಿಕೆಗಳು ಈಡೇರುವಂತೆ ಆಗ್ರಹಿಸಿದ್ದಾರೆ. ಒಂದು ವೇಳೆ ರಾಜ್ಯ ಸರಕಾರ ಹಾಲಕ್ಕಿ ಸಮುದಾಯದ ಬೇಡಿಕೆ ಈಡೇರಿಸಲು ಮುಂದಾಗದಿದ್ದಲ್ಲಿ ಮುಂದಿನ ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ.