
ಹಾಸನ (ಸೆ.26) ಅತ್ಯಂತ ಪ್ರಸಿದ್ಧ ಹಾಗೂ ಪವಿತ್ರ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ರಾಜ್ಯದ ಮೂಲೆ ಮೂಲೆಗಳಿಂದ, ಇತರ ರಾಜ್ಯಗಳಿಂದಲೂ ಹಾಸನಾನಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುತ್ತಾರೆ. ಜಾತ್ರೆ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಪೂರ್ವಭಾವಿ ಸಭೆ ನಡೆಸಿದ್ದಾರೆ. ಬಳಿಕ ಹಾಸನಾಂಬ ದರ್ಶನೋತ್ಸವದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.
ಹಾಸನದ ಹಿಮ್ಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಶಿವಲಿಂಗೇಗೌಡ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಈ ಬಾರಿ ಅಕ್ಟೋಬರ್ 29 ರಿಂದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ ಆರಂಭಗೊಳ್ಳಲಿದೆ. ನವೆಂಬರ್ 11ರ ವರೆಗೆ ನಡೆಯಲಿದೆ. ಒಟ್ಟು 14 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಪೈಕಿ 12 ದಿನಗಳ ಕಾಲ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಕಳೆದ ವರ್ಷದಂತೆ ಈ ಬಾರಿಯೂ ಅತ್ಯಂತ ಯಶಸ್ವಿಯಾಗಿ ಹಾಸನಾನಂಬ ಜಾತ್ರೆ ಆಯೋಜಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ ಎಂದು ಶಿವಲಿಂಗೇಗೌಡ ಹೇಳಿದ್ದಾರೆ. ಲಕ್ಷಾಂತರ ಭಕ್ತರು ಹಾಸನಾಂಬ ದರ್ಶನಕ್ಕೆ ಆಗಮಿಸುವ ಕಾರಣ ತೀವ್ರ ಮುತುವರ್ಜಿ ವಹಿಸಲು ಸೂಚಿಸಲಾಗಿದೆ. ಸರದಿ ಸಾಲಿನಲ್ಲಿ ಯಾವುದೇ ಅಡೆ ತಡೆಗಳಿಲ್ಲದೆ ಭಕ್ತರು ದರ್ಶನ ಪಡೆಯಲು ನೆರವಾಗುವಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂದಿದ್ದಾರೆ. ಜನಸಂದಣಿ ಹೆಚ್ಚಾಗುವ ಕಾರಣ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಈ ಕುರಿತು ಪೂರ್ವ ಭಾವಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಶಿವಲಿಂಗೇಗೌಡ ಹೇಳಿದ್ದಾರೆ.
ಹಾಸನಾಂಬ ಜಾತ್ರಾ ಮಹೋತ್ಸವದ ಹಿನ್ನಲೆಯಲ್ಲಿ ಟಗರು, ಎತ್ತುಗಳ ಸ್ಪರ್ಧೆ ಆಯೋದಿಸಲಾಗುತ್ತದೆ. ಸೋಬಾನೆ ಪದ, ರಂಗಗೀತೆ, ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಶಿವಲಿಂಗೇಗೌಡ ಹೇಳಿದ್ದಾರೆ. ಗ್ರಾಮೀಣ ಕ್ರೀಡೆಗಳನ್ನು ಆಯೋಜನೆ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದಿದ್ದಾರೆ. ಹಾಸನಾಂಬೆ ಆಶೀರ್ವಾದದಿಂದ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಸಿಕ್ಕಿದೆ. ಇದು ಹಾಸನಾನಂಬೆಯ ಆಶೀರ್ವಾದ ಎಂದು ಶಿವಲಿಂಗೇಗೌಡ ಹೇಳಿದ್ದಾರೆ.